ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಉತ್ಪತ್ತಿಯಾಗುವ ಘನತ್ಯಾಜ್ಯ ನಿರ್ವಹಣೆಗೆ ಪ್ರತ್ಯೇಕ ಕಂಪನಿ ಆರಂಭಿಸಿದೆ. ಆದ್ರೂ ಸಹ ಪಾಲಿಕೆ ತನ್ನ ಬಾಧ್ಯತೆಗಳಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ಹೀಗಾಗಿ ಕಂಪನಿ ಸ್ಥಾಪನೆ ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಗೆ ಆಕ್ಷೇಪಣೆ ಸಲ್ಲಿಸುವಂತೆ ಹೈಕೋರ್ಟ್ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ.
ಘನತ್ಯಾಜ್ಯ ನಿರ್ವಹಣೆ ಮಾಡುವಲ್ಲಿ ಪಾಲಿಕೆ ವಿಫಲವಾಗಿದೆ ಎಂದು ಆರೋಪಿಸಿ 2012ರಲ್ಲಿ ವಿವಿಧ ಸಂಘಸಂಸ್ಥೆಗಳು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್ ಓಕ ನೇತೃತ್ವದ ವಿಭಾಗೀಯ ಪೀಠ ಈ ಅಭಿಪ್ರಾಯ ವ್ಯಕ್ತಪಡಿಸಿದೆ.
ಅರ್ಜಿಗಳ ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು ಪೀಠಕ್ಕೆ ಮಾಹಿತಿ ನೀಡಿ, ಹಾಲಿ ಇರುವ ಅರ್ಜಿಗಳ ಜೊತೆಗೆ ಕಂಪನಿ ಸ್ಥಾಪಿಸುವ ಸರ್ಕಾರದ ಆದೇಶ ಪ್ರಶ್ನಿಸಿ ಹೊಸ ಅರ್ಜಿ ಸಲ್ಲಿಸಲಾಗಿದೆ ಎಂದರು. ಇದಕ್ಕೆ ಪ್ರತಿಕ್ರಿಯಿಸಿದ ಪೀಠ ಕಂಪನಿ ಸ್ಥಾಪಿಸಿದಾಕ್ಷಣ ಬಿಬಿಎಂಪಿ ಹೊಣೆಯಿಂದ ತಪ್ಪಿಸಿಕೊಳ್ಳಲಾಗುವುದಿಲ್ಲ ಎಂದು ರಾಜ್ಯ ಸರ್ಕಾರ ಹಾಗೂ ಬಿಬಿಎಂಪಿಗೆ ನೋಟಿಸ್ ಜಾರಿ ಮಾಡಲು ಆದೇಶಿಸಿತು.
ಬೆಂಗಳೂರು ನಗರದಲ್ಲಿನ ಘನ ತ್ಯಾಜ್ಯ ನಿರ್ವಹಣೆಗೆ ರಾಜ್ಯ ಸರ್ಕಾರ 2021ರ ಮಾರ್ಚ್ 2ರಂದು ಪ್ರತ್ಯೇಕ ಕಂಪನಿ ಸ್ಥಾಪಿಸಲು ಆದೇಶ ಹೊರಡಿಸಿದೆ. ಆದರೆ, ಈ ಆದೇಶದಿಂದ ಹಾಗೂ ಕಂಪನಿ ಸ್ಥಾಪನೆ ಮಾಡುವುದರಿಂದ ಬಿಬಿಎಂಪಿ ತನ್ನ ಜವಾಬ್ದಾರಿಯಿಂದ ತಪ್ಪಿಸಿಕೊಳ್ಳಲು ಬರುವುದಿಲ್ಲ. 2016ರ ಘನ ತ್ಯಾಜ್ಯ ನಿಯಮ ಮತ್ತು ಇತರ ಕಾನೂನುಗಳಡಿ ಪಾಲಿಕೆ ತನ್ನ ಜವಾಬ್ದಾರಿ ನಿರ್ವಹಿಸಲೇಬೇಕಾಗುತ್ತದೆ. ಜತೆಗೆ ನಿಯಮಗಳನ್ನು ಪಾಲನೆ ಮಾಡಲೇಬೇಕಾಗುತ್ತದೆ ಎಂದು ತಿಳಿಸಿ ವಿಚಾರಣೆಯನ್ನು ಆಗಸ್ಟ್ 16ಕ್ಕೆ ಮುಂದೂಡಿತು.
ಇದಕ್ಕೂ ಮುನ್ನ ನಡೆದ ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲ ಅಜೇಶ್ ಕುಮಾರ್ ವಾದಿಸಿ, 2020ರ ಬಿಬಿಎಂಪಿ ಕಾಯ್ದೆಯಲ್ಲೂ ತ್ಯಾಜ್ಯ ನಿರ್ವಹಣೆ ಪಾಲಿಕೆಯ ಪ್ರಮುಖ ಕರ್ತವ್ಯವಾಗಿದೆ. ಆದರೂ ಸಹ ಕಂಪನಿ ಸ್ಥಾಪಿಸಿ, ಹಾಲಿ ತ್ಯಾಜ್ಯ ನಿರ್ವಹಣೆಯಲ್ಲಿರುವ ಸಿಬ್ಬಂದಿ, ಸಾಮಗ್ರಿ ಮತ್ತು ಸಾಧನಗಳನ್ನೂ ಸಹ ಕಂಪನಿಗೆ ವರ್ಗಾವಣೆ ಮಾಡಲು ಮುಂದಾಗಿರುವುದು ಕಾನೂನು ಬಾಹಿರ ಎಂದು ಆರೋಪಿಸಿದರು.