ಬೆಂಗಳೂರು: ಡಿಸೆಂಬರ್ ತಿಂಗಳಲ್ಲಿ ಶಾಲೆಗಳನ್ನು ತೆರೆಯಲು ಸರ್ಕಾರ ಮುಂದಾಗಬಾರದು. ಇದರಿಂದ ಕೋವಿಡ್ ಸಮಸ್ಯೆ ಇನ್ನಷ್ಟು ಹೆಚ್ಚಾಗಲಿದೆ ಎಂದು ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಎಸ್.ಆರ್.ಪಾಟೀಲ್ ಅಭಿಪ್ರಾಯಪಟ್ಟಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಕೋವಿಡ್-19 ಹಿನ್ನೆಲೆ ರಾಜ್ಯದಲ್ಲಿ ಡಿಸೆಂಬರ್ನಲ್ಲೂ ಶಾಲೆಗಳನ್ನು ತೆರೆಯುವುದು ಸೂಕ್ತವಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಡಿ ಕೊವಿಡ್-19 ತಾಂತ್ರಿಕ ಸಲಹಾ ಸಮಿತಿ ರಾಜ್ಯ ಸರ್ಕಾರಕ್ಕೆ ಶಿಫಾರಸು ಮಾಡಿದೆ. ಸಮಿತಿ ಅಧ್ಯಕ್ಷ ಡಾ. ಎಂ.ಕೆ.ಸುದರ್ಶನ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಲಹಾ ಸಮಿತಿ ಸಭೆಯಲ್ಲಿ ಶಾಲೆಗಳನ್ನು ಪುನರಾರಂಭಿಸುವ ಕುರಿತು ಚರ್ಚೆಯಾಗಿದ್ದು, ಡಿಸೆಂಬರ್ನಲ್ಲಿ ಶಾಲೆ ತೆರೆಯುವುದು ಸೂಕ್ತವಲ್ಲ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ ಎಂದಿದ್ದಾರೆ.
ಚಳಿಗಾಲದಲ್ಲಿ ಕೋವಿಡ್ ಸೋಂಕು ಹರಡುವಿಕೆ ಹಾಗೂ ಶ್ವಾಸಕೋಶಕ್ಕೆ ಸಂಬಂಧಿಸಿದ ರೋಗಗಳು ತೀವ್ರವಾಗಿ ಬಾಧಿಸುತ್ತವೆ. ಸೆಪ್ಟೆಂಬರ್ನಲ್ಲಿ ನಡೆದ ಸರ್ವೆ ಪ್ರಕಾರ, ರಾಜ್ಯದ ಕೆಲ ಜಿಲ್ಲೆಗಳಲ್ಲಿ ಸೋಂಕು ಹೆಚ್ಚಾಗುವ ಸಾಧ್ಯತೆಯಿದೆ. ಈ ಎಲ್ಲಾ ಅಂಶಗಳ ಹಿನ್ನೆಲೆಯಲ್ಲಿ ಡಿಸೆಂಬರ್ನಲ್ಲಿ ಶಾಲೆಗಳನ್ನು ಆರಂಭಿಸುವುದು ಸೂಕ್ತವಲ್ಲ ಎಂಬ ಅಭಿಪ್ರಾಯ ಸಭೆಯಲ್ಲಿ ಕೇಳಿ ಬಂದಿದೆ. ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಈ ಅಭಿಪ್ರಾಯವನ್ನೇ ಸರ್ಕಾರಕ್ಕೆ ಶಿಫಾರಸು ಮಾಡಲಾಗಿದೆ ಎಂದಿದ್ದಾರೆ.
ಡಿಸೆಂಬರ್ ಕೊನೆಯ ವಾರದಲ್ಲಿ ಕೋವಿಡ್ ಪರಿಸ್ಥಿತಿ ನೋಡಿಕೊಂಡು ಶಾಲೆಗಳನ್ನು ತೆರೆಯಲು ಮತ್ತೆ ನಿರ್ಧಾರ ಕೈಗೊಳ್ಳಬಹುದು ಎಂದು ಸಭೆಯಲ್ಲಿ ಅಭಿಪ್ರಾಯಪಡಲಾಗಿದೆ.
ಆಂಧ್ರ ಪ್ರದೇಶ ಹಾಗೂ ತೆಲಂಗಾಣದಲ್ಲಿ ಶಾಲೆಗಳನ್ನು ತೆರೆಯಲಾಗಿದ್ದು, ವಿದ್ಯಾರ್ಥಿಗಳಲ್ಲಿ ಕೊರೋನಾ ಸೋಂಕು ಹೆಚ್ಚಾಗಿದೆ. ಇನ್ನು ದೆಹಲಿ, ಹರಿಯಾಣ, ಗುಜರಾತ್ ರಾಜ್ಯಗಳಲ್ಲಿ ಮತ್ತೆ ಶಾಲೆಗಳನ್ನು ಮುಚ್ಚಲಾಗಿದೆ. ಹೀಗಾಗಿ ಕೋವಿಡ್-19 ತಾಂತ್ರಿಕ ಸಲಹಾ ಸಮಿತಿಯ ಶಿಫಾರಸಿಗೆ ಒಪ್ಪಿಗೆ ಸೂಚಿಸುವ ಮೂಲಕ ರಾಜ್ಯ ಸರ್ಕಾರ ಮಕ್ಕಳ ಹಿತಾಸಕ್ತಿ ಕಾಪಾಡಬೇಕು ಎಂದು ಆಗ್ರಹಿಸುತ್ತೇನೆ ಎಂದು ಹೇಳಿದ್ದಾರೆ.