ಬೆಂಗಳೂರು: ಕೋವಿಡ್-19 ಚಿಕಿತ್ಸೆಗೆ ಖಾಸಗಿ ಆಸ್ಪತ್ರೆಗಳಲ್ಲಿ ದರ ನಿಗದಿ ಮಾಡುವ ಕುರಿತು ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರವಾಗಲಿದೆ ಎಂದು ಆರೋಗ್ಯ ಸಚಿವ ಶ್ರೀರಾಮುಲು ಸ್ಪಷ್ಟಪಡಿಸಿದ್ದಾರೆ.
ದರ ನಿಗದಿ ವಿಚಾರ ನಿನ್ನೆಯ ಟಾಸ್ಕ್ ಫೋರ್ಸ್ ಸಭೆಯಲ್ಲಿ ಚರ್ಚೆ ಆಗಿದೆ. ಈ ವೇಳೆ ಬೇರೆ ರಾಜ್ಯಗಳ ಖಾಸಗಿ ಆಸ್ಪತ್ರೆಗಳಲ್ಲಿ ಇರುವ ದರಗಳ ಬಗ್ಗೆ ಕೂಡ ಪರಿಶೀಲಿಸಿದ್ದೇವೆ. ಈ ಬಗ್ಗೆ ಸಿಎಂ ಗಮನಕ್ಕೂ ತಂದಿದ್ದೇವೆ. ಮುಂದಿನ ಕ್ಯಾಬಿನೆಟ್ ಸಭೆಯಲ್ಲಿ ಚರ್ಚಿಸಿ ತೀರ್ಮಾನ ಮಾಡೋಣ ಎಂದು ಸಿಎಂ ಹೇಳಿದ್ದಾರೆ ಎಂದು ತಿಳಿಸಿದರು.
ಮುಖ್ಯಮಂತ್ರಿ ತೀರ್ಮಾನ ತೆಗೆದುಕೊಳ್ಳುವವರೆಗೆ ದರ ನಿಗದಿ ಅಧಿಕೃತ ನಿರ್ಧಾರ ಆಗುವುದಿಲ್ಲ. ಖಾಸಗಿ ಆಸ್ಪತ್ರೆಗಳು ಹೇಳಿರುವ ದರವನ್ನು ಸಿಎಂಗೆ ಹೇಳಿದ್ದೇವೆ. ಅದು ಅವರ ಬೇಡಿಕೆ ಆಗಿದೆ. ಆದರೆ ರಾಜ್ಯ ಸರ್ಕಾರ ಇನ್ನೂ ತೀರ್ಮಾನ ತೆಗೆದುಕೊಂಡಿಲ್ಲ. ಎಷ್ಟು ದರ ನಿಗದಿ ಮಾಡಬೇಕು ಅಂತಾ ಸಿಎಂ ಮತ್ತು ಸಚಿವ ಸಂಪುಟ ತೀರ್ಮಾನ ತೆಗೆದುಕೊಳ್ಳಲಿದೆ ಎಂದು ಪತ್ರಿಕಾ ಹೇಳಿಕೆ ಮೂಲಕ ತಿಳಿಸಿದ್ದಾರೆ.
ಕೊರೊನಾ ಚಿಕಿತ್ಸೆಗೆ ಖಾಸಗಿ ಆಸ್ಪತ್ರೆಗಳ ದರ ನಿಗದಿ ಸಂಬಂಧ ಮಾಧ್ಯಮಗಳಲ್ಲಿ ಸುದ್ದಿ ಪ್ರಸಾರವಾಗುತ್ತಿರುವ ಹಿನ್ನೆಲೆಯಲ್ಲಿ ಸಚಿವರು ಈ ಸ್ಪಷ್ಟೀಕರಣ ನೀಡಿದ್ದಾರೆ. ದರ ನಿಗದಿ ಆಗಿಲ್ಲ. ಕೇವಲ ಚರ್ಚೆ ನಡೆದಿದೆ ಎಂದು ವಿವರಣೆ ನೀಡಿ ಖಾಸಗಿ ಆಸ್ಪತ್ರೆಗಳ ದುಬಾರಿ ದರ ನಿಗದಿ ಗೊಂದಲಕ್ಕೆ ತೆರೆ ಎಳೆದಿದ್ದಾರೆ.