ಬೆಂಗಳೂರು: ಎಸ್ಎಸ್ಎಲ್ಸಿ ಪೂರ್ವ ಸಿದ್ಧತಾ ಪರೀಕ್ಷೆಯ ದ್ವಿತೀಯ ಭಾಷೆ ಇಂಗ್ಲಿಷ್ ಪ್ರಶ್ನೆಪತ್ರಿಕೆ ವಾಟ್ಸಪ್ನಲ್ಲಿ ಹರಿದಾಡುತ್ತಿರುವ ಬಗ್ಗೆ ಪ್ರೌಢ ಶಿಕ್ಷಣ ಮಂಡಳಿ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗಿದೆ ಎಂದು ತಿಳಿಸಿದೆ.
ಕಾನೂನು ಬಾಹಿರವಾಗಿ ಅಕ್ರಮಗಳಲ್ಲಿ ಪಾಲ್ಗೊಂಡವರು ಮತ್ತು ಇದಕ್ಕೆ ಸಹಕರಿಸುವವರು ವಿದ್ಯಾರ್ಥಿಗಳಾಗಿರಲಿ, ಶಿಕ್ಷಕರಾಗಿರಲಿ, ಹೊರ ವ್ಯಕ್ತಿಗಳಾಗಲಿ ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ಕಾನೂನಿನಲ್ಲಿರುವ ಅವಕಾಶಗಳನ್ನು ಬಳಸಿಕೊಂಡು ಕಟ್ಟುನಿಟ್ಟಿನ ನಿರ್ದಾಕ್ಷಿಣ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು. ಈಗಾಗಲೇ ಎಚ್ಚರಿಕೆ ಸುತ್ತೋಲೆ ಹೊರಡಿಸಲಾಗಿದೆ.
ಅದಾಗ್ಯೂ ಈ ರೀತಿ ಪ್ರಶ್ನೆ ಪತ್ರಿಕೆಯನ್ನು ವಾಟ್ಸಪ್ನಲ್ಲಿ ಹರಿಬಿಟ್ಟಿರುವುದು ಕಂಡುಬಂದಿದ್ದು ಪೊಲೀಸ್ ಠಾಣೆಯಲ್ಲಿ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗಿದೆ ಎಂದು ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಮಾಹಿತಿ ನೀಡಿದೆ. ಇನ್ನು ಈಗಾಗಲೇ ಪರೀಕ್ಷೆಗಳನ್ನು ಪ್ರಕಟಿಸಿರುವ ವೇಳಾಪಟ್ಟಿಯಂತೆ ಪರೀಕ್ಷೆ ನಡೆಸಲಾಗುತ್ತದೆ. ಪ್ರಶ್ನೆಪತ್ರಿಕೆಗಳು ಸೋರಿಕೆಯಾಗದಂತೆ ಜಿಲ್ಲಾ ಉಪ ನಿರ್ದೇಶಕರು ತಮ್ಮ ವ್ಯಾಪ್ತಿಯಲ್ಲಿ ಬರುವ ಶಿಕ್ಷಕರಿಗೆ ಸೂಕ್ತ ನಿರ್ದೇಶನ ನೀಡುವಂತೆ ಸೂಚಿಸಲಾಗಿದೆ. ಇಂತಹ ಪ್ರಕರಣಗಳು ಕಂಡುಬಂದಲ್ಲಿ ಅಂತಹವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ.
ಇನ್ನು 14,689 ಶಾಲೆಗಳ ಪೈಕಿ ರಾಜ್ಯ ಪ್ರೌಢ ಶಾಲಾ ಮುಖ್ಯೋಪಾಧ್ಯಾಯರ ಸಂಘದಿಂದ ನಡೆಸುತ್ತಿರುವ ಶಾಲೆಗಳನ್ನು ಹೊರತುಪಡಿಸಿ ಉಳಿದ 2123 ಶಾಲೆಗಳಲ್ಲಿ ಮಾತ್ರ ಮಂಡಳಿ ವತಿಯಿಂದ ಪೂರ್ವ ಸಿದ್ಧತಾ ಪರೀಕ್ಷೆ ನಡೆಯುತ್ತಿದೆ ಹಾಗೂ ಈ ಪರೀಕ್ಷೆಯು ಶಾಲಾ ಹಂತದಲ್ಲಿ ನಡೆಯುತ್ತಿದ್ದು, ಇದು ಅಭ್ಯಾಸದ ಪರೀಕ್ಷೆ ಆಗಿರುವುದರಿಂದ ಈ ಬಗ್ಗೆ ಪೋಷಕರು, ವಿದ್ಯಾರ್ಥಿಗಳು ಆತಂಕ ಪಡುವ ಅಗತ್ಯವಿಲ್ಲವೆಂದು ಪರೀಕ್ಷಾ ಮಂಡಳಿ ತಿಳಿಸಿದೆ.
*ಪ್ರಶ್ನೆ ಪತ್ರಿಕೆ ಸೋರಿಕೆಗೆ ಕ್ಯಾಮ್ಸ್ ಅಸಮಾಧಾನ*
ಇನ್ನು ಪ್ರಶ್ನೆಪತ್ರಿಕೆ ಸೋರಿಕೆ ಸಂಬಂಧ ಕ್ಯಾಮ್ಸ್ (ಖಾಸಗಿ ಅನುದಾನ ರಹಿತ ಶಾಲೆಗಳ ರಾಜ್ಯ ಸಂಘಟನೆ) ಪ್ರಧಾನ ಕಾರ್ಯದರ್ಶಿ ಶಶಿಕುಮಾರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪೂರ್ವ ಸಿದ್ಧತಾ ಪರೀಕ್ಷೆಯಲ್ಲೇ ಹೀಗೆ ಆದರೆ ಹೇಗೆ ಎಂದು ಪ್ರಶ್ನೆ ಮಾಡಿದ್ದಾರೆ. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು. ನಿರ್ಲಕ್ಷ್ಯ ತೋರದಂತೆ ಮನವಿ ಮಾಡಿದ್ದಾರೆ. ವರ್ಷವಿಡೀ ಪಾಠ ಮಾಡಿ, ಕೊನೆ ಕ್ಷಣದಲ್ಲಿ ಮಕ್ಕಳ ಮನಸ್ಸು ಬೇರೆಡೆ ಹೋಗುತ್ತದೆ. ಹೀಗಾಗಿ ಈ ರೀತಿ ಆಗದಂತೆ ಎಚ್ಚರ ವಹಿಸುವಂತೆ ಸಲಹೆ ನೀಡಿದ್ದಾರೆ.