ಬೆಂಗಳೂರು: ಎಸ್ಎಸ್ಎಲ್ಸಿ ಪರೀಕ್ಷೆಯ ಐದನೇ ದಿನವಾದ ಇಂದು ಸಮಾಜವಿಜ್ಞಾನ ಪರೀಕ್ಷೆ ಸಾಮಾಜಿಕ ಅಂತರದೊಂದಿಗೆ ಸುರಕ್ಷಿತ ವಾತಾವರಣದಲ್ಲಿ ಉತ್ತಮವಾಗಿ ನಡೆದಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ.
ಈವರೆಗೆ ಕಂಟೇನ್ಮೆಂಟ್ ಝೋನ್ನಲ್ಲಿದ್ದ 31 ಪರೀಕ್ಷಾ ಕೇಂದ್ರಗಳನ್ನ ಬದಲಾವಣೆ ಮಾಡಲಾಗಿದೆ. ಕೋವಿಡ್ ಸೋಂಕಿನಿಂದಾಗಿ ಈವರೆಗೆ 32 ಮಕ್ಕಳು ಪರೀಕ್ಷೆಗೆ ಹಾಜರಾಗಲು ಆಗದ ಕಾರಣ ಅವರಿಗೆ ಪೂರಕ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗಿದೆ.
ಪರೀಕ್ಷೆ ನಂತರ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಸಚಿವರು, ಸಮಾಜವಿಜ್ಞಾನ ಪರೀಕ್ಷೆಗೆ ನೋಂದಾಯಿತ 7,84,287 ವಿದ್ಯಾರ್ಥಿಗಳ ಪೈಕಿ 7,68,341 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಒಟ್ಟಾರೆ ಶೇ. 97.96ರಷ್ಟು ಇಂದು ಹಾಜರಾತಿ ಇದೆ. 15,946 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ ಎಂದು ತಿಳಿಸಿದ್ದಾರೆ.
ಈ ವಿಷಯದ ಕಳೆದ 2018-19ನೇ ಸಾಲಿಗೆ 7,77858 ವಿದ್ಯಾರ್ಥಿಗಳ ಪೈಕಿ 7,68,374 ವಿದ್ಯಾರ್ಥಿಗಳು ಹಾಜರಾಗಿದ್ದು, 9484 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದರು ಎಂದು ಮಾಹಿತಿ ನೀಡಿದ್ದಾರೆ.
ಮೊದಲ ಬಾರಿಗೆ 7,45,070 ಶಾಲಾ ವಿದ್ಯಾರ್ಥಿಗಳು ಹಾಗೂ 20,991 ಖಾಸಗಿ ವಿದ್ಯಾರ್ಥಿಗಳು ಪರೀಕ್ಷೆ ತೆಗೆದುಕೊಂಡಿದ್ದಾರೆ. ಕಂಟೇನ್ಮೆಂಟ್ ಪ್ರದೇಶಗಳ 3363 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಕೋವಿಡೇತರ ಅನಾರೋಗ್ಯ ಕಾರಣಗಳಿಂದ ವಿಶೇಷ ಕೊಠಡಿಗಳಲ್ಲಿ 613 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಪರೀಕ್ಷಾ ಅಕ್ರಮಗಳಲ್ಲಿ ಭಾಗಿಯಾದ ಯಾವುದೇ ಪ್ರಕರಣಗಳು ನಡೆದಿಲ್ಲ ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ.
ಸರ್ಕಾರಿ/ಖಾಸಗಿ ವಸತಿ ನಿಲಯಗಳಲ್ಲಿ ಇದ್ದ 1442 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ನೆರೆ ರಾಜ್ಯಗಳಿಂದ 645 ವಿದ್ಯಾರ್ಥಿಗಳು ಪರೀಕ್ಷೆ ಬರೆಯಬೇಕಿದ್ದು, 52 ವಿದ್ಯಾರ್ಥಿಗಳು ಗೈರುಹಾಜರಾಗಿ, 593ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. 12,644 ವಲಸೆ ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿದ್ದು, 12,541 ವಿದ್ಯಾರ್ಥಿಗಳು ಹಾಜರಾಗಿದ್ದರೆ, 103 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ ಎಂದು ಸುರೇಶ್ ಕುಮಾರ್ ತಿಳಿಸಿದ್ದಾರೆ.
ಹೋಮ್ ಕ್ವಾರಂಟೈನಲ್ಲಿರುವ ಹಾಗೂ ಕೋವಿಡ್ ಪಾಸಿಟಿವ್ ಎಂದು ಗುರುತಿಸಲಾದ ವಿದ್ಯಾರ್ಥಿಗಳಿಗೆ ಈಗಿನ ಪರೀಕ್ಷೆಯನ್ನು ಬರೆಯುವುದರಿಂದ ವಿನಾಯ್ತಿ ನೀಡಲಾಗಿದೆ. ಈ ಎಲ್ಲರಿಗೂ ಸಕಾರಣದ ಆಧಾರದ ಮೇಲೆ ಮುಂದಿನ ಪೂರಕ ಪರೀಕ್ಷೆಯಲ್ಲಿ ಅವಕಾಶ ನೀಡುವ ವ್ಯವಸ್ಥೆ ಮಾಡಲಾಗುವುದು. ಪರೀಕ್ಷಾ ಕೇಂದ್ರಕ್ಕೆ 3,212 ಬಸ್ ಹಾಗೂ ಇತರೆ ವಾಹನಗಳನ್ನು ಒಪ್ಪಂದದ ಮೇರೆಗೆ ಪಡೆದು ಯಾವುದೇ ಸಮಸ್ಯೆಯಾಗದ ರೀತಿಯಲ್ಲಿ ಸಾರಿಗೆ ಸೌಲಭ್ಯ ಒದಗಿಸಲಾಗಿದೆ ಎಂದು ಸಚಿವರು ವಿವರಿಸಿದ್ದಾರೆ.