ಬೆಂಗಳೂರು: ರಾಜ್ಯದಲ್ಲಿ ಇಂದು 204 ಹೊಸ ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು, ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆಯಬೇಕಿದ್ದ ವಿದ್ಯಾರ್ಥಿಗೂ ಸೋಂಕು ತಗುಲಿದೆ.
ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಕಾಮನಕೆರೆ ಸರ್ಕಾರಿ ಪ್ರೌಢ ಶಾಲೆಯ ವಿದ್ಯಾರ್ಥಿ 15 ವರ್ಷದ ಬಾಲಕನಲ್ಲಿ ಸೋಂಕು ಕಾಣಿಸಿಕೊಂಡಿದೆ. ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಸಿದ್ಧವಾಗುತ್ತಿದ್ದ ಬಾಲಕನಿಗೆ ಯಾವುದೇ ಸೋಂಕಿತರ ಸಂಪರ್ಕ ಇಲ್ಲದಿದ್ದರೂ ಕೊರೊನಾ ಕಾಣಿಸಿಕೊಂಡಿರುವುದ ಆತಂಕ ಹೆಚ್ಚಿಸಿದೆ.
ಈತನ ಪ್ರಾಥಮಿಕ ಸಂಪರ್ಕದಲ್ಲಿದ್ದ 55 ಜನರನ್ನು ಕ್ವಾರಂಟೈನ್ ಮಾಡಲಾಗಿದೆ. ಜೂ. 25ರಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಶುರುವಾಗಲಿದ್ದು, ಸೋಂಕಿತ ವಿದ್ಯಾರ್ಥಿ ಗುಣಮುಖನಾದರೆ ಪ್ರತ್ಯೇಕ ಕೊಠಡಿಯಲ್ಲಿ ಕೂರಿಸಿ ಪರೀಕ್ಷೆ ಬರೆಸಲಾಗುವುದು. ಇಲ್ಲವಾದಲ್ಲಿ ಜುಲೈನಲ್ಲಿ ನಡೆಯಲಿರುವ ಪೂರಕ ಪರೀಕ್ಷೆ ಸಮಯದಲ್ಲಿ ಪರೀಕ್ಷೆ ಬರೆಯಲು ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಜಿಲ್ಲಾಧಿಕಾರಿಗಳು ಹೇಳಿದ್ದಾರೆ.
ರಾಜ್ಯದಲ್ಲಿ ಇಂದೂ ಕೂಡ ಕೊರೊನಾ ಅಟ್ಟಹಾಸ ಮುಂದುವರೆದಿದ್ದು, 204 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. ಮೂವರು ರೋಗಿಗಳು ಮಹಾಮಾರಿಗೆ ಬಲಿಯಾಗಿದ್ದಾರೆ. ರಾಜ್ಯದಲ್ಲಿ ಒಟ್ಟು ಸಾವಿನ ಸಂಖ್ಯೆ 72ಕ್ಕೆ ಏರಿಕೆಯಾಗಿದ್ದು, ಕೊರೊನಾ ಪೀಡಿತರ ಸಂಖ್ಯೆ 6,345ಕ್ಕೆ ತಲುಪಿದೆ.
ಯಾದಗಿರಿ ಜಿಲ್ಲೆಯಲ್ಲಿ ಇಂದು ಬರೋಬ್ಬರಿ 66 ಮಂದಿಗೆ ಸೋಂಕು ಕಾಣಿಸಿಕೊಂಡಿದೆ. ಕಳೆದೆರಡು ದಿನಗಳಿಂದಲೂ ಯಾವುದೇ ಪ್ರಕರಣ ಕಾಣಿಸಿಕೊಳ್ಳದ ಉಡುಪಿ ಜಿಲ್ಲೆಯಲ್ಲಿ ಮತ್ತೆ 22 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಈವರೆಗೆ 2,976 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, 10 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂದು ಪತ್ತೆಯಾಗಿರುವ ಪ್ರಕರಣಗಳಲ್ಲಿ 157 ಮಂದಿ ಅಂತಾರಾಜ್ಯ ಪ್ರಯಾಣದ ಹಿನ್ನೆಲೆ ಹೊಂದಿದ್ದಾರೆ.