ಬೆಂಗಳೂರು: ಪ್ರಸಕ್ತ ಸಾಲಿನ ಎಸ್ಎಸ್ಎಲ್ಸಿ ಪೂರಕ ಪರೀಕ್ಷೆಯ ವೇಳಾಪಟ್ಟಿಯನ್ನು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಪ್ರಕಟಿಸಿದೆ. ಜೂನ್ 27 ರಿಂದ ಜುಲೈ 4ರವರೆಗೆ ಪೂರಕ ಪರೀಕ್ಷೆ ನಡೆಯಲಿದೆ. ಪೂರಕ ಪರೀಕ್ಷೆಗೆ ನೋಂದಾಯಿಸಿಕೊಂಡಿರುವ ವಿದ್ಯಾರ್ಥಿಗಳು ಪ್ರವೇಶ ಪತ್ರಗಳನ್ನು ಮಂಡಳಿ ವೆಬ್ಸೈಟ್ ಮೂಲಕ ಡೌನ್ ಲೋಡ್ ಮಾಡಿಕೊಳ್ಳಬಹುದು. ಇಲ್ಲವೇ ಶಾಲಾ ಆಡಳಿತ ಮಂಡಳಿ ಪ್ರವೇಶ ಪತ್ರವನ್ನು ಡೌನ್ ಲೋಡ್ ಮಾಡಿ ವಿದ್ಯಾರ್ಥಿಗಳಿಗೆ ವಿತರಿಸಬಹುದು ಎಂದು ತಿಳಿಸಲಾಗಿದೆ.
ಪ್ರಸಕ್ತ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷಾ ಫಲಿತಾಂಶ ಮೇ 19ರಂದು ಪ್ರಕಟವಾಗಿತ್ತು. ಶೇ. 85.63% ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಈ ಬಾರಿ ಹುಡುಗಿಯರೇ ಮೇಲುಗೈ ಸಾಧಿಸಿದ್ದಾರೆ. ಹುಡುಗರು 81.30% ಉತ್ತೀರ್ಣರಾಗಿದ್ದರು. ಪರೀಕ್ಷೆ ಬರೆದ 8 ಲಕ್ಷದ 53 ಸಾವಿರದ 436 ವಿದ್ಯಾರ್ಥಿಗಳ ಪೈಕಿ, ಈ ಬಾರಿ 7 ಲಕ್ಷದ 30 ಸಾವಿರದ 881 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. 145 ವಿದ್ಯಾರ್ಥಿಗಳು 625 ಕ್ಕೆ 625 ಅಂಕಗಳನ್ನು ಪಡೆದು ಅತ್ಯುತ್ತಮ ಸಾಧನೆ ಮಾಡಿದ್ದಾರೆ.
ಇದನ್ನೂ ಓದಿ: ಮಂಗಳೂರು: ನದಿಯಲ್ಲಿ ಸ್ಟ್ಯಾಂಡ್ ಅಪ್ ಪೆಡಲ್ ಮೇಲೆ ನಿಂತು ಯೋಗಾಸನ
ಉಚಿತ ಬಸ್ ಸೇವೆ: ಎಸ್ಎಸ್ಎಲ್ಸಿ ಪೂರಕ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ರಾಜ್ಯ ರಸ್ತೆ ಸಾರಿಗೆ ನಿಗಮದ ವಾಹನಗಳಲ್ಲಿ ಉಚಿತ ಪ್ರಯಾಣದ ಅವಕಾಶವನ್ನ ಕಲ್ಪಿಸಲಾಗಿದೆ. ಜೂ. 27 ರಿಂದ ಜು.4 ರವರೆಗೆ ಎಲ್ಲಾ ವಿದ್ಯಾರ್ಥಿಗಳು ಈ ಅವಕಾಶವನ್ನು ಸದ್ಬಳಕೆ ಮಾಡಿಕೊಳ್ಳಬಹುದಾಗಿದೆ. 2021- 22ನೇ ಸಾಲಿನಲ್ಲಿ ವಿತರಿಸಿರುವ ಪಾಸ್ಗಳನ್ನು ಬಳಸಿ ಅಥವಾ ಪರೀಕ್ಷಾ ಪ್ರವೇಶ ಪತ್ರವನ್ನು ಪರಿಗಣಿಸಿ, ಪರೀಕ್ಷಾ ಕೇಂದ್ರಗಳವರೆಗೆ ನಿಗಮದ ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅನುಮತಿಸುವಂತೆ ಸಾರಿಗೆ ನಿಗಮ ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರು ಕೋರಿದ್ದರು. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಈ ಅವಕಾಶ ಕಲ್ಪಿಸಲಾಗಿದೆ ಎಂದು ರಾಜ್ಯ ರಸ್ತೆ ಸಾರಿಗೆ ನಿಗಮ ತಿಳಿಸಿದೆ.
ವಿದ್ಯಾರ್ಥಿಗಳು ಎಸ್.ಎಸ್.ಎಲ್.ಸಿ ಪೂರಕ ಪರೀಕ್ಷೆಯ ಪ್ರವೇಶ ಪತ್ರವನ್ನು ತೋರಿಸಿ, ನಿಗಮದ ನಗರ, ಹೊರವಲಯ, ಸಾಮಾನ್ಯ ಹಾಗೂ ವೇಗದೂತ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಪಡೆಯಲಿದ್ದಾರೆ.