ಬೆಂಗಳೂರು : ಉಡುಪಿಯ ಶಿರೂರು ಮಠಕ್ಕೆ ಅಪ್ರಾಪ್ತನನ್ನು ಪೀಠಾಧಿಪತಿಯಾಗಿ ನೇಮಕ ಮಾಡಿರುವ ಕ್ರಮ ಪ್ರಶ್ನಿಸಿ ಸಲ್ಲಿಸಿರುವ ಅರ್ಜಿ ಸಂಬಂಧ ಹೈಕೋರ್ಟ್, ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಸೇರಿದಂತೆ ಎಲ್ಲ ಪ್ರತಿವಾದಿಗಳಿಗೆ ನೋಟಿಸ್ ಜಾರಿ ಮಾಡಿದೆ.
ಅಪ್ರಾಪ್ತ ಬಾಲಕನನ್ನು ಪೀಠಾಧಿಪತಿಯಾಗಿ ನೇಮಿಸಿರುವ ಕ್ರಮ ಪ್ರಶ್ನಿಸಿ ಮಠದ ಭಕ್ತ ಸಮಿತಿಯ ಕಾರ್ಯದರ್ಶಿ ಪಿ.ಲತವ್ಯ ಆಚಾರ್ಯ ಹಾಗೂ ಇತರ 4 ಮಂದಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್ ಓಕ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು. ಕೆಲ ಕಾಲ ಅರ್ಜಿದಾರರ ಪರ ವಕೀಲರ ವಾದ ಆಲಿಸಿದ ಪೀಠ, ರಾಜ್ಯ ಸರ್ಕಾರ, ರಾಜ್ಯ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಇಲಾಖೆ ಆಯುಕ್ತ, ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ, ಸೋದೆ ವಾದಿರಾಜ ಮಠದ ವಿಶ್ವವಲ್ಲಭ ತೀರ್ಥ ಸ್ವಾಮೀಜಿ ಸೇರಿದಂತೆ ಎಲ್ಲ ಪ್ರತಿವಾದಿಗಳಿಗೆ ನೋಟಿಸ್ ಜಾರಿ ಮಾಡಿತು.
ಅರ್ಜಿದಾರರ ಕೋರಿಕೆ
ಶಿರೂರು ಮಠಕ್ಕೆ ಪೀಠಾಧಿಪತಿಯಾಗಿ ಬಾಲಕನನ್ನು ನೇಮಿಸಲಾಗಿದೆ. ಈ ರೀತಿ ಅಪ್ರಾಪ್ತರನ್ನು ನೇಮಿಸುವುದು ಕಾನೂನು ಬಾಹಿರ. ಶಿರೂರು ಮಠದ ಆಡಳಿತಾತ್ಮಕ, ಆರ್ಥಿಕ, ಆಧ್ಯಾತ್ಮಿಕ ಹಾಗೂ ಧಾರ್ಮಿಕ ವಿಚಾರಗಳಿಗೆ ಸಂಬಂಧಿಸಿದಂತೆ ಸೋದೆ ಮಠಕ್ಕೆ ಯಾವುದೇ ಅಧಿಕಾರವಿಲ್ಲ. ಹೀಗಿದ್ದೂ, ಸೋದೆ ಮಠದ ವಿಶ್ವವಲ್ಲಭ ತೀರ್ಥ ಸ್ವಾಮೀಜಿಗಳು ಬಾಲಕನನ್ನು ಪೀಠಾಧಿಪತಿಯಾಗಿ ನೇಮಕ ಮಾಡಿರುವುದು ಕಾನೂನು ಬಾಹಿರ ಕ್ರಮ. ಹೀಗಾಗಿ, ಶಿರೂರು ಮಠದ ಪೀಠಾಧಿಪತಿ ಸ್ಥಾನಕ್ಕೆ ಯಾವುದೇ ವ್ಯಕ್ತಿಯನ್ನು ನೇಮಕ ಮಾಡಲು ಸೋದೆ ಮಠದ ವಿಶ್ವವಲ್ಲಭ ತೀರ್ಥ ಸ್ವಾಮೀಜಿ ಅವರಿಗೆ ಅಧಿಕಾರವಿಲ್ಲ ಎಂದು ಘೋಷಿಸಬೇಕು. ಜತೆಗೆ ಅಪ್ರಾಪ್ತರನ್ನು ಶಿರೂರು ಮಠದ ಪೀಠಾಧಿಪತಿಯಾಗಿ ನೇಮಕ ಮಾಡಿರುವುದು ಕಾನೂನುಬಾಹಿರ ಕ್ರಮವೆಂದು ಘೋಷಿಸಬೇಕು ಎಂದು ಅರ್ಜಿದಾರರು ಕೋರಿದ್ದಾರೆ.
ಇದನ್ನು ಓದಿ:ಶಿರೂರು ಮಠಕ್ಕೆ ಬಾಲ ಪೀಠಾಧಿಪತಿ ನೇಮಕ ಪ್ರಕರಣ : ಸರ್ಕಾರ ಮೂಕ ಪ್ರೇಕ್ಷಕನಾಗಬಾರದೆಂದ ಹೈಕೋರ್ಟ್