ಬೆಂಗಳೂರು: 2021ನೇ ಸಾಲಿನ ಮುಂಗಾರು ಋತುವಿನ ಜುಲೈ ತಿಂಗಳಲ್ಲಿ ಸುರಿದ ಧಾರಾಕಾರ ಮಳೆಯಿಂದ ಕೆಲ ಜಿಲ್ಲೆಗಳು ಸಂಕಷ್ಟ ಅನುಭವಿಸಿದ್ದವು. ಈ ಹಿನ್ನೆಲೆಯಲ್ಲಿ ರಾಜ್ಯದ 13 ಜಿಲ್ಲೆಗಳ 61 ತಾಲೂಕುಗಳನ್ನು 'ಅತಿವೃಷ್ಟಿ-ಪ್ರವಾಹ ಪೀಡಿತ ತಾಲೂಕುಗಳು' ಎಂದು ಸರ್ಕಾರ ಘೋಷಣೆ ಮಾಡಿದೆ.
ಜುಲೈ ತಿಂಗಳಲ್ಲಿ ಕರ್ನಾಟಕ ರಾಜ್ಯದಲ್ಲಿ ಬಿದ್ದಂತಹ ಮಹಾಮಳೆಗೆ ಹಾಗೂ ಕೃಷ್ಣ ಜಲಾಶಯ ತುಂಬಿ ಹರಿದ ಪರಿಣಾಮ ಉತ್ತರ ಕರ್ನಾಟಕದ ಹಲವು ಭಾಗಗಳಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿತ್ತು. ಇದೇ ಅವಧಿಯಲ್ಲಿ ರಾಜ್ಯದ ಕರಾವಳಿ ಮತ್ತು ಮಲೆನಾಡಿನ ಜಿಲ್ಲೆಗಳಲ್ಲಿಯೂ ಪ್ರವಾಹ ಪರಿಸ್ಥಿತಿ ಉಂಟಾಗಿ ಅಪಾರ ಪ್ರಮಾಣದ ಹಾನಿ ಸಂಭವಿಸಿತ್ತು.ಈ ಹಿನ್ನೆಲೆಯಲ್ಲಿ ಸರ್ಕಾರ ಈ ಘೋಷಣೆ ಮಾಡಿದೆ.
ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರವು ಪ್ರಸಕ್ತ ಸಾಲಿನ ಮುಂಗಾರು ಋತುವಿನಲ್ಲಿ ರಾಜ್ಯದ 13 ಜಿಲ್ಲೆಗಳ 61 ತಾಲೂಕುಗಳಲ್ಲಿ ಅತಿವೃಷ್ಟಿ ಹಾಗೂ ನದಿಗಳು ಉಕ್ಕಿ ಹರಿದಿರುವುದರಿಂದ ಪ್ರವಾಹ ಪರಿಸ್ಥಿತಿ ಉಂಟಾಗಿದೆ ಎಂದು ತಿಳಿಸಿದೆ.
ಅತಿವೃಷ್ಟಿ -ಪ್ರವಾಹ ಪೀಡಿತ ತಾಲೂಕುಗಳು ಎಂದು ಘೋಷಿಸಿದ ತಾಲೂಕುಗಳಲ್ಲಿ SDRF/NDRF ಮಾರ್ಗಸೂಚಿ ಪ್ರಕಾರ ಹಾಗೂ ಪರಿಹಾರ ಕಾರ್ಯಗಳಿಗೆ ಸರ್ಕಾರದಿಂದ ಹೊರಡಿಸಲಾದ ಆದೇಶ / ಸುತ್ತೋಲೆಗಳಲ್ಲಿನ ನಿರ್ದೇಶನಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಜಿಲ್ಲಾಡಳಿತವು ಅಗತ್ಯ ಪರಿಹಾರ ಕಾರ್ಯಗಳನ್ನು ಕೈಗೊಳ್ಳಬೇಕು ಎಂದು ಆದೇಶಿಸಿದೆ.