ಬೆಂಗಳೂರು: ಈ ಬಾರಿಯ ವರಮಹಾಲಕ್ಷ್ಮಿ ಹಬ್ಬದಂದು ಮುಜರಾಯಿ ವ್ಯಾಪ್ತಿಯ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ನೆರವೇರಿಸಿ, ದೇವಾಲಯಗಳಿಗೆ ಆಗಮಿಸುವ ಮಹಿಳೆಯರಿಗೆ ಉತ್ತಮ ಗುಣಮಟ್ಟದ ಕಸ್ತೂರಿ ಅರಿಶಿಣ-ಕುಂಕುಮ ಮತ್ತು ಹಸಿರು ಬಳೆಗಳನ್ನು ಗೌರವ ಸೂಚಕವಾಗಿ ನೀಡಬೇಕೆಂದು ಸುತ್ತೋಲೆ ಹೊರಡಿಸಲಾಗಿದೆ.
ಭಾರತೀಯ ಸಂಸ್ಕೃತಿಯಲ್ಲಿ ಮಹಿಳೆಯರಿಗೆ ಮಹತ್ವಪೂರ್ಣ ಸ್ಥಾನ ನೀಡಿ ಗೌರವಿಸಲಾಗುತ್ತದೆ. ಪ್ರತಿ ವರ್ಷ ಶ್ರೀ ವರಮಹಾಲಕ್ಷ್ಮಿ ವ್ರತ, ಸ್ವರ್ಣಗೌರಿ ವ್ರತ ಮತ್ತು ನವರಾತ್ರಿಗಳಲ್ಲೀಯೂ ಸಹ ಸ್ತ್ರೀ ದೇವತೆಯನ್ನು ಪೂಜಿಸಿ ಆರಾಧಿಸಲಾಗುತ್ತದೆ. ವರಮಹಾಲಕ್ಷ್ಮಿ ವ್ರತದ ದಿನದಂದು ಮಹಿಳೆಯರು ಮನೆಯಲ್ಲಿ ಪೂಜೆಯನ್ನು ನೆರವೇರಿಸಿ ದೇವಾಲಯಗಳಿಗೆ ಭೇಟಿ ನೀಡಿ ದೇವರ ಪ್ರಸಾದ ಸ್ವೀಕರಿಸುವ ಸಂಪ್ರದಾಯವಿದೆ. ಈ ಸಂಪ್ರದಾಯಕ್ಕೆ ಮತ್ತಷ್ಟು ಇಂಬು ನೀಡುವ ಹಾಗೂ ರಾಜ್ಯದ ಮುಜರಾಯಿ ದೇವಸ್ಥಾನಗಳ ವತಿಯಿಂದ ಮಹಿಳೆಯರಿಗೆ ವಿಶೇಷವಾಗಿ ಮಂಗಳದ್ರವ್ಯಗಳನ್ನು ಹಾಗೂ ಹಸಿರು ಬಳೆಗಳನ್ನು ನೀಡುವುದರ ಮೂಲಕ ಗೌರವಿಸಬೇಕು ಎನ್ನುವ ಉದ್ದೇಶದಿಂದ ಇತ್ತೀಚೆಗೆ ನಡೆದ ರಾಜ್ಯ ಧಾರ್ಮಿಕ ಪರಿಷತ್ತಿನ ಸಭೆಯಲ್ಲಿ ಅಧಿಕಾರಿಗಳಿಗೆ ಸೂಚಿಸಲಾಗಿತ್ತು.
ಈ ಹಿನ್ನೆಲೆಯಲ್ಲಿ ಸುತ್ತೋಲೆಯನ್ನು ಹೊರಡಿಸಲಾಗಿದ್ದು, ಲಕೋಟೆಯಲ್ಲಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಮಾಡಲಾಗಿರುವ 6 ಹಸಿರು ಬಳೆಗಳು ಹಾಗೂ ಕಸ್ತೂರಿ ಅರಿಶಿಣ-ಕುಂಕುಮವನ್ನು ವಿತರಿಸಬೇಕು ಎಂದು ದೇವಾಲಯದ ಅಧಿಕಾರಿಗಳಿಗೆ ತಿಳಿಸಲಾಗಿದೆ.
ಇದನ್ನೂ ಓದಿ: ಹರ್ ಘರ್ ತಿರಂಗಾ ಅದ್ಭುತ ಪರಿಕಲ್ಪನೆ, ಅದನ್ನು ಸಾಕಾರಗೊಳಿಸುವಲ್ಲಿ ಸರ್ಕಾರ ತಪ್ಪು ಮಾಡಿದೆ: ರಂಗಕರ್ಮಿ ಪ್ರಸನ್ನ