ಬೆಂಗಳೂರು: ಖಾಸಗಿ ಲೇವಾದೇವಿದಾರರಿಂದ ಪಡೆದು ಸಾಲ ತೀರಿಸಲಾಗದೆ ಆತ್ಮಹತ್ಯೆಗೆ ಶರಣಾದ ರೈತಾಪಿ ಕುಟುಂಬಗಳಿಗೆ ಪರಿಹಾರ ನೀಡಲು ಸಾಧ್ಯವಿಲ್ಲ ಎಂಬ ಸರ್ಕಾರದ ಹೇಳಿಕೆಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಹೈಕೋರ್ಟ್, ಈ ಬಗ್ಗೆ ನಿಲುವು ಸ್ಪಷ್ಟಪಡಿಸಿ ಪ್ರಮಾಣಪತ್ರ ಸಲ್ಲಿಸುವಂತೆ ಮುಖ್ಯ ಕಾರ್ಯದರ್ಶಿಗೆ ನಿರ್ದೇಶಿಸಿದೆ.
ಯಾದಗಿರಿ ಜಿಲ್ಲೆಯ ಶಹಾಪುರ ರೈತರಿಗೆ ಪ್ರಧಾನಮಂತ್ರಿ ಫಸಲ್ ವಿಮಾ ಯೋಜನೆಯಡಿ ಬೆಳೆ ನಷ್ಟ ವಿಮೆ ಪರಿಹಾರ ಸಿಕ್ಕಿಲ್ಲ ಎಂದು ಆರೋಪಿಸಿ, ಅಖಂಡ ಕರ್ನಾಟಕ ರೈತ ಸಂಘ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ. ಎಸ್. ಓಕ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.
ಈ ವೇಳೆ ಕೃಷಿ ಇಲಾಖೆ ಆಯುಕ್ತ ಬ್ರಿಜೇಶ್ ಕುಮಾರ್ ದೀಕ್ಷಿತ್ ಸಲ್ಲಿಸಿದ ಪ್ರಮಾಣಪತ್ರ ಪರಿಶೀಲಿಸಿದ ಪೀಠ ತೀವ್ರ ಅಸಮಾಧಾನ ವ್ಯಕ್ತಪಡಿಸಿತು. ಸಾಲ ಮರು ಪಾವತಿಸಲಾಗದೆ ಆತ್ಮಹತ್ಯೆ ಮಾಡಿಕೊಂಡ ರೈತರ ಕುಟುಂಬಗಳಿಗೆ ಪರಿಹಾರ ನೀಡಬೇಕು. ಆದರೆ, ಖಾಸಗಿ ಲೇವಾದೇವಿದಾರರಿಂದ ಸಾಲ ಮಾಡಿದ ರೈತರಿಗೆ ಪರಿಹಾರ ನೀಡಲು ಅವಕಾಶವಿಲ್ಲ ಎಂಬ ಸರ್ಕಾರದ ವಾದ ಒಪ್ಪಲು ಸಾಧ್ಯವಿಲ್ಲ. ಖಾಸಗಿ ಲೇವಾದೇವಿದಾರರ ಬಳಿ ಹೋಗುವ ಸ್ಥಿತಿ ರೈತರಿಗೆ ಬಂದಿದ್ದಾರೂ ಹೇಗೆ ಎಂಬುದನ್ನು ಸರ್ಕಾರ ಯೋಚಿಸಬೇಕಲ್ಲವೇ ಎಂದು ಪ್ರಶ್ನಿಸಿತು. ಹಾಗೆಯೇ ಈ ಬಗ್ಗೆ ನಿಲುವು ಸ್ಪಷ್ಟಪಡಿಸಿ ಮೂರು ವಾರಗಳಲ್ಲಿ ಪ್ರಮಾಣಪತ್ರ ಸಲ್ಲಿಸುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ನಿರ್ದೇಶಿಸಿತು.
ಇದನ್ನೂ ಓದಿ: ರೈತರ ವಿರುದ್ಧ ಅವಹೇಳನ ಟ್ವೀಟ್: ಕಂಗನಾ ವಿರುದ್ಧದ ಪ್ರಕರಣಕ್ಕೆ ತಡೆ ನೀಡಲು ಹೈಕೋರ್ಟ್ ನಿರಾಕರಣೆ
ಅಲ್ಲದೇ, ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನಲ್ಲಿ 2016ರಿಂದ 2020-21ರವರೆಗೆ 125 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದು, ಆ ಪೈಕಿ 105 ರೈತರ ಕುಟುಂಬಗಳನ್ನು ಪರಿಹಾರಕ್ಕೆ ಆಯ್ಕೆ ಮಾಡಲಾಗಿದೆ. 20 ಕುಟುಂಬಗಳು ಅನರ್ಹ ಎಂದು ಗುರುತಿಸಲಾಗಿದೆ. ಈ ಬಗ್ಗೆಯೂ ಸರ್ಕಾರ ವಿವರಣೆ ನೀಡಬೇಕು ಎಂದು ನಿರ್ದೇಶಿಸಿ, ವಿಚಾರಣೆಯನ್ನು ಮಾ.29ಕ್ಕೆ ಮುಂದೂಡಿತು.
ಸರ್ಕಾರದ ವರದಿ: ಸರ್ಕಾರದ ಪರ ವಕೀಲರು ಸಲ್ಲಿಸಿದ ಪ್ರಮಾಣ ಪತ್ರದಲ್ಲಿ, ಸಾರ್ವಜನಿಕ ಸ್ವಾಮ್ಯದ ಬ್ಯಾಂಕುಗಳು ಮತ್ತು ಸಹಕಾರಿ ಹಣಕಾಸು ಸಂಸ್ಥೆಗಳಿಂದ ಸಾಲ ಪಡೆದುಕೊಂಡ ರೈತರು ಸಾಲ ಮರುಪಾವತಿಸಲಾಗದೆ ಆತ್ಮಹತ್ಯೆ ಮಾಡಿಕೊಂಡಿದ್ದರೆ. ಅಂತಹ ಕುಟುಂಬಗಳಿಗೆ ಸರ್ಕಾರದ 2015ರ ನೀತಿಯಂತೆ ತಲಾ 5 ಲಕ್ಷ ರೂ. ಪರಿಹಾರ ನೀಡಲಾಗುತ್ತದೆ. ಆದರೆ ‘ಖಾಸಗಿ ಲೇವಾದೇವಿದಾರರಿಂದ ರೈತರು ಸಾಲ ಪಡೆದುಕೊಳ್ಳುವುದನ್ನು ತಡೆಯುವುದು ಅಥವಾ ಮತ್ತು ನಿರ್ಬಂಧಿಸುವುದು ಸರ್ಕಾರದ ನಿಯಂತ್ರಣದಲ್ಲಿ ಇಲ್ಲ. ಆದ್ದರಿಂದ ಇಂತಹ ಪ್ರಕರಣಗಳಲ್ಲಿ ಪರಿಹಾರ ನೀಡುವ ಬಗ್ಗೆ ನಿರ್ಧಾರ ತೆಗೆದುಕೊಳ್ಳುವುದು ಸಾಧ್ಯವಾಗುತ್ತಿಲ್ಲ’ ಎಂದು ಉಲ್ಲೇಖಿಸಲಾಗಿದೆ.