ಬೆಂಗಳೂರು: ಇಂದು ದಕ್ಷಿಣ ಒಳನಾಡಿನಲ್ಲಿ ಹಲವು ಕಡೆ ಮಳೆಯಾಗಿದ್ದು, ಕರಾವಳಿ ಹಾಗೂ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಕೆಲವು ಕಡೆ ಮಾತ್ರ ಮಳೆಯಾಗಿದೆ ಎಂದು ಹವಾಮಾನ ಇಲಾಖೆಯ ಪ್ರಾದೇಶಿಕ ವಿಭಾಗದ ನಿರ್ದೇಶಕರಾದ ಸಿ.ಎಸ್ ಪಾಟೀಲ್ ತಿಳಿಸಿದ್ದಾರೆ.
ಹಾಸನದಲ್ಲಿ 7 ಸೆಂ.ಮೀ, ಕೃಷ್ಣರಾಜಸಾಗರ 5 ಸೆಂ.ಮೀ, ಸೋಮವಾರಪೇಟೆ ಹಾಗೂ ಬೆಂಗಳೂರಿನಲ್ಲಿ 4 ಸೆಂ.ಮೀ ಮಳೆಯಾಗಿದೆ. 24ಗಂಟೆಗಳ ಒಳಗಾಗಿ ಬಂಗಾಳ ಉಪಸಾಗರದಲ್ಲಿ ವಾಯುಭಾರ ಕುಸಿತ ಉಂಟಾಗಲಿದೆ. ಇದರ ಪ್ರಭಾವದಿಂದ ಕರಾವಳಿ ಜಿಲ್ಲೆಗಳಲ್ಲಿ ಅ. 19 ರಿಂದ 23 ರವರೆಗೆ ಬಹುತೇಕ ಎಲ್ಲಾ ಕಡೆ ಮಳೆಯಾಗಲಿದೆ. ಉ.ಕನ್ನಡ, ಉಡುಪಿ, ದ.ಕನ್ನಡ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿಯೂ ಅ. 19 ರಿಂದ 22 ರವರೆಗೆ ಕೆಲ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.
ಶಿವಮೊಗ್ಗ, ಚಿಕ್ಕಮಂಗಳೂರು, ಹಾಸನ, ಕೊಡಗು, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ಬೆಳಗಾವಿ, ಕಲ್ಬುರ್ಗಿ, ಯಾದಗಿರಿ, ಬೀದರ್, ವಿಜಯಪುರ, ರಾಯಚೂರು, ಬಾಗಲಕೋಟೆ, ಕೊಪ್ಪಳದಲ್ಲಿ, ಜಿಲ್ಲೆಗಳಲ್ಲಿ ಅ 19 ರಿಂದ 22 ರಂದು ಭಾರಿ ಮಳೆ ಬೀಳುವ ಸಾಧ್ಯತೆ ಇದ್ದು ಯೆಲ್ಲೋ ಅಲರ್ಟ್ ನೀಡಲಾಗಿದೆ. ಅಲ್ಲದೇ ಬೆಂಗಳೂರಿನಲ್ಲಿ ಇಂದು ಮತ್ತು ನಾಳೆ ಕೆಲವು ಕಡೆ ಭಾರೀ ಮಳೆ ಹಾಗೂ ಕೆಲವು ಕಡೆ ಹಗುರ ಮಳೆಯಾಗಲಿದೆ ಎಂದು ಸಿ.ಎಸ್ ಪಾಟೀಲ್ ತಿಳಿಸಿದರು.
ಮೀನಿಗಾರರಿಗೆ ಎಚ್ಚರಿಕೆ: ಕರಾವಳಿ ಭಾಗದಲ್ಲಿ ಗಾಳಿಯ ವೇಗ ಹೆಚ್ಚಿರುವುದರಿಂದ ಮೀನುಗಾರರಿಗೆ ಅ. 21,22,23 ರಂದು ಸಮುದ್ರಕ್ಕಿಳಿಯದಂತೆ ಎಚ್ಚರಿಸಲಾಗಿದೆ.