ಬೆಂಗಳೂರು: ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧ ಹಾಗು ಪರವಾಗಿ ಬಹಿರಂಗ ಹೇಳಿಕೆ ನೀಡಿರುವ ಶಾಸಕರ ವಿರುದ್ಧ ಕ್ರಮ ಕೈಗೊಳ್ಳುವಂತೆ ರಾಜ್ಯ ಶಿಸ್ತು ಸಮಿತಿ, ಕೇಂದ್ರದ ಶಿಸ್ತು ಸಮಿತಿಗೆ ಶಿಫಾರಸು ಮಾಡಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಲಿಂಗರಾಜ್ ಪಾಟೀಲ್ ಅಧ್ಯಕ್ಷತೆಯ ರಾಜ್ಯ ಬಿಜೆಪಿ ಶಿಸ್ತು ಸಮಿತಿಯು ಕಳೆದ ಒಂದು ತಿಂಗಳಿಂದ ಹೇಳಿಕೆಗಳನ್ನು ನೀಡುತ್ತಿರುವ ಶಾಸಕರು ಸಚಿವರ ವಿರುದ್ಧ ಶಿಸ್ತು ಕ್ರಮಕ್ಕೆ ಶಿಫಾರಸು ಮಾಡಿದೆ ಎನ್ನಲಾಗ್ತಿದೆ.
ನಾಯಕತ್ವದ ವಿರುದ್ಧ ಹೇಳಿಕೆ ನೀಡುತ್ತಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಅರವಿಂದ್ ಬೆಲ್ಲದ್, ಸಚಿವ ಸಿ.ಪಿ. ಯೋಗೀಶ್ವರ್, ವಿಧಾನ ಪರಿಷತ್ ಸದಸ್ಯ ಹೆಚ್. ವಿಶ್ವನಾಥ್ ಹಾಗು ಸಿಎಂ ಪರ ಹೇಳಿಕೆ ನೀಡುವ ಜೊತೆ ಶಾಸಕರ ಸಹಿ ಸಂಗ್ರಹದ ಮೂಲಕ ಶಿಸ್ತು ಉಲ್ಲಂಘನೆ ಮಾಡಿದ್ದಕ್ಕೆ ಎಂ.ಪಿ. ರೇಣುಕಾಚಾರ್ಯ, ಶಾಸಕಾಂಗ ಸಭೆ ಕರೆಯುವಂತೆ ಬಹಿರಂಗವಾಗಿ ಸಾಮಾಜಿಕ ಜಾಲತಾಣದ ಮೂಲಕ ಬೇಡಿಕೆ ಇರಿಸಿ ಸರ್ಕಾರ ಮತ್ತು ಪಕ್ಷಕ್ಕೆ ಮುಜುಗರವನ್ನುಂಟು ಮಾಡಿದ್ದಕ್ಕಾಗಿ ಸುನೀಲ್ ಕುಮಾರ್ ವಿರುದ್ಧ ಶಿಸ್ತು ಕ್ರಮಕ್ಕೆ ಶಿಫಾರಸು ಮಾಡಿದೆ ಎನ್ನಲಾಗುತ್ತಿದೆ.
ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರಿಗೂ ಶಿಸ್ತು ಸಮಿತಿ ಮನವಿ ಮಾಡಿದೆ ಎಂದು ತಿಳಿದುಬಂದಿದೆ.