ಬೆಂಗಳೂರು : ನಮ್ಮ ಗ್ರಾಮ ನಮ್ಮ ರಸ್ತೆ ಯೋಜನೆಯಡಿ ಗ್ರಾಮೀಣ ಭಾಗದ ರಸ್ತೆಗಳ ಸುಧಾರಣೆಗೆ ಸರ್ಕಾರ ತ್ವರಿತ ಕ್ರಮಗಳನ್ನು ಕೈಗೊಂಡಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ ಎಸ್ ಈಶ್ವರಪ್ಪ ವಿಧಾನಸಭೆಯಲ್ಲಿ ತಿಳಿಸಿದರು.
ಇಂದು ಪ್ರಶ್ನೋತ್ತರ ವೇಳೆ ಶಾಸಕ ಸುಕುಮಾರ ಶೆಟ್ಟಿ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ರಾಜ್ಯದಲ್ಲಿ ಒಟ್ಟು ಎರಡು ಲಕ್ಷ ಗ್ರಾಮೀಣ ರಸ್ತೆಗಳಿವೆ. ಇದರಲ್ಲಿ ಈಗಾಗಲೇ ಒಂದೂವರೆ ಲಕ್ಷ ರಸ್ತೆಗೆ ಡಾಂಬರೀಕರಣ ಮಾಡಲಾಗಿದೆ. ಉಳಿದಿರುವ ರಸ್ತೆಗಳನ್ನ ಹಂತ ಹಂತವಾಗಿ ಅಭಿವೃದ್ದಿಪಡಿಸಲಾಗುವುದು ಎಂದು ಹೇಳಿದರು.
ಗ್ರಾಮೀಣ ಸಡಕ್ ಯೋಜನೆಯಡಿ ಅನುದಾನದ ಲಭ್ಯತೆ ಮೇಲೆ ರಸ್ತೆಗಳ ಅಭಿವೃದ್ದಿಗೆ ಒತ್ತು ನೀಡಲಾಗಿದೆ. ನಮ್ಮ ಗ್ರಾಮ ನಮ್ಮ ರಸ್ತೆ ಯೋಜನೆಗೆ ರಾಜ್ಯ ಸರ್ಕಾರ, ಜಿಲ್ಲಾ ಪಂಚಾಯತ್ ಹಾಗೂ ವಿವಿಧ ಸಂಸ್ಥೆಗಳಡಿ ರಸ್ತೆಗಳ ಡಾಂಬರೀಕರಣ ಮತ್ತಿತರ ಕಾಮಗಾರಿಗಳನ್ನು ನಡೆಸುತ್ತಿದ್ದೇವೆ. ಉಡುಪಿ ಜಿಲ್ಲೆ ಬೈಂದೂರು ತಾಲೂಕಿನಲ್ಲೂ ವಿವಿಧ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ ಎಂದರು.
ಈ ವೇಳೆ ವಿಧಾನಸಭೆ ಉಪಾಧ್ಯಕ್ಷ ಆನಂದ್ ಮಾಮನಿ ಮಾತನಾಡಿ, ನನ್ನ ಮತ ಕ್ಷೇತ್ರದಲ್ಲಿ ಕಳೆದ ಐದು ವಷಗಳಿಂದ ರಸ್ತೆಗಳ ಅಭಿವೃದ್ದಿಗೆ ಅನುದಾನ ಬಿಡುಗಡೆಯಾಗಿಲ್ಲ. ಹೀಗಾಗಿ, ಅನುದಾನವನ್ನು ಬಿಡುಗಡೆ ಮಾಡಬೇಕೆಂದು ಮನವಿ ಮಾಡಿದರು.
ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯಗಳನ್ನು ಮಂಜೂರು ಮಾಡಿ : ತುಮಕೂರಿನಲ್ಲಿ ಎರಡು ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯಗಳನ್ನು ಮಂಜೂರು ಮಾಡಬೇಕೆಂದು ಶಾಸಕ ಜ್ಯೋತಿ ಗಣೇಶ್ ಅವರು, ಸಮಾಜಕಲ್ಯಾಣ ಸಚಿವರಿಗೆ ಮನವಿ ಮಾಡಿದರು.
ಇದಕ್ಕೆ ಉತ್ತರಿಸಿದ ಸಚಿವ ಕೋಟ ಶ್ರೀನಿವಾಸ್ ಪೂಜಾರಿ, ಪ್ರಸಕ್ತ ಆರ್ಥಿಕ ವರ್ಷದಲ್ಲಿ ಅನುದಾನದ ಲಭ್ಯತೆ ನೋಡಿಕೊಂಡು ಸೂಕ್ತ ಕ್ರಮ ವಹಿಸುವುದಾಗಿ ಭರವಸೆ ನೀಡಿದರು.
ಇದನ್ನೂ ಓದಿ: ನಿಲುವಳಿ ಸೂಚನೆ ಮಂಡನೆ ವೇಳೆ ಪ್ರತಿಪಕ್ಷ-ಆಡಳಿತ ಪಕ್ಷದ ಮಾತಿನ ವಾಗ್ವಾದ : ನಿಲುವಳಿ ತಿರಸ್ಕರಿಸಿದ ಸ್ಪೀಕರ್
ಬಾಗಲಕೋಟೆ ಜಿಲ್ಲೆ ತೇರದಾಳ ವಿಧಾನಸಭಾ ಕ್ಷೇತ್ರದ ರಬಕವಿ ಮತ್ತು ಬನಹಟ್ಟಿಯಲ್ಲಿ ಈ ವರ್ಷವೇ ಸುಮಾರು ಒಂದು ಕೋಟಿ 50 ಲಕ್ಷ ವೆಚ್ಚದಲ್ಲಿ ಬಸ್ ನಿಲ್ದಾಣಗಳನ್ನು ನಿರ್ಮಿಸಲು ಉದ್ದೇಶಿಸಲಾಗಿದೆ ಎಂದು ಸಾರಿಗೆ ಸಚಿವ ಶ್ರೀರಾಮುಲು ಅವರು ಶಾಸಕ ಸಿದ್ದು ಸವದಿ ಅವರ ಪ್ರಶ್ನೆಗೆ ಉತ್ತರಿಸಿದರು.
ರೈತ ಸಂಪರ್ಕ ಕೇಂದ್ರಗಳನ್ನು ದೊಡ್ಡ ದೊಡ್ಡ ನಗರಗಳಿಗೂ ವಿಸ್ತರಣೆ ಮಾಡುವ ಪ್ರಸ್ತಾವನೆ ಇಲ್ಲ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಅವರು, ಶಾಸಕ ಬಸವನಗೌಡ ತುರುವಿಹಾಳ ಅವರ ಪ್ರಶ್ನೆಗೆ ಉತ್ತರಿಸಿದರು.