ಬೆಂಗಳೂರು: ರಾಜ್ಯದ ಅಂಗನವಾಡಿ ಕೇಂದ್ರಗಳಲ್ಲಿರುವ ವಿದ್ಯುತ್ ಸಂಪರ್ಕ, ಫ್ಯಾನ್, ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಹಾಗೂ ಶೌಚಾಲಯಗಳ ಕುರಿತಂತೆ ನಿಖರ ಮಾಹಿತಿ ಒದಗಿಸಿ ಎಂದು ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿದೆ. ಈ ಬಗ್ಗೆ ಮುಖ್ಯ ನ್ಯಾಯಮೂರ್ತಿ ಎ.ಎಸ್ ಓಕ ನೇತೃತ್ವದ ವಿಭಾಗೀಯ ಪೀಠವು ಸ್ವಯಂಪ್ರೇರಿತ ಪಿಐಎಲ್ ವಿಚಾರಣೆ ನಡೆಸಿತು.
ರಾಜ್ಯದಲ್ಲಿ ಅಪೌಷ್ಠಿಕತೆಯಿಂದ ಬಳಲುತ್ತಿರುವ ಮಕ್ಕಳ ವಿಚಾರಕ್ಕೆ ಸಂಬಂಧಿಸಿದಂತೆ ಬೆಳಗಾವಿ ಜಿಲ್ಲೆ ಅಥಣಿಯ ವಿಮೋಚನಾ ಸ್ವಯಂ ಸೇವಾ ಸಂಸ್ಥೆಯ ಬಿ.ಎಲ್. ಪಾಟೀಲ್ ಬರೆದಿದ್ದ ಪತ್ರ ಆಧರಿಸಿ ಸ್ವಯಂಪ್ರೇರಿತ ಪಿಐಎಲ್ ದಾಖಲಿಸಿಕೊಳ್ಳಲಾಗಿತ್ತು. ವಿಚಾರಣೆ ವೇಳೆ ಶಿಕ್ಷಣ ಇಲಾಖೆ ಪ್ರಮಾಣಪತ್ರವನ್ನು ಸರ್ಕಾರದ ಪರ ವಕೀಲರು ಪೀಠಕ್ಕೆ ಸಲ್ಲಿಸಿದರು.
ಇದನ್ನು ಪರಿಶೀಲಿಸಿದ ಪೀಠ, ಇದು ಪರಿಪೂರ್ಣ ಪ್ರಮಾಣಪತ್ರವಾಗಿಲ್ಲ. ವಿದ್ಯುತ್ ಸಂಪರ್ಕ, ಫ್ಯಾನ್ ಇಲ್ಲದ ಅಂಗನವಾಡಿ ಕೇಂದ್ರಗಳನ್ನು ಊಹಿಸಲು ಸಾಧ್ಯವಿಲ್ಲ. ಆದ್ದರಿಂದ ಅಂಗನವಾಡಿ ಕೇಂದ್ರಗಳಲ್ಲಿ ವಿದ್ಯುತ್ ಸಂಪರ್ಕ, ಫ್ಯಾನ್, ಕುಡಿಯುವ ನೀರು, ಶೌಚಾಲಯಗಳ ಬಗ್ಗೆ ಎರಡು ವಾರಗಳಲ್ಲಿ ನಿಖರ ಮಾಹಿತಿ ಹೊಂದಿರುವ ಪ್ರಮಾಣಪತ್ರ ಸಲ್ಲಿಸಿ ಎಂದು ನಿರ್ದೇಶಿಸಿ, ವಿಚಾರಣೆಯನ್ನು ಜೂನ್ 25ಕ್ಕೆ ಮುಂದೂಡಿತು.
ಇದನ್ನೂ ಓದಿ: ಪರಿಹಾರ ಹಣಕ್ಕಾಗಿ ನಿರ್ದೇಶನ ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ.. ಸುಪ್ರೀಂ ಹೇಳಿದ್ದೇನು?