ಬೆಂಗಳೂರು: ಮಂಡ್ಯದಲ್ಲಿ ಸಕ್ಕರೆ ಕಾರ್ಖಾನೆಗೆ ಅಡಿಗಲ್ಲು ಹಾಕಲು ಬರುವುದಾಗಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ನೀಡಿದ ಹೇಳಿಕೆ ನೀತಿ ಸಂಹಿತೆ ಉಲ್ಲಂಘನೆ ವ್ಯಾಪ್ತಿಗೆ ಬರುವುದಿಲ್ಲ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಸಂಜೀವ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.
ವಾರ್ತಾ ಇಲಾಖೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೂನ್ ತಿಂಗಳಿನಲ್ಲಿ ಸಕ್ಕರೆ ಕಾರ್ಖಾನೆ ಸ್ಥಾಪನೆಗೆ ಅಡಿಗಲ್ಲು ಹಾಕಲು ಬರುತ್ತೇನೆ ಎಂದು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿಕೆ ನೀಡಿದ್ದರು. ಇದನ್ನು ಆಯೋಗ ಪರಿಶೀಲನೆ ನಡೆಸಿದ್ದು, ಯೋಜನೆ ಬಜೆಟ್ನಲ್ಲಿ ಘೋಷಣೆಯಾಗಿದೆ. ಇದಕ್ಕಾಗಿ 100 ಕೋಟಿ ರೂ.ಗಳನ್ನು ತೆಗೆದಿರಿಸಲಾಗಿದೆ. ಇದು ಬಜೆಟ್ ಘೋಷಿತ ಯೋಜನೆ. ಹೊಸದಾಗಿ ಘೋಷಣೆ ಮಾಡಿದ ಯೋಜನೆ ಅಲ್ಲ. ಹಾಗಾಗಿ ನೀತಿ ಸಂಹಿತೆ ಉಲ್ಲಂಘನೆಯಾಗುವುದಿಲ್ಲ ಎಂದು ಸ್ಪಷ್ಟೀಕರಣ ನೀಡಿದರು.
ರಾಜ್ಮಹಲ್ ಹೋಟೆಲ್ನಲ್ಲಿ ನಡೆದ ಐಟಿ ದಾಳಿಯಲ್ಲಿ 1.70 ಕೋಟಿಗೂ ಅಧಿಕ ನಗದು ಪತ್ತೆಯಾಗಿದೆ ಎನ್ನುವ ಮಾಹಿತಿ ಮಾಧ್ಯಮಗಳಿಂದ ತಿಳಿದುಬಂದಿದೆ. ಈ ಸಂಬಂಧ ಹೆಚ್ಚಿನ ಮಾಹಿತಿ ಆಯೋಗದ ಬಳಿ ಇಲ್ಲ. ಆದರೆ ಹಣ ಪತ್ತೆ ಪ್ರಕರಣ ಕುರಿತು ಪರಿಶೀಲನೆ ನಡೆಸಿ ಸೂಕ್ತ ಕ್ರಮ ಜರುಗಿಸಲಾಗುತ್ತದೆ ಎಂದರು.