ಬೆಂಗಳೂರು: ರಾಮಚಂದ್ರಾಪುರ ಮಠಕ್ಕೆ ಆಡಳಿತಾಧಿಕಾರಿ ನೇಮಿಸುವ ಹಾಗೂ ಮಠದ ಅವ್ಯವಹಾರಗಳ ಕುರಿತ ವಿಚಾರಣೆಗೆ ತ್ರಿಸದಸ್ಯ ಸಮಿತಿ ರಚಿಸಿದ ವಿಚಾರಕ್ಕೆ ಸಂಬಂಧಿಸಿದಂತೆ ಸಲ್ಲಿಕೆಯಾಗಿರುವ ಅರ್ಜಿಗಳ ಸಂಬಂಧ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ರಾಜ್ಯ ಹೈಕೋರ್ಟ್‌ಗೆ ಸುಪ್ರೀಂಕೋರ್ಟ್ ನಿರ್ದೇಶಿಸಿದೆ.
ಈ ಕುರಿತಂತೆ ರಾಮಚಂದ್ರಾಪುರ ಮಠ ಸಲ್ಲಿಸಿದ್ದ ವಿಶೇಷ ಮೇಲ್ಮನವಿಯನ್ನು ಸುಪ್ರೀಂಕೋರ್ಟ್ ನ್ಯಾ. ಯು.ಯು. ಲಲಿತ್ ನೇತೃತ್ವದ ವಿಭಾಗೀಯ ಪೀಠ ಸೋಮವಾರ ವಿಚಾರಣೆ ನಡೆಸಿದ್ದು, ಪ್ರಕರಣದ ಕುರಿತು ಯಾವುದೇ ನಿರ್ಣಯ ಕೈಗೊಳ್ಳಬಾರದು ಮತ್ತು ಮುಂದಿನ ಸೂಚನೆವರೆಗೂ ಯಥಾಸ್ಥಿತಿ ಕಾಯ್ದುಕೊಳ್ಳಬೇಕು ಎಂದು ಮಧ್ಯಂತರ ನಿರ್ದೇಶನ ನೀಡಿದೆ. ಜೊತೆಗೆ, ಮೇಲ್ಮನವಿಯಲ್ಲಿರುವ ಎಲ್ಲಾ ಪ್ರತಿವಾದಿಗಳಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಯನ್ನು ಏ.7ಕ್ಕೆ ಮುಂದೂಡಿದೆ.
ಪ್ರಕರಣದ ಹಿನ್ನೆಲೆ:
ಮಠದ ಆಡಳಿತದಲ್ಲಿ ಅವ್ಯವಹಾರಗಳು ನಡೆದಿವೆ ಎಂದು ಆರೋಪಿಸಿ, ರಾಘವೇಶ್ವರ ಭಾರತಿ ಶ್ರೀಗಳನ್ನು ಪೀಠಾಧಿಪತಿ ಸ್ಥಾನದಿಂದ ಕೆಳಗಿಳಿಸಬೇಕು. ಮಠಕ್ಕೆ ಆಡಳಿತಾಧಿಕಾರಿಯನ್ನು ನೇಮಕ ಮಾಡಬೇಕು ಎಂದು ಕೋರಿ ಎದುರ್ಕುಳ ಈಶ್ವರ ಭಟ್ ಮತ್ತಿತರರು ಹೈಕೋರ್ಟ್ನಲ್ಲಿ ಪಿಐಎಲ್ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ್ದ ಹೈಕೋರ್ಟ್ ವಿಭಾಗೀಯ ಪೀಠ, ಬೇಡಿಕೆ ಕುರಿತು ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಮನವಿ ಸಲ್ಲಿಸುವಂತೆ ಸೂಚಿಸಿತ್ತು. ಇದೇ ವೇಳೆ ಹೈಕೋರ್ಟ್ ತನ್ನ ಆದೇಶವನ್ನು ಹಿಂಪಡೆಯುವಂತೆ ಕೋರಿ ಮಠ ಸಲ್ಲಿಸಿದ್ದ ಮಧ್ಯಂತರ ಅರ್ಜಿಯನ್ನು ಪೀಠ ತಿರಸ್ಕರಿಸಿತ್ತು.
ಮತ್ತೊಂದೆಡೆ, ಹೈಕೋರ್ಟ್ ವಿಭಾಗೀಯ ಪೀಠದ ಆದೇಶದಂತೆ ಎದುರ್ಕುಳ ಈಶ್ವರ ಭಟ್ ಅವರು, ಮಠಕ್ಕೆ ಆಡಳಿತಾಧಿಕಾರಿಯನ್ನು ನೇಮಿಸುವಂತೆ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಿದ್ದರು. ಮನವಿ ಪರಿಗಣಿಸಿದ್ದ ಸರ್ಕಾರ, ಮಠದ ವಿರುದ್ಧ ಆರೋಪಗಳ ವಿಚಾರಣೆಗೆ ತ್ರಿಸದಸ್ಯ ಸಮಿತಿ ರಚನೆ ಮಾಡಿತ್ತು. ಅದನ್ನು ಪ್ರಶ್ನಿಸಿ ಮಠವು ಮತ್ತೆ ಹೈಕೋರ್ಟ್‌ಗೆ ತಕರಾರು ಅರ್ಜಿ ಸಲ್ಲಿಸಿತ್ತು. ಅರ್ಜಿಯ ವಿಚಾರಣೆ ನಡೆಸಿದ್ದ ಏಕಸದಸ್ಯ ಪೀಠ, ತ್ರಿಸದಸ್ಯ ಸಮಿತಿ ರಚನೆ ಆದೇಶಕ್ಕೆ ತಡೆಯಾಜ್ಞೆ ನೀಡಿತ್ತು. ಈ ಆದೇಶ ಪ್ರಶ್ನಿಸಿ ಎದುರ್ಕುಳ ಈಶ್ವರ ಭಟ್ ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿದ್ದರು. ಅದನ್ನು ವಿಚಾರಣೆ ನಡೆಸಿದ್ದ ವಿಭಾಗೀಯ ಪೀಠ, ಮೂಲ ಪಿಐಎಲ್‌ನೊಂದಿಗೆ ಆ ಮೇಲ್ಮನವಿಯನ್ನು ವಿಚಾರಣೆ ನಡೆಸುವುದಾಗಿ ಆದೇಶಿಸಿತ್ತು.
ವಿಭಾಗೀಯ ಪೀಠದ ಈ ಆದೇಶ ಮತ್ತು ಮಠದ ವ್ಯವಹಾರಗಳ ಕುರಿತು ತನಿಖೆ ನಡೆಸಲು ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಮನವಿ ಸಲ್ಲಿಸಲು ಮೂಲ ಅರ್ಜಿದಾರ ಎದುರ್ಕುಳ ಈಶ್ವರ ಭಟ್ ಅವರಿಗೆ ನಿರ್ದೇಶಿಸಿದ್ದ ಆದೇಶವನ್ನು ಹಿಂಪಡೆಯಲು ನಿರಾಕರಿಸಿದ ಕ್ರಮಗಳನ್ನು ಪ್ರಶ್ನಿಸಿ, ರಾಮಚಂದ್ರಾಪುರ ಮಠವು ಸುಪ್ರೀಂಕೋರ್ಟ್ ವಿಶೇಷ ಮೇಲ್ಮನವಿ ಸಲ್ಲಿಸಿತ್ತು. ಇದೀಗ ಸುಪ್ರೀಂ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾವುದೇ ನಿರ್ಣಯ ಕೈಗೊಳ್ಳದೆ ಯಥಾಸ್ಥಿತಿ ಕಾಪಾಡಿಕೊಳ್ಳಲು ಮಧ್ಯಂತರ ನಿರ್ದೇಶನ ನೀಡಿದೆ.