ಬೆಂಗಳೂರು: ತಮಿಳುನಾಡಿನ ಕರಾವಳಿಯಲ್ಲಿ ಸಮುದ್ರಮಟ್ಟದಿಂದ 1.5 ಮೇಲ್ಮಟ್ಟದಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿದ್ದು, ಮುಂದಿನ ಐದು ದಿನಗಳವರೆಗೆ ರಾಜ್ಯದಲ್ಲಿ ಗುಡುಗು ಮಿಂಚಿನಿಂದ ಕೂಡಿದ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ಗುಡುಗು ಸಮೇತ ಭಾರೀ ಮಳೆ ಸುರಿಯುವ ಮುನ್ಸೂಚನೆಯಿದೆ. ಕೊಡಗು, ಚಿಕ್ಕಮಗಳೂರು, ಹಾಸನ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಆದ್ದರಿಂದ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಕೋಲಾರ, ಶಿವಮೊಗ್ಗ, ರಾಮನಗರ, ತುಮಕೂರು ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ.
ಮುಂದಿನ 5 ದಿನ ಮಳೆ: ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ರಾಜ್ಯದಲ್ಲಿ ಮುಂದಿನ 5 ದಿನ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಒಳನಾಡಿನಲ್ಲಿ ಹೆಚ್ಚು: ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದರೆ. ಉತ್ತರ ಒಳನಾಡಿನಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ನಾಲ್ಕು ದಿನ ಭಾರೀ ಮಳೆ ಸುರಿದರೆ, ಐದನೇ ದಿನ ಕೆಲವು ಕಡೆ ಸಾಧಾರಣ ಮಳೆಯಾಗಲಿದೆ. ಇನ್ನು ಕರಾವಳಿ ಜಿಲ್ಲೆಗಳಲ್ಲಿ ಐದು ದಿನ ಭಾರಿ ಮಳೆ ಮುನ್ಸೂಚನೆ ನೀಡಲಾಗಿದೆ.
ಮೀನುಗಾರರಿಗೆ ಎಚ್ಚರಿಕೆ: ಉತ್ತರ ಒಳನಾಡಿನ ಕೆಲ ಭಾಗದಲ್ಲಿ ಎರಡು ದಿನ ಸ್ವಲ್ಪ ಮಳೆಯಾಗುವ ಸಾಧ್ಯತೆ ಇದ್ದರೆ, ದಕ್ಷಿಣ ಒಳನಾಡಿನಲ್ಲಿ ಪ್ರತಿ ಗಂಟೆಗೆ 40 ರಿಂದ 50 ಕಿ.ಮೀ ವೇಗದಲ್ಲಿ ಗಾಳಿ ಸಹಿತ ಮಳೆಯಾಗಲಿದೆ. ನೀರಿಗಿಳಿಯದಂತೆ ಕರಾವಳಿ ಭಾಗದಲ್ಲಿ ಮೀನುಗಾರರಿಗೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಕೇವಲ ಒಂದು ಗಂಟೆ ಮಳೆಗೆ ನಲುಗಿದ್ದ ರಾಜಧಾನಿ: ಕಳೆದ ಭಾನುವಾರ ಮಧ್ಯಾಹ್ನ 3 ಗಂಟೆಯಿಂದ ಪ್ರಾರಂಭವಾದ ಮಳೆ ಸುಮಾರು ಒಂದು ಗಂಟೆ ಕಾಲ ಧಾರಾಕಾರವಾಗಿ ಸುರಿಯಿತು ಈ ವೇಳೆ ಹಲವು ಅವಾಂತರಗಳು ಸೃಷ್ಟಿಯಾಗಿತ್ತು. ಗುಡುಗು - ಸಿಡಿಲು ಸಹಿತ ಮಳೆ ಅಬ್ಬರಿಸಿದ್ದ ಮಳೆಯಿಂದಾಗಿ ನಗರದ ವಿಧಾನಸೌಧ, ಆನಂದ್ ರಾವ್, ಮೆಜೆಸ್ಟಿಕ್, ರೇಸ್ ಕೋರ್ಸ್, ಕೆಆರ್ ಸರ್ಕಲ್, ಟೌನ್ ಹಾಲ್, ಕಾರ್ಪೊರೇಷನ್, ಮೈಸೂರು ಬ್ಯಾಂಕ್ ಸರ್ಕಲ್, ಜಯನಗರ, ಮಲ್ಲೇಶ್ವರ ಸೇರಿ ಹಲವೆಡೆ ವಾಹನ ಸವಾರರು ದಾರಿ ಕಾಣದೆ ರಸ್ತೆಯ ಪಕ್ಕದಲ್ಲಿ ವಾಹನಗಳನ್ನು ನಿಲ್ಲಿಸುವ ಅನಿವಾರ್ಯತೆ ಸೃಷ್ಟಿಯಾಗಿತ್ತು.
ಇದನ್ನೂ ಓದಿ: ಮುಂಗಾರು ಪೂರ್ವ ಮಳೆ ಅವಾಂತರಕ್ಕೆ ರಾಜ್ಯದಲ್ಲಿ ಈವರೆಗೆ 52 ಮಂದಿ ಸಾವು: ಸಿಎಂ ಸಿದ್ದರಾಮಯ್ಯ