ಬೆಂಗಳೂರು: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ-1989 ಹಾಗೂ ನಿಮಯಗಳ-1995 ಕಾನೂನನ್ನು ರಾಜ್ಯದಲ್ಲಿ ಕಟ್ಟುನಿಟ್ಟಾಗಿ ಜಾರಿ ಮಾಡಲು ನಿರ್ದೇಶಿಸುವಂತೆ ಕೋರಿ ಸಲ್ಲಿಕೆಯಾಗಿರುವ ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ ನೀಡುವಂತೆ ರಾಜ್ಯ ಸರ್ಕಾರ ಹೈಕೋರ್ಟ್ಗೆ ಮನವಿ ಮಾಡಿದೆ.
ಈ ಕುರಿತು ಪಿ. ಯಶೋಧ ಎಂಬುವರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕ ನೇತೃತ್ವದ ವಿಭಾಗೀಯ ಪೀಠ, ಅರ್ಜಿಗೆ ಲಿಖಿತ ಆಕ್ಷೇಪಣೆ ಸಲ್ಲಿಸಲು ಸರ್ಕಾರಕ್ಕೆ ಆಗಸ್ಟ್ 20ರವರೆಗೆ ಕಾಲಾವಕಾಶ ನೀಡಿದೆ.
ವಿಚಾರಣೆ ವೇಳೆ ಸರ್ಕಾರಿ ವಕೀಲ ವಿಕ್ರಂ ಹುಯಿಲಗೋಳ್ ವಾದಿಸಿ, ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ವಿವಿಧ ಇಲಾಖೆಗಳಿಂದ ಮಾಹಿತಿ ಪಡೆದುಕೊಳ್ಳಬೇಕಾಗಿದೆ. ಸದ್ಯದ ಕೋವಿಡ್ -19 ಪರಿಸ್ಥಿತಿಯಲ್ಲಿ ಇಲಾಖೆಗಳನ್ನು ಸಂಪರ್ಕಿಸಲು ಕಷ್ಟವಾಗುತ್ತಿದೆ. ಆದ್ದರಿಂದ ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ ನೀಡಬೇಕು ಎಂದು ಕೋರಿದರು. ಅದಕ್ಕೆ ಒಪ್ಪಿದ ಪೀಠ, ಕಾಲಾವಕಾಶ ನೀಡಿ ವಿಚಾರಣೆ ಮುಂದೂಡಿತು.
ಅರ್ಜಿದಾರರ ಕೋರಿಕೆ: ಎಸ್ಸಿ-ಎಸ್ಟಿ ಸಮುದಾಯದ ಮೇಲಿನ ದೌರ್ಜನ್ಯ ತಡೆಯಲು ಹಾಗೂ ಅವರ ಹಕ್ಕುಗಳ ರಕ್ಷಣೆಗೆ ಕಾಯ್ದೆ ಮತ್ತು ನಿಯಮಗಳನ್ನು ಜಾರಿಗೆ ತರಲಾಗಿದೆ. ಆದರೆ, ರಾಜ್ಯದಲ್ಲಿ ಕಾನೂನನ್ನು ಕಟ್ಟುನಿಟ್ಟಾಗಿ ಜಾರಿ ಮಾಡದ ಪರಿಣಾಮ ಸಮುದಾಯದ ಮೇಲೆ ದೌರ್ಜನ್ಯ ಪ್ರಕರಣಗಳು ಹೆಚ್ಚಾಗುತ್ತಿವೆ. ಹೀಗಾಗಿ, ಕಾಯ್ದೆಯ ಪರಿಣಾಮಕಾರಿ ಜಾರಿಗೆ ಅಗತ್ಯ ಕ್ರಮ ಜರುಗಿಸಲು ಸರ್ಕಾರಕ್ಕೆ ನಿರ್ದೇಶಿಸಬೇಕೆಂದು ಅರ್ಜಿದಾರರು ಮನವಿ ಮಾಡಿದ್ದಾರೆ.