ದೊಡ್ಡಬಳ್ಳಾಪುರ: ಕರ್ನಾಟಕ ಪ್ರಸಿದ್ಧ ನಾಗಾರಾಧನೆಯ ಕ್ಷೇತ್ರ ದೊಡ್ಡಬಳ್ಳಾಪುರ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಪ್ರತಿ ವರ್ಷ ಜನವರಿಯಲ್ಲಿ ನಡೆಯುವ ಬ್ರಹ್ಮರಥೋತ್ಸವಕ್ಕೆ ಲಕ್ಷಾಂತರ ಭಕ್ತರು ಆಗಮಿಸುತ್ತಿದ್ದರು. ಆದರೆ ಕೋವಿಡ್ ಹಿನ್ನೆಲೆ ಈ ಬಾರಿ ಸಾಂಕೇತಿಕವಾಗಿ ಬ್ರಹ್ಮರಥೋತ್ಸವ ಆಚರಿಸಲು ದೇವಸ್ಥಾನದ ಆಡಳಿತ ಮಂಡಳಿ ತೀರ್ಮಾನಿಸಿದೆ.
2020-21ನೇ ಸಾಲಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದ ವಾರ್ಷಿಕ ಜಾತ್ರಾ ಉತ್ಸವ ದಿನಾಂಕ 15-01-2021ರಿಂದ ಪ್ರಾರಂಭವಾಗಿ 19-01-2021ರ ಪುಷ್ಯ ಶುದ್ಧ ಷಷ್ಠಿಯ ಮಂಗಳವಾರದಂದು ಕ್ಷೇತ್ರದಲ್ಲಿ ಬ್ರಹ್ಮರಥೋತ್ಸವ ನಡೆಯಬೇಕಿತ್ತು. ಆದರೆ ಪ್ರತಿವರ್ಷದಂತೆ ಈ ಬಾರಿಯೂ ಬ್ರಹ್ಮರಥೋತ್ಸವದಲ್ಲಿ ಲಕ್ಷಾಂತರ ಭಕ್ತರು ಭಾಗವಹಿಸುವುದರಿಂದ, ಕೊರೊನಾ ವೈರಸ್ ಹರಡದಂತೆ ಎಚ್ಚರಿಕೆ ವಹಿಸಿರುವ ಹಿನ್ನೆಲೆ ಕೇವಲ ಸಾಂಕೇತಿಕವಾಗಿ ದೇವಾಲಯದ ಒಳ ಆವರಣದಲ್ಲಿ ಬ್ರಹ್ಮರಥೋತ್ಸವ ಆಚರಣೆಗೆ ದೇವಸ್ಥಾನದ ಆಡಳಿತ ಮಂಡಳಿ ನಿರ್ಧರಿಸಿದೆ.
ಇದರ ಜೊತೆ ಪ್ರತಿ ವರ್ಷ ನಡೆಯುವ ದನಗಳ ಜಾತ್ರೆಯನ್ನು ರದ್ದು ಮಾಡಲಾಗಿದೆ. ಧಾರ್ಮಿಕ ದತ್ತಿ ಆಯುಕ್ತರ ಆದೇಶದ ಹಿನ್ನೆಲೆ, ಕೊರೊನಾ ವೈರಸ್ ಹರಡುವಿಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ದೇವಸ್ಥಾನಗಳಲ್ಲಿ ನಡೆಯುವ ಸೇವೆಗಳು, ಜಾತ್ರೆಗಳು, ಸಾಂಸ್ಕೃತಿಕ ಕಾರ್ಯಕ್ರಮ ಮತ್ತು ಉತ್ಸವಗಳನ್ನು ರದ್ದು ಮಾಡಲಾಗಿದೆ.