ಬೆಂಗಳೂರು: ಮೈಸೂರು ನರಸಿಂಹರಾಜ ಕ್ಷೇತ್ರದ ಶಾಸಕ ತನ್ವೀರ್ ಸೇಠ್ ಕೊಲೆ ಯತ್ನ ಪ್ರಕರಣದ 6ನೇ ಆರೋಪಿ ಹಾಗೂ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಸಂಘಟನೆಯ ಅಧ್ಯಕ್ಷ ಮೊಹಮ್ಮದ್ ಮುಝಾಮ್ಮಿಲ್‌ಗೆ ಹೈಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.
ಪ್ರಕರಣ ಸಂಬಂಧ ಜಾಮೀನು ಕೋರಿ ಮೊಹಮ್ಮದ್ ಮುಝಾಮ್ಮಿಲ್ ಸಲ್ಲಿಸಿದ್ದ ಅರ್ಜಿಯನ್ನು ಪುರಸ್ಕರಿಸಿದ ನ್ಯಾಯಮೂರ್ತಿ ಜಾನ್ ಮೈಕೆಲ್ ಕುನ್ಹಾ ಅವರಿದ್ದ ಏಕಸದಸ್ಯ ಪೀಠ, ಹಲವು ಷರತ್ತುಗಳನ್ನು ವಿಧಿಸಿ ಜಾಮೀನು ಮಂಜೂರು ಮಾಡಿದೆ. ತನ್ವಿರ್ ಸೇಠ್ ಕೊಲೆಗೆ ಒಳಸಂಚು ರೂಪಿಸಿದ ಮತ್ತು ಕೊಲೆ ಮಾಡಲು ಇತರೆ ಆರೋಪಿಗಳಿಗೆ ಪ್ರಚೋದನೆ ನೀಡಿದ ಆರೋಪ ಅರ್ಜಿದಾರನ ಮೇಲಿದ್ದರೂ ಕೊಲೆ ಯತ್ನ ಪ್ರಕರಣದಲ್ಲಿ ಅರ್ಜಿದಾರ ನೇರವಾಗಿ ಭಾಗಿಯಾಗಿಯಾಗಿಲ್ಲ ಎಂಬ ಆಧಾರದಲ್ಲಿ ಪೀಠ ಜಾಮೀನು ನೀಡಿದೆ.
1 ಲಕ್ಷ ರೂ. ಮೊತ್ತದ ವೈಯಕ್ತಿಕ ಬಾಂಡ್ ಹಾಗೂ ಅಷ್ಟೇ ಮೊತ್ತಕ್ಕೆ ಇಬ್ಬರು ವ್ಯಕ್ತಿಗಳ ಭದ್ರತೆ ಒದಗಿಸಬೇಕು. ಅಗತ್ಯಾನುಸಾರ ವಿಚಾರಣಾ ನ್ಯಾಯಾಲಯಕ್ಕೆ ಹಾಜರಾಗಬೇಕು. ಪ್ರಾಸಿಕ್ಯೂಷನ್ ಸಾಕ್ಷ್ಯಗಳ ಮೇಲೆ ಪ್ರಭಾವ ಬೀರಬಾರದು. ಸಾಕ್ಷ್ಯ ತಿರುಚಲು ಅಥವಾ ನಾಶಪಡಿಸಲು ಯತ್ನಿಸಬಾರದು. ವಿಚಾರಣಾ ನ್ಯಾಯಾಲಯದ ಅನುಮತಿ ಇಲ್ಲದೆ ಅದರ ವ್ಯಾಪ್ತಿಯಿಂದ ಹೊರ ಹೋಗುವಂತಿಲ್ಲ ಎಂದು ಹೈಕೋರ್ಟ್ ಷರತ್ತು ವಿಧಿಸಿದೆ.
ಪ್ರಕರಣದ ಹಿನ್ನೆಲೆ:
ಮೈಸೂರಿನ ನರಸಿಂಹರಾಜ ಕ್ಷೇತ್ರದ ಶಾಸಕ ಹಾಗೂ ಮಾಜಿ ಸಚಿವ ತನ್ವೀರ್ ಸೇಠ್ 2019ರ ನ. 17ರಂದು ಬನ್ನಿಮಂಟಪ ಆವರಣದಲ್ಲಿ ಕಾರ್ಯಕ್ರಮವೊಂದಕ್ಕೆ ಹಾಜರಾಗಿದ್ದರು. ಅಂದು ರಾತ್ರಿ 11 ಗಂಟೆ ಸುಮಾರಿಗೆ ಸಂಗೀತ ಕಾರ್ಯಕ್ರಮ ನಡೆಯುತ್ತಿದ್ದ ವೇದಿಕೆಯ ಮುಂಭಾಗದ ಸಾಲಿನಲ್ಲಿ ಕುಳಿತಿದ್ದಾಗ ಫರಾನ್ ಎಂಬಾತ ತನ್ವೀರ್ ಸೇಠ್ ಅವರ ಕುತ್ತಿಗೆಗೆ ಇರಿದು ಪರಾರಿಯಾಗಲು ಯತ್ನಿಸಿದ್ದ. ಸಮಾರಂಭದಲ್ಲಿ ನೆರೆದಿದ್ದ ಸಾರ್ವಜನಿಕರು ಆತನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದರು.
ತನ್ವೀರ್ ಸೇಠ್ ಅವರನ್ನು ಕೊಲೆ ಮಾಡಲು ಮೊದಲನೇ ಆರೋಪಿ ಫರಾನ್ಗೆ ಪ್ರಚೋದನೆ ನೀಡಿದ ಮತ್ತು ಕೊಲೆಗೆ ಒಳಸಂಚು ರೂಪಿಸಲು 2019ರ ನ. 14ರಂದು ನಡೆದ ಸಭೆಯಲ್ಲಿ ಭಾಗಿಯಾದ ಆರೋಪದ ಮೇಲೆ ನರಸಿಂಹರಾಜ ಠಾಣೆ ಪೊಲೀಸರು ಅರ್ಜಿದಾರನನ್ನು ಬಂಧಿಸಿದ್ದರು. ಮೈಸೂರಿನ 3ನೇ ಹೆಚ್ಚುವರಿ ಸಿವಿಲ್ (ಕಿರಿಯ ಶ್ರೇಣಿ) ಮತ್ತು ಜೆಎಂಎಫ್‌ಸಿ ನ್ಯಾಯಾಲಯ ಆರೋಪಿಗೆ ಜಾಮೀನು ನೀಡಲು ನಿರಾಕರಿಸಿತ್ತು. ಇದರಿಂದ ಜಾಮೀನು ಕೋರಿ ಆರೋಪಿಯು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದ.