ಬೆಂಗಳೂರು: ಭಾರತ ರತ್ನ ಡಾ.ಸರ್ವೆಪಲ್ಲಿ ರಾಧಾಕೃಷ್ಣನ್ ಜನ್ಮದಿನಾಚರಣೆ ನಿಮಿತ್ತ ನಾಳೆ ವಿಧಾನಸೌಧದಲ್ಲಿ ರಾಜ್ಯಮಟ್ಟದ ಶಿಕ್ಷಕರ ದಿನಾಚರಣೆ ಹಾಗೂ ರಾಜ್ಯ ಪ್ರಶಸ್ತಿ ಪುರಸ್ಕೃತರಿಗೆ, ನ್ಯಾಕ್ ಪುರಸ್ಕೃತ ಕಾಲೇಜುಗಳಿಗೆ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಆಯೋಜನೆ ಮಾಡಲಾಗಿದೆ. ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ಬೆಳಗ್ಗೆ 10 ಗಂಟೆಗೆ ನಡೆಯಲಿರುವ ಸಮಾರಂಭವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟನೆ ಮಾಡಲಿದ್ದಾರೆ. ಪ್ರಾರ್ಥನೆಯೊಂದಿಗೆ ಕಾರ್ಯಕ್ರಮ ಆರಂಭಿಸಲಿದ್ದು, ಶಿಕ್ಷಕ ವೃಂದದಿಂದ ನಾಡಗೀತೆ ಹಾಗೂ ರೈತಗೀತೆಯನ್ನು ಹಾಡುವ ಕಾರ್ಯಕ್ರಮ ಆರಂಭವಾಗಲಿದೆ.
ಆರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಡಾ.ಸರ್ವೆಪಲ್ಲಿ ರಾಧಾಕೃಷ್ಣನ್ ಹಾಗೂ ಮಾತೆ ಸಾವಿತ್ರಿಬಾಯಿ ಫುಲೆ ಅವರ ಭಾವಚಿತ್ರಗಳಿಗೆ ಪುಷ್ಪಾರ್ಚನೆ ಮಾಡಲಾಗುತ್ತದೆ. ನಂತರ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ, ಉನ್ನತ ಶಿಕ್ಷಣ ಸಚಿವ ಡಾ.ಎಂ ಸಿ ಸುಧಾಕರ್ ಪ್ರಾಸ್ತಾವಿಕವಾಗಿ ಭಾಷಣ ಮಾಡಲಿದ್ದಾರೆ. ಬೆಳಗ್ಗೆ 11 ರಿಂದ 12 ಗಂಟೆಯವರೆಗೆ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ. ರಾಜ್ಯ ಪ್ರಶಸ್ತಿ ಪುರಸ್ಕೃತರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶಸ್ತಿ ಪ್ರದಾನ ಮಾಡಿದರೆ ಬೆಂಗಳೂರು ಉತ್ತರ ಶೈಕ್ಷಣಿಕ ಜಿಲ್ಲಾ ಪ್ರಶಸ್ತಿ ಪುರಸ್ಕೃತರಿಗೆ ಡಿಸಿಎಂ ಡಿಕೆ ಶಿವಕುಮಾರ್ ಪ್ರದಾನಿಸಲಿದ್ದಾರೆ. ನ್ಯಾಕ್ ಪುರಸ್ಕೃತ ಕಾಲೇಜುಗಳಿಗೆ ಉನ್ನತ ಶಿಕ್ಷಣ ಸಚಿವ ಸುಧಾಕರ್, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧುಬಂಗಾರಪ್ಪ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.
ಬಳಿಕ ಡಿಸಿಎಂ ಡಿಕೆ ಶಿವಕುಮಾರ್ ಶಿಕ್ಷಣ ದಿನಾಚರಣೆಯ ಕುರಿತು ಸಂದೇಶ ಭಾಷಣ ಮಾಡಲಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಸಮಾರಂಭವನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ. ಸಮಾರಂಭದ ಅಧ್ಯಕ್ಷತೆ ವಹಿಸುವ ಸ್ಥಳೀಯ ಶಾಸಕ ರಿಜ್ವಾನ್ ಅರ್ಷದ್ ಅಧ್ಯಕ್ಷೀಯ ಭಾಷಣ ಮಾಡಲಿದ್ದು, ಅಪರಾಹ್ನ 1 ಗಂಟೆಗೆ ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ಆಯುಕ್ತ ಜಗದೀಶ್ ಅವರಿಂದ ವಂದನಾರ್ಪಣೆ ಮೂಲಕ ಕಾರ್ಯಕ್ರಮಕ್ಕೆ ತೆರೆ ಎಳೆಯಲಾಗುತ್ತದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ, ಉನ್ನತ ಶಿಕ್ಷಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ಮೂವರಿಗೆ ಅತ್ಯುತ್ತಮ ಪ್ರಶಸ್ತಿ: ಉತ್ತರಕನ್ನಡದ ಮೂವರು ರಾಜ್ಯಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ನಾಳೆ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದೆ. ಜೋಯಿಡಾ ತಾಲೂಕಿನ ಅಣಸಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ಅಕ್ಷತಾ ಅನಿಲ ಬಾಸಗೋಡು, ಹೊನ್ನಾವರ ತಾಲೂಕಿನ ಬಿರಂಕಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಮಂಜುನಾಥ ಹರಿಕಂತ್ರ ಹಾಗೂ ಪ್ರೌಢಶಾಲಾ ವಿಭಾಗದಲ್ಲಿ ಚಿತ್ತಾರ ಮಂಕಿಯ ಸರ್ಕಾರಿ ಪ್ರೌಢಶಾಲೆ ಶಿಕ್ಷಕ ಪ್ರಕಾಶ್ ನಾಯ್ಕ ಅವರನ್ನು ರಾಜ್ಯಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಸಾವಿತ್ರಿಬಾಯಿ ಫುಲೆ ಹೆಸರಿನಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ
ಇದನ್ನೂ ಓದಿ: ಶಿಕ್ಷಕರ ದಿನಾಚರಣೆಯಂದು ಇ- ಲೈಬ್ರರಿಗೆ ಮರು ಚಾಲನೆ: ಸಚಿವ ಮಧು ಬಂಗಾರಪ್ಪ