ಬೆಂಗಳೂರು: ಲೋಕಸಭಾ ಟಿಕೆಟ್ ಕೈ ತಪ್ಪಿದ ಹಿನ್ನಲೆಯಲ್ಲಿ ಮುನಿಸಿಕೊಂಡು ಪಕ್ಷದ ಚಟುವಟಿಕೆಯಿಂದ ದೂರ ಉಳಿದಿರುವ ತೇಜಸ್ವಿನಿ ಅನಂತ್ ಕುಮಾರ್ ಅವರನ್ನು ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷ ಸ್ಥಾನ ನೀಡಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಆದೇಶ ಹೊರಡಿಸಿದ್ದಾರೆ.
ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದ ತೇಜಸ್ವಿನಿ ಅನಂತ್ ಕುಮಾರ್ ಅವರಿಗೆ ಕಡೆಯ ಕ್ಷಣದಲ್ಲಿ ಟಿಕೆಟ್ ಕೈತಪ್ಪಿದ್ದಕ್ಕೆ ಕ್ಷೇತ್ರದಲ್ಲಿ ಭಾರಿ ಅಸಮಧಾನ ವ್ಯಕ್ತವಾಗಿತ್ತು. ಕೂಡಲೇ ತೇಜಸ್ವಿನಿ ಅವರನ್ನು ಮನೆಗೆ ಕರೆಸಿಕೊಂಡು ಮಾತುಕತೆ ನಡೆಸಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಶೀಘ್ರದಲ್ಲೇ ಉತ್ತಮ ಸ್ಥಾನಮಾನ ನೀಡುವ ಆಶ್ವಾಸನೆ ನೀಡಿ ಕಳುಹಿಸಿದ್ದರು.
ಕೊಟ್ಟ ಭರವಸೆಯಂತೆ ಇಂದು ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷೆ ಸ್ಥಾನ ನೀಡಿ ಯಡಿಯೂರಪ್ಪ ಆದೇಶ ಹೊರಡಿಸಿದ್ದಾರೆ. ಸ್ವತಃ ಈ ವಿಷಯವನ್ನು ಟ್ವೀಟ್ ಮೂಲಕ ಹಂಚಿಕೊಂಡಿದ್ದಾರೆ.