ಬೆಂಗಳೂರು: ಯಲಹಂಕ ಉಪನಗರದ ಸಿಹೆಚ್ಎಸ್ ಲೇಔಟ್ನಲ್ಲಿ ಪಾರ್ಕ್ಗೆ ಮೀಸಲಿಟ್ಟಿದ್ದ ಜಾಗದಲ್ಲಿ ದೇವಸ್ಥಾನ ನಿರ್ಮಾಣ ಮಾಡುತ್ತಿರುವುದನ್ನು ಪ್ರಶ್ನಿಸಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಂಬಂಧ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ.
ಈ ಕುರಿತು ವಕೀಲ ಟಿವಿ ಅಮರನಾಥ್ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಬುಧವಾರ ಮುಖ್ಯ ನ್ಯಾಯಮೂರ್ತಿ ಎಎಸ್ ಓಕಾ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು. ಕೆಲಕಾಲ ಅರ್ಜಿದಾರರ ಪರ ವಕೀಲರು ವಾದ ಆಲಿಸಿದ ಪೀಠ, ಸರ್ಕಾರದ ಮುಖ್ಯ ಕಾರ್ಯದರ್ಶಿ ಮತ್ತು ಬಿಬಿಎಂಪಿ ಆಯುಕ್ತರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಯನ್ನು ಜೂ. 17 ಕ್ಕೆ ಮುಂದೂಡಿತು.
ಪ್ರಕರಣದ ಹಿನ್ನೆಲೆ :
ಯಲಹಂಕ ಉಪನಗರ 5ನೇ ಹಂತದಲ್ಲಿ ಬರುವ ಸಿಹೆಚ್ಎಸ್ ಬಡಾವಣೆಯಲ್ಲಿ ಉದ್ಯಾನ ನಿರ್ಮಾಣಕ್ಕೆ ಕರ್ನಾಟಕ ಗೃಹ ಮಂಡಳಿ ಜಾಗ ಮೀಸಲಿರಿಸಿದೆ. ಆದರೆ, ಈ ಜಾಗದಲ್ಲಿ ಶಿವ ಮಂದಿರ ಟ್ರಸ್ಟ್ ಹೆಸರಿನಲ್ಲಿ ಕೆಲ ಪ್ರಭಾವಿ ವ್ಯಕ್ತಿಗಳು ಅಕ್ರಮವಾಗಿ ದೇವಸ್ಥಾನ ನಿರ್ಮಾಣ ಮಾಡುತ್ತಿದ್ದಾರೆ. ಸ್ಥಳೀಯ ವಿರೋಧದ ನಡುವೆಯೂ ದೇವಸ್ಥಾನವನ್ನು ನಿರ್ಮಾಣ ಮಾಡುತ್ತಿದ್ದು, ಕೇಳಲು ಹೋದವರನ್ನು ಗೂಂಡಾಗಳು ಬೆದರಿಸುತ್ತಿದ್ದಾರೆ ಎಂದು ಅರ್ಜಿದಾರರು ಆರೋಪಿಸಿದ್ದಾರೆ.
ಉದ್ಯಾನಕ್ಕೆ ಮೀಸಲಿರುವ ಜಾಗದಲ್ಲಿ ದೇವಸ್ಥಾನ ನಿರ್ಮಿಸುತ್ತಿರುವುದು ಕರ್ನಾಟಕ ಉದ್ಯಾನ, ಆಟದ ಮೈದಾನ ಹಾಗೂ ಮುಕ್ತ ಪ್ರದೇಶ (ಸಂರಕ್ಷಣೆ ಮತ್ತು ನಿಯಂತ್ರಣ) ಕಾಯ್ದೆ 1985ರ ಉಲ್ಲಂಘನೆ ಆಗಿದೆ. ಅದೇ ರೀತಿ ಸಾರ್ವಜನಿಕ ಪ್ರದೇಶಗಳಲ್ಲಿ ಅಕ್ರಮವಾಗಿ ನಿರ್ಮಿಸಿರುವ ಧಾರ್ಮಿಕ ಕೇಂದ್ರಗಳನ್ನು ತೆರವುಗೊಳಿಸಲು ಸುಪ್ರೀಂಕೋರ್ಟ್ ನೀಡಿರುವ ನಿರ್ದೇಶನಗಳಿಗೆ ವಿರುದ್ಧವಾಗಿದೆ. ಆದ್ದರಿಂದ ದೇವಸ್ಥಾನ ತೆರವುಗೊಳಿಸಲು ಸರ್ಕಾರ ಹಾಗೂ ಬಿಬಿಎಂಪಿಗೆ ನಿರ್ದೇಶಿಸಬೇಕು ಎಂದು ಅರ್ಜಿದಾರರು ಮನವಿ ಮಾಡಿದ್ದಾರೆ.