ಬೆಂಗಳೂರು : ರಾಜ್ಯದ ನೂತನ ರಾಜ್ಯಪಾಲರಾಗಿ ನೇಮಕಗೊಂಡಿರುವ ಕೇಂದ್ರದ ಮಾಜಿ ಸಚಿವ ಥಾವರ್ ಚಂದ್ ಗೆಹ್ಲೋಟ್ ಜುಲೈ 11ರಂದು ರಾಜಭವನದಲ್ಲಿ ನಡೆಯುವ ಸರಳ ಸಮಾರಂಭದಲ್ಲಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ಜುಲೈ 11ರ ಭಾನುವಾರ ಬೆಳಗ್ಗೆ 10.30ಕ್ಕೆ ನೂತನ ರಾಜ್ಯಪಾಲರ ಪ್ರಮಾಣವಚನ ಕಾರ್ಯಕ್ರಮಕ್ಕೆ ರಾಜಭವನದಲ್ಲಿ ಸಿದ್ಧತೆಗಳು ಆರಂಭಗೊಂಡಿವೆ. ರಾಜ್ಯದ 19ನೇ ರಾಜ್ಯಪಾಲರಾಗಿ ಥಾವರ್ ಚಂದ್ ಗೆಹ್ಲೋಟ್ ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ನೂತನ ರಾಜ್ಯಪಾಲರಿಗೆ ಅಧಿಕಾರ ಹಾಗೂ ಗೌಪ್ಯತೆಯ ಪ್ರಮಾಣವಚನವನ್ನು ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಅಭಯ್ ಶ್ರೀನಿವಾಸ್ ಓಕಾ ಬೋಧಿಸಲಿದ್ದು, ರಾಜಭವನದ ಗಾಜಿನ ಮನೆಯಲ್ಲಿ ಕೊರೊನಾ ಮಾರ್ಗಸೂಚಿಯಂತೆ ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮ ನಡೆಯಲಿದೆ.
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ಸಂಪುಟ ಸಹೋದ್ಯೋಗಿಗಳು, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹೆಚ್.ಡಿ ಕುಮಾರಸ್ವಾಮಿ ಹಾಗೂ ಪ್ರತಿಪಕ್ಷಗಳ ಪ್ರಮುಖರು ಸಮಾರಂಭದಲ್ಲಿ ಉಪಸ್ಥಿತರಿರಲಿದ್ದಾರೆ.
ಇದನ್ನೂ ಓದಿ: ಅಣೆಕಟ್ಟು ಬಿರುಕು ಬಿಟ್ಟಿದೆ ಎಂದು ಜನರಲ್ಲಿ ನಾವು ಆತಂಕ ಮೂಡಿಸಲ್ಲ.. ಸುಮಲತಾರಿಗೆ ಟಾಂಗ್ ಕೊಟ್ಟರಾ ಡಿಕೆಶಿ..