ಬೆಂಗಳೂರು: ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಶಾಶ್ವತ ಆಯೋಗ ಕೈಗೊಂಡಿರುವ ಜಾತಿ (ಶೈಕ್ಷಣಿಕ, ಆರ್ಥಿಕ ಮತ್ತು ಸಾಮಾಜಿಕ) ಸಮೀಕ್ಷೆ ಇನ್ನೂ ನಮ್ಮ ಕೈ ಸೇರಿಲ್ಲ ಎಂದು ರಾಜ್ಯ ಸರ್ಕಾರ ಹೈಕೋರ್ಟ್ಗೆ ಮಾಹಿತಿ ನೀಡಿದೆ.
ರಾಜ್ಯ ಹಿಂದುಳಿದ ವರ್ಗಗಳ ಶಾಶ್ವತ ಆಯೋಗ 2015ರಲ್ಲಿ ನಡೆಸಿರುವ ಜಾತಿ ಸಮೀಕ್ಷೆ ಪ್ರಶ್ನಿಸಿ ಬೀದರ್ನ ಶಿವರಾಜ ಕಾನಶೆಟ್ಟಿ ಮತ್ತಿತರರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕ ನೇತೃತ್ವದ ವಿಭಾಗೀಯ ಪೀಠ ಇಂದು ವಿಚಾರಣೆ ನಡೆಸಿತು.
ಈ ವೇಳೆ ಸರ್ಕಾರದ ಪರ ಹಾಜರಾದ ಅಡ್ವೋಕೇಟ್ ಜನರಲ್ ಪ್ರಭುಲಿಂಗ ನಾವದಗಿ ಮಾಹಿತಿ ನೀಡಿ, ಸಮೀಕ್ಷೆ ಪೂರ್ಣಗೊಂಡಿದೆ. ಆದರೆ ಆಯೋಗ ಈವರೆಗೆ ಸರ್ಕಾರಕ್ಕೆ ವರದಿ ಸಲ್ಲಿಸಿಲ್ಲ. ಹಿಂದಿನ ಅಧ್ಯಕ್ಷರು ವರದಿಯನ್ನು ಸಲ್ಲಿಸದೆ ಹುದ್ದೆ ತ್ಯಜಿಸಿದರು. ಈಗ ಡಿಸೆಂಬರ್‌ನಲ್ಲಿ ಆಯೋಗಕ್ಕೆ ಹೊಸ ಅಧ್ಯಕ್ಷರನ್ನು ನಿಯೋಜಿಸಲಾಗಿದೆ. ವರದಿ ಸರ್ಕಾರಕ್ಕೆ ಸಲ್ಲಿಕೆಯಾಗುವವರೆಗೂ ಸರ್ಕಾರ ಏನನ್ನೂ ಹೇಳಲು ಅಥವಾ ಕ್ರಮ ಕೈಗೊಳ್ಳಲು ಸಾಧ್ಯವಿಲ್ಲ ಎಂದರು.
ಹೇಳಿಕೆ ದಾಖಲಿಸಿಕೊಂಡ ಪೀಠ, ಸಮೀಕ್ಷೆ ಪೂರ್ಣಗೊಂಡಿದ್ದರೂ ಆಯೋಗ ಸರ್ಕಾರಕ್ಕೆ ವರದಿ ಸಲ್ಲಿಸಿಲ್ಲ ಎಂದು ಅಡ್ವೋಕೇಟ್ ಜನರಲ್ ಹೇಳುತ್ತಿದ್ದಾರೆ. ಹೀಗಾಗಿ ಸದ್ಯಕ್ಕೆ ಅರ್ಜಿ ವಿಚಾರಣೆ ನಡೆಸುವ ಅವಶ್ಯಕತೆ ಇಲ್ಲವೆಂದು ಅಭಿಪ್ರಾಯಪಟ್ಟು ವಿಚಾರಣೆಯನ್ನು ಮಾ. 17ಕ್ಕೆ ಮುಂದೂಡಿತು.