ಬೆಂಗಳೂರು: ಕೇಂದ್ರ ಸರ್ಕಾರವೇ ಚುನಾವಣಾ ಆಯೋಗದ ಮೂಲಕ ಹೀಗೆ ಮಾಡಿಸಿರಬಹುದು. ಹೀಗಾಗಿ ಚುನಾವಣಾ ಆಯೋಗ ಅನರ್ಹ ಶಾಸಕರ ವಿಚಾರಣೆ ವೇಳೆ ಸುಪ್ರೀಂಕೋರ್ಟ್‌ನಲ್ಲಿ ಮಧ್ಯಸ್ಥಿಕೆ ವಹಿಸಿದೆ ಎಂಬ ಭಾವನೆ ಮೂಡುತ್ತದೆ ಎಂದು ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಅನರ್ಹ ಶಾಸಕರ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್‌ನಲ್ಲಿ ನಡೆದ ವಾದ-ಪ್ರತಿವಾದ ಮಂಡನೆಯಾದ ಬಳಿಕ ರಾಜ್ಯದ 15 ಕ್ಷೇತ್ರಗಳಿಗೆ ಘೋಷಣೆಗಯಾಗಿದ್ದ ಉಪಚುನಾವಣೆ ಮುಂದೂಡಿಕೆ ಮಾಡಿ ಸುಪ್ರೀಂಕೋರ್ಟ್ ಆದೇಶ ಹೊರಡಿಸಿದೆ. ಇದೇ ವಿಷಯವಾಗಿ ಪಕ್ಷದ ಕಚೇರಿಯಲ್ಲಿ ಇಂದು ಸಂಜೆ ಸಂಸದೀಯ ಮಂಡಳಿ ಸಭೆ ಮುಗಿದ ಬಳಿಕ ಪ್ರತಿಕ್ರಿಯೆ ನೀಡಿದ ಅವರು, ಚುನಾವಣೆ ಆಯೋಗ ಸುಪ್ರೀಂಕೋರ್ಟ್‌ನಲ್ಲಿ ಉಪಚುನಾವಣೆಯನ್ನು ಮುಂದೂಡಬಹುದು ಎಂದು ಹೇಳಿದೆ. ಹೀಗಾಗಿ ಉಪಚುನಾವಣೆ ಮುಂದೂಡಿಕೆಯಾಗಿದೆ. ಆಯೋಗಕ್ಕೆ ಕೇಂದ್ರ ಸರ್ಕಾರ ಸೂಚಿಸಿರಬಹುದು ಎಂದು ಅಭಿಪ್ರಾಯಪಟ್ಟರು.
ಈ ಬೆಳವಣಿಗೆಯಿಂದಾಗಿ ಸ್ವಾಯತ್ತ ಸಂಸ್ಥೆಗಳು ಸರಿಯಾಗಿ ಕಾರ್ಯ ನಿರ್ವಹಿಸುತ್ತಿವೆಯೇ ಎಂಬ ಪ್ರಶ್ನೆ ಮೂಡುತ್ತದೆ. ಯಡಿಯೂರಪ್ಪನವರ ಪ್ರಭಾವ ಕೇಂದ್ರ ಸರ್ಕಾರದ ಮೇಲೆ ಇರಬಹುದು ಎಂದರು.
ಮೊನ್ನೆ ಕೂಡ ಚುನಾವಣಾ ಆಯೋಗ ಸುಪ್ರೀಂಕೋರ್ಟ್ ನೋಟಿಸ್ ನೀಡದಿದ್ದರೂ ಬಂದು ವಾದ ಮಾಡಿತ್ತು. ಈ ವಿಚಾರದಲ್ಲಿ ಚುನಾವಣೆ ಆಯೋಗದ ನಡೆ ಸರಿಯಲ್ಲ. ಆಯೋಗ ಸ್ವತಂತ್ರವಾಗಿ ಕೆಲಸ ನಿರ್ವಹಣೆ ಮಾಡಬೇಕು. ಆದರೆ ಈ ಪ್ರಕರಣದಲ್ಲಿ ಆ ರೀತಿ ನಡೆದುಕೊಂಡಿಲ್ಲ. ಚುನಾವಣಾ ಆಯೋಗದ ಮಧ್ಯಸ್ಥಿಕೆಯಿಂದ ಉಪಚುನಾವಣೆ ಮುಂದೂಡಿಕೆಯಾಗಿದೆ ಎಂದು ಹೇಳಿದರು.
ಇವತ್ತು ಪಕ್ಷದ ಸಂಸದೀಯ ಮಂಡಳಿ ಸಭೆಯಲ್ಲಿ ಅಭ್ಯರ್ಥಿ ಆಯ್ಕೆ ಬಗ್ಗೆ ಚರ್ಚೆ ನಡೆದಿತ್ತು. ಅದರ ಮಧ್ಯೆಯೇ ಕೋರ್ಟ್ ತೀರ್ಪು ಬಂತು. ಪ್ರಾದೇಶಿಕ ಪಕ್ಷವಾಗಿ ಚುನಾವಣೆಗೆ ಸಿದ್ಧತೆ ಮಾಡಿಕೊಂಡಿದ್ದೆವು. ಐಕ್ಯತೆಯಿಂದ ಚುನಾವಣೆ ಎದುರಿಸಲು ಚರ್ಚೆ ಆಗಿದೆ. ಮಹಾಲಯ ಅಮಾವಾಸ್ಯೆಯಾದ ಮೇಲೆ ಅಭ್ಯರ್ಥಿ ಆಯ್ಕೆ ಮಾಡಬೇಕು ಎಂದುಕೊಂಡಿದ್ದೆವು. ಈ ಕುರಿತು ಕುಮಾರಸ್ವಾಮಿ ನಿರ್ಧಾರ ಮಾಡುತ್ತಾರೆ ಎಂದರು.
ಆರು ತಂಡ ರಚನೆ ಮಾಡುತ್ತೇವೆ. ಒಂದು ತಂಡದಲ್ಲಿ ಹತ್ತು ಜನ ಇರುತ್ತಾರೆ. ಇದರಲ್ಲಿ ಮಾಜಿ ಸಚಿವರು, ಮಾಜಿ ಶಾಸಕರು ಸಹ ಇದ್ದು, ರಾಜ್ಯದ 30 ಜಿಲ್ಲೆಗಳಲ್ಲಿ ಪಕ್ಷ ಸಂಘಟನೆ ಮಾಡುತ್ತಾರೆ. ಸಮಸ್ತ ಜಾತಿಗೆ ಸಿಗುವ ರೀತಿ ಜಿಲ್ಲಾ, ತಾಲೂಕು ಪದಾಧಿಕಾರಿಗಳ ಆಯ್ಕೆ ಮಾಡುತ್ತೇವೆ ಎಂದು ದೇವೇಗೌಡರು ತಿಳಿಸಿದರು.