ಬೆಂಗಳೂರು : ನಗರ ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಗಳಿಗೆ ಮೀಸಲು ನಿಗದಿಪಡಿಸಿ ಸರ್ಕಾರ ಹೊರಡಿಸಿದ್ದ ಅಧಿಸೂಚನೆಯನ್ನು ರದ್ದುಪಡಿಸಿದ್ದ ಹೈಕೋರ್ಟ್ ಏಕಸದಸ್ಯ ಪೀಠದ ಆದೇಶಕ್ಕೆ ವಿಭಾಗೀಯ ಪೀಠ ತಡೆಯಾಜ್ಞೆ ನೀಡಿದೆ. ವಿಭಾಗೀಯ ಪೀಠದ ಈ ಆದೇಶದಿಂದಾಗಿ ಹೊಸದಾಗಿ ಅಧ್ಯಕ್ಷ-ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದವರಿಗೆ ತಾತ್ಕಾಲಿಕ ರಿಲೀಫ್ ಸಿಕ್ಕಂತಾಗಿದೆ.
ರಾಜ್ಯದ ಎಲ್ಲ ನಗರಸಭೆ, ಪುರಸಭೆ ಹಾಗೂ ಪಟ್ಟಣ ಪಂಚಾಯತ್‌ಗಳ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಗಳಿಗೆ ಮೀಸಲು ನಿಗದಿಪಡಿಸಿ ರಾಜ್ಯ ಸರ್ಕಾರ ಅಕ್ಟೋಬರ್ 8ರಂದು ಹೊರಡಿಸಿದ್ದ ಅಧಿಸೂಚನೆಯನ್ನು ಏಕಸದಸ್ಯ ಪೀಠ ನ.19ರಂದು ರದ್ದುಪಡಿಸಿ ತೀರ್ಪು ನೀಡಿತ್ತು.
ಈ ಆದೇಶ ರದ್ದುಪಡಿಸುವಂತೆ ಕೋರಿ ರಾಜ್ಯ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು ಹಿರಿಯ ನ್ಯಾಯಮೂರ್ತಿ ಬಿ.ವಿ. ನಾಗರತ್ನ ಹಾಗೂ ನ್ಯಾ. ಎನ್.ಎಸ್. ಸಂಜಯಗೌಡ ಅವರಿದ್ದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.
ಕೆಲ ವಾದ-ಪ್ರತಿವಾದ ಆಲಿಸಿದ ಪೀಠ, ಏಕಸದಸ್ಯ ಪೀಠದ ಆದೇಶಕ್ಕೆ ತಡೆಯಾಜ್ಞೆ ನೀಡಿ ಆದೇಶಿಸಿತು. ಇದೇ ವೇಳೆ ಹಾಸನ, ಆರಸಿಕೇರೆ, ಹರಿಹರ, ಕೊಪ್ಪಳ ಹಾಗೂ ಶಿಡ್ಲಘಟ್ಟ ನಗರಸಭೆ ಮತ್ತು ಚನ್ನಗಿರಿ, ಕೆ ಆರ್ ಪೇಟೆ ಪುರಸಭೆಗಳಿಗೆ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಗಳಿಗೆ ಚುನಾವಣೆ ನಡೆಸಬೇಕು.
ಆದರೆ, ಫಲಿತಾಂಶ ಘೋಷಿಸಬಾರದು ಎಂದು ಸುಪ್ರೀಂಕೋರ್ಟ್ ನೀಡಿರುವ ಆದೇಶ ಈ 5 ನಗರಸಭೆ ಹಾಗೂ 2 ಪುರಸಭೆಗಳಿಗೆ ಅನ್ವಯವಾಗಲಿದೆ ಎಂದು ವಿಭಾಗೀಯ ಪೀಠ ಸ್ಪಷ್ಟಪಡಿಸಿತು. ಹಾಗೆಯೇ, ಮೇಲ್ಮನವಿ ಅರ್ಜಿಯಲ್ಲಿರುವ ಎಲ್ಲ ಪ್ರತಿವಾದಿಗಳಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆ ಮುಂದೂಡಿತು.
ವಿಚಾರಣೆ ಸಂದರ್ಭದಲ್ಲಿ ಸರ್ಕಾರದ ಪರ ವಾದಿಸಿದ ಅಡ್ವೋಕೇಟ್ ಜನರಲ್ ಪ್ರಭುಲಿಂಗ ಕೆ. ನಾವದಗಿ, ಏಕಸದಸ್ಯ ಪೀಠದ ಆದೇಶವನ್ನು ಪ್ರಸ್ತಾಪಿಸಿ. ಹೊಸ ಅಧಿಸೂಚನೆಯಲ್ಲಿ ಶೇ.50ರಷ್ಟು ಮೀಸಲು ಪುನರಾವರ್ತನೆಯಾದರೆ ಚುನಾವಣೆ ನಡೆಸುವ ಸಂಬಂಧ ಸರ್ಕಾರ ಹೈಕೋರ್ಟ್ ಮೊರೆ ಹೋಗಬಹುದು ಎಂದು ಹೇಳಿದೆ. ತನ್ನ ವಿರುದ್ಧವೇ ತಾನೇ ಅರ್ಜಿ ಹಾಕಿಕೊಳ್ಳುವುದು ಹೇಗೆ?.
ಈಗಾಗಲೇ ಅಧ್ಯಕ್ಷ-ಉಪಾಧ್ಯಕ್ಷ ಚುನಾವಣೆಗಳು ನಡೆದು ಆಯ್ಕೆಯಾದವರು ಅಧಿಕಾರವಹಿಸಿಕೊಂಡಿದ್ದಾರೆ. 276 ನಗರ ಸ್ಥಳೀಯ ಸಂಸ್ಥೆಗಳ ಪೈಕಿ ಕೇವಲ ಐದಾರು ನಗರ ಸ್ಥಳೀಯ ಸಂಸ್ಥೆಗಳು ಮಾತ್ರ ಮೀಸಲು ಕ್ರಮವನ್ನು ಪ್ರಶ್ನೆ ಮಾಡಿವೆ.
ಐದಾರು ನಗರ ಸ್ಥಳೀಯ ಸಂಸ್ಥೆಗಳ ಸಲುವಾಗಿ ಇಡೀ 276 ನಗರ ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ-ಉಪಾಧ್ಯಕ್ಷರ ಮೀಸಲಾತಿ ಅಧಿಸೂಚನೆ ರದ್ದುಪಡಿಸುವುದು ನ್ಯಾಯೋಚಿತವಲ್ಲ. ಮೇಲಾಗಿ ಚುನಾವಣೆ ನಡೆದು ಕಳೆದ ಎರಡು ವರ್ಷಗಳಿಂದ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಚುನಾಯಿತ ಆಡಳಿತ ವ್ಯವಸ್ಥೆ ಇಲ್ಲದಂತಾಗಿದೆ ಎಂದು ವಿವರಿಸಿದರು.