ಬೆಂಗಳೂರು : ರಾಜ್ಯದಲ್ಲಿ ಎಷ್ಟು ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸುವುದು ಬಾಕಿ ಇದೆ ಹಾಗೂ ಚುನಾವಣೆಗೆ ಸಂಬಂಧಿಸಿದಂತೆ ಯಾವುದಾದರೂ ಅರ್ಜಿಗಳು ನ್ಯಾಯಾಲಯಗಳಲ್ಲಿ ವಿಚಾರಣೆಗೆ ಬಾಕಿ ಇವೆಯೇ ಎಂಬ ಬಗ್ಗೆ ಮಾಹಿತಿ ನೀಡುವಂತೆ ಹೈಕೋರ್ಟ್ ರಾಜ್ಯ ಚುನಾವಣಾ ಆಯೋಗಕ್ಕೆ ನಿರ್ದೇಶಿಸಿದೆ.
ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳಿಗೆ ಅವಧಿ ಪೂರ್ಣಗೊಂಡ ನಂತರವೂ ಚುನಾವಣೆ ನಡೆಸದಿರುವ ಸರ್ಕಾರದ ಬೇಜವಾಬ್ದಾರಿ ಕೊನೆಗೊಳಿಸಲು ಹಾಗೂ ಕಾಲಮಿತಿಯೊಳಗೆ ಚುನಾವಣೆ ನಡೆಸುವಂತೆ ರಾಜ್ಯ ಸರ್ಕಾರ ಹಾಗೂ ಚುನಾವಣಾ ಆಯೋಗಕ್ಕೆ ಸೂಕ್ತ ನಿರ್ದೇಶನಗಳನ್ನು ನೀಡಲು ಹೈಕೋರ್ಟ್ ದಾಖಲಿಸಿಕೊಂಡಿರುವ ಸ್ವಯಂಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ ಎಸ್ ಓಕ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.
ಓದಿ:ನ್ಯಾಯಮೂರ್ತಿಗಳನ್ನು ಕೊಲ್ಲುವ ಬೆದರಿಕೆ ಹಾಕಿದ 72ರ ವೃದ್ಧ: ಹೈಕೋರ್ಟ್ ಕ್ಷಮೆ ಕೇಳಿದ ರಾವ್
ಕೆಲಕಾಲ ವಾದ ಆಲಿಸಿದ ಪೀಠ, ಸಂವಿಧಾನದ ವಿಧಿ 243 (ಯು) ಪ್ರಕಾರ ಯಾವುದೇ ನಗರ ಸ್ಥಳೀಯ ಸಂಸ್ಥೆಗಳ ಚುನಾಯಿತ ಅವಧಿ ಪೂರ್ಣಗೊಳ್ಳುವ ಮೊದಲೇ ಮೀಸಲಾತಿ ಹಾಗೂ ವಾರ್ಡ್ ಮರುವಿಂಗಡಣೆ ಪ್ರಕ್ರಿಯೆ ಪೂರ್ಣಗೊಳಿಸಬೇಕು. ಆದರೆ, ಪ್ರತಿ ಬಾರಿಯೂ ಮೀಸಲಾತಿ ಮತ್ತು ವಾರ್ಡ್ ಮರುವಿಂಗಡಣೆ ನೆಪದಿಂದಲೇ ಚುನಾವಣೆಗಳು ವಿಳಂಬವಾಗುತ್ತಿವೆ ಎಂದು ಬೇಸರ ವ್ಯಕ್ತಪಡಿಸಿತು.
ಅಲ್ಲದೇ ಸ್ಥಳೀಯ ಸಂಸ್ಥೆಗಳ ಅವಧಿ ಮುಗಿಯುವ ಮುನ್ನವೇ ಸರ್ಕಾರ ಮೀಸಲು ಹಾಗೂ ವಾರ್ಡ್ ಮರುವಿಂಗಡಣೆ ಪ್ರಕ್ರಿಯೆ ಪೂರ್ಣಗೊಳಿಸಬೇಕು. ಅದಕ್ಕಾಗಿ ಕಾಲಮಿತಿ ನಿಗದಿಪಡಿಸುವ ಅಗತ್ಯವಿದೆ. ಚುನಾವಣಾ ಆಯೋಗ ಈ ಕುರಿತು ತನ್ನ ನಿರ್ಧಾರ ತಿಳಿಸಬೇಕು ಎಂದು ಸೂಚಿಸಿತು.
ಇದೇ ವೇಳೆ ರಾಜ್ಯದಲ್ಲಿ ಎಷ್ಟು ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ ಬಾಕಿ ಇವೆ, ಸುಪ್ರೀಂಕೋರ್ಟ್, ಹೈಕೋರ್ಟ್ ಸೇರಿ ನ್ಯಾಯಾಲಯಗಳಲ್ಲಿ ಚುನಾವಣೆಗೆ ಸಂಬಂಧಿಸಿದ ಎಷ್ಟು ಅರ್ಜಿಗಳು ವಿಚಾರಣೆಗೆ ಬಾಕಿ ಇವೆ ಎಂಬ ವಿವರಗಳನ್ನು ಸಲ್ಲಿಸುವಂತೆ ಆಯೋಗಕ್ಕೆ ಸೂಚಿಸಿ ವಿಚಾರಣೆಯನ್ನು ಏ.15ಕ್ಕೆ ಮುಂದೂಡಿತು.