ಬೆಂಗಳೂರು: ಶಿವಮೊಗ್ಗ ಜಿಲ್ಲೆಯ ಆಯನೂರು ಹೋಬಳಿ ವೀರಣ್ಣನಬೆನವಳ್ಳಿ ಗ್ರಾಮದ ಸರ್ವೆ ನಂಬರ್ 78ರಲ್ಲಿ 89 ಎಕರೆ 31 ಗುಂಟೆ ಅರಣ್ಯ ಭೂಮಿಯನ್ನು ಅರಣ್ಯೇತರ ಉದ್ದೇಶಗಳಿಗೆ ಮಂಜೂರು ಮಾಡಿ 2017ರ ಜ. 16ರಂದು ಜಿಲ್ಲಾಧಿಕಾರಿ ಹೊರಡಿಸಿದ್ದ ಆದೇಶವನ್ನು ಹೈಕೋರ್ಟ್ ರದ್ದುಪಡಿಸಿದೆ.
ಈ ಕುರಿತು ಪಿ.ಮಂಜಪ್ಪ ಮತ್ತಿತರ ಸ್ಥಳೀಯ ಗ್ರಾಮಸ್ಥರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕ ನೇತೃತ್ವದ ವಿಭಾಗೀಯ ಪೀಠ ಈ ಆದೇಶ ಮಾಡಿದೆ. ಅರಣ್ಯ ಭೂಮಿಯನ್ನು ಅರಣ್ಯೇತರ ಉದ್ದೇಶಗಳಿಗೆ ಮಂಜೂರು ಮಾಡುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ಸ್ಪಷ್ಟವಾಗಿ ಹೇಳಿದೆ. ಮೇಲಾಗಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸುವಾಗ ಕಾನೂನು ಅಂಶಗಳನ್ನು ಪರಿಗಣಿಸಿಲ್ಲ ಎಂದು ಅಭಿಪ್ರಾಯಪಟ್ಟು, ಜಿಲ್ಲಾಧಿಕಾರಿ ಆದೇಶವನ್ನು ರದ್ದುಪಡಿಸಿ ಆದೇಶಿಸಿದೆ.
ಇದನ್ನೂ ಓದಿ.. ವೃದ್ಧಾಪ್ಯ ವೇತನ ವಿಳಂಬ: ಸರ್ಕಾರದಿಂದ ವಿವರಣೆ ಕೇಳಿದ ಹೈಕೋರ್ಟ್
ವೀರಣ್ಣನಬೆನವಳ್ಳಿ ಗ್ರಾಮದ ಸರ್ವೆ ನಂಬರ್ 78ರಲ್ಲಿನ 89.31 ಎಕರೆ ಜಮೀನು ಸರ್ಕಾರಿ ಗೋಮಾಳ ಜಾಗವಾಗಿದ್ದು, ಇದನ್ನು ಸರ್ಕಾರ 1966ರಲ್ಲಿ ಅರಣ್ಯ ಇಲಾಖೆಗೆ ಹಸ್ತಾಂತರಿಸಿತ್ತು. ಅರಣ್ಯ ಇಲಾಖೆ 1989ರಲ್ಲಿ ಇದೇ ಜಮೀನನ್ನು ಅರಣ್ಯ ಅಭಿವೃದ್ಧಿ ನಿಗಮಕ್ಕೆ ಹಸ್ತಾಂತರ ಮಾಡಿತ್ತು. ಆದರೆ ಜಿಲ್ಲಾಧಿಕಾರಿ ಈ ಜಾಗವನ್ನು 2017ರ ಜ. 16ರಂದು ಅರಣ್ಯೇತರ ಉದ್ದೇಶಗಳಿಗೆ ಮಂಜೂರು ಮಾಡಿ ಆದೇಶ ಹೊರಡಿಸಿದ್ದರು. ಅದರಂತೆ ಜಿಲ್ಲಾಡಳಿತ ಅರಣ್ಯ ಜಾಗದಲ್ಲಿ ಹಕ್ಕಿಪಿಕ್ಕಿ ಜನಾಂಗದವರಿಗೆ ಮನೆಗಳನ್ನು ನಿರ್ಮಿಸಲು ಮುಂದಾಗಿತ್ತು. ಇದನ್ನು ಪ್ರಶ್ನಿಸಿ ಹೈಕೋರ್ಟ್‌ಗೆ ಪಿಐಎಲ್ ಸಲ್ಲಿಸಲಾಗಿತ್ತು.