ಬೆಂಗಳೂರು : ಹಣ್ಣು, ತರಕಾರಿ ಸರಬರಾಜಿನಲ್ಲಿ ಯಾವುದೇ ತೊಂದರೆ ಆಗದಂತೆ ಕ್ರಮವಹಿಸಲು ತೋಟಗಾರಿಕಾ ಸಚಿವ ನಾರಾಯಣಗೌಡ ಅವರು ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ.
ನಗರದಲ್ಲಿ ಇಂದು ತೋಟಗಾರಿಕೆ ಇಲಾಖೆ ಅಧಿಕಾರಿಗಳ ಜತೆ ಸಭೆ ನಡೆಸಿದ ಅವರು, ಹಾಪ್‌ಕಾಮ್ಸ್‌ಗಳ ಮೂಲಕ ಬೆಂಗಳೂರಿನಲ್ಲಿ 225, ಇತರ ಜಿಲ್ಲೆಗಳಲ್ಲಿ 257 ಮಳಿಗೆಗಳ ಮೂಲಕ ಹಣ್ಣು, ತರಕಾರಿ ಮಾರಾಟಕ್ಕೆ ವ್ಯವಸ್ಥೆ ಮಾಡಲಾಗಿದೆ. ಹಾಪ್‌ಕಾಮ್ಸ್‌ಗಳ ಮೂಲಕ ಪ್ರತಿ ದಿನ 100 ಟನ್ ಮಾರಾಟವಾಗುತ್ತಿದೆ ಎಂದು ಹೇಳಿದ್ದಾರೆ.
ರೈತರಿಂದ ನೇರವಾಗಿ ಕೃಷಿ ಉತ್ಪನ್ನಗಳನ್ನ ಆಯಾಯ ಭಾಗಗಳಲ್ಲಿ ಮಾರಾಟಕ್ಕೆ ವ್ಯವಸ್ಥೆ ಮಾಡಲಾಗಿದೆ. ಜಿಲ್ಲಾ ಮಟ್ಟದಲ್ಲಿ ಹಾಪ್‌ಕಾಮ್ಸ್ ಸಹಯೋಗದೊಂದಿಗೆ ತೋಟಗಾರಿಕಾ ಇಲಾಖೆಯಿಂದ ಮೊಬೈಲ್ ವ್ಯಾನ್‌ಗಳ ಮೂಲಕ ಮನೆಮನೆಗೆ ಹಣ್ಣು, ತರಕಾರಿ ಮಾರಾಟ ಮಾಡಲಾಗ್ತಿದೆ. ರೈತ ಉತ್ಪಾದಕಾ ಸಂಸ್ಥೆಗಳ ಮೂಲಕ ಹಣ್ಣು ತರಕಾರಿ ಮಾರಾಟಕ್ಕೆ ಸೂಚನೆ ನೀಡಿದ್ದಾರೆ.
ಹಿರಿಯ ಅಧಿಕಾರಿಗಳ ತಂಡದಿಂದ ಆಯಾ ಜಿಲ್ಲೆಗಳ ಅಧಿಕಾರಿಗಳ ಜತೆ ನಿರಂತರ ಸಂಪರ್ಕ ಇಟ್ಟುಕೊಂಡು ಹಣ್ಣು ತರಕಾರಿ ಸರಬರಾಜಿನಲ್ಲಿ ತೊಂದರೆಯಾಗದಂತೆ ನೋಡಿಕೊಳ್ಳಲು ಅಧಿಕಾರಿಗಳಿಗೆ ಜವಾಬ್ದಾರಿ ನೀಡಿದ್ದಾರೆ. ದ್ರಾಕ್ಷಿ ಬೇಡಿಕೆ ಇರುವ ಸ್ಥಳಗಳನ್ನು ಗುರುತಿಸಿ ಮಾರಾಟ ವ್ಯವಸ್ಥೆ ಕಲ್ಪಿಸಲು ಕ್ರಮವಹಿಸಬೇಕು ಎಂದು ಅಧಿಕಾರಿಗಳಿಗೆ ಸಚಿವರು ಸೂಚಿಸಿದ್ದಾರೆ.