ಬೆಂಗಳೂರು: ಈ ಬಾರಿಯ ಪ್ರೆಸ್ ಕ್ಲಬ್ ವರ್ಷದ ವ್ಯಕ್ತಿ ಪ್ರಶಸ್ತಿಯನ್ನು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಅವರಿಗೆ ನೀಡಲಾಗಿದೆ. ಯುಗದ ಸಾಧಕ ಪ್ರಶಸ್ತಿಯನ್ನ ನಿಘಂಟು ತಜ್ಞ ಪ್ರೊ. ಜಿ ವೆಂಕಟಸುಬ್ಬಯ್ಯ ಅವರಿಗೆ ನೀಡಿ ಗೌರವಿಸಲಾಯಿತು.
ಅರಮನೆ ಮೈದಾನದಲ್ಲಿ ಇಂದು ನಡೆದ ವಾರ್ಷಿಕ ಪ್ರಶಸ್ತಿ ಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪ್ರಶಸ್ತಿ ಪ್ರದಾನ ಮಾಡಿದರು. ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ, ಕೃಷಿ ವಲಯಕ್ಕೆ ಹೆಚ್ಚಿನ ಆದ್ಯತೆ ಅಗತ್ಯವಿದ್ದು, ಮುಂಬರಲಿರುವ ಬಜೆಟ್ನಲ್ಲಿ ಕೃಷಿಗೆ ಉತ್ತಮ ಅವಕಾಶ ನೀಡುವಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಮನವಿ ಮಾಡಿದ್ದಾರೆ.
ಪ್ರಶಸ್ತಿ ಪ್ರದಾನ ಮಾಡಿದ ನಂತರ ಮಾತನಾಡಿದ ಸಿಎಂ ಬಿ.ಎಸ್. ಯಡಿಯೂರಪ್ಪ, ಪತ್ರಿಕೋದ್ಯಮ ರಂಗದಲ್ಲಿ ಸಾಕಷ್ಟು ಬದಲಾವಣೆಯಾಗುತ್ತಿದೆ, ಪತ್ರಿಕಾ ಸಂಘಟನೆಯಲ್ಲಿ ವಿಘಟನೆ ಕಂಡುಬರುತ್ತಿದೆ. ಅದಕ್ಕೆ ಅವಕಾಶ ನೀಡಬಾರದು ಎಲ್ಲರೂ ಒಂದಾಗಿ ಒಟ್ಟಾಗಿ ಹೋಗಬೇಕು ಎಂದು ಸಲಹೆ ನೀಡಿದರು.
ಈ ವೇಳೆ ವೇದಿಕೆ ಮೇಲೆ ವಿಲಾಸ್ ನಾಯಕ್ ಎನ್ನುವವರು ವೀರೇಂದ್ರ ಹೆಗ್ಗಡೆಯವರ ಚಿತ್ರ ಬಿಡಿಸುವ ಮೂಲಕ ಗಮನ ಸೆಳೆದರು. ವೇದಿಕೆಯಲ್ಲಿ ಉಪಮುಖ್ಯಮಂತ್ರಿಗಳಾದ ಲಕ್ಷ್ಮಣ ಸವದಿ, ಡಾ.ಅಶ್ವತ್ಥನಾರಾಯಣ್, ಬಿಜೆಪಿ ಯುವ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಬಿ.ವೈ. ವಿಜಯೇಂದ್ರ, ನಟ ಪುನೀತ್ ರಾಜ್ ಕುಮಾರ್ ಹಾಗೂ ಇತರರು ಉಪಸ್ಥಿತರಿದ್ದರು.