ಬೆಂಗಳೂರು: ವಲಸೆ ಕಾರ್ಮಿಕರ ಪ್ರಯಾಣ ವೆಚ್ಚವನ್ನು ಸರ್ಕಾರವೇ ಭರಿಸಲಿದೆ ಎಂದು ರಾಜ್ಯ ಸರ್ಕಾರ ಹೈಕೋರ್ಟ್ಗೆ ಮಾಹಿತಿ ನೀಡಿದೆ. ಹೊರ ರಾಜ್ಯಗಳ ಕಾರ್ಮಿಕರನ್ನು ಅವರ ಸ್ವಂತ ರಾಜ್ಯಗಳಿಗೆ ಕಳುಹಿಸಿಕೊಡುವ ವಿಚಾರಕ್ಕೆ ಸಂಬಂಧಿಸಿದಂತೆ ಸಲ್ಲಿಸಿದ್ದ ಅರ್ಜಿ ವಿಚಾರಣೆ ವೇಳೆ ಸರ್ಕಾರ ಈ ಮಾಹಿತಿ ನೀಡಿದೆ.
ಲಾಕ್ಡೌನ್ ಪರಿಣಾಮ ರಾಜ್ಯದಲ್ಲಿ ಸಿಲುಕಿಕೊಂಡಿರುವ ಹೊರ ರಾಜ್ಯಗಳ ಕಾರ್ಮಿಕರನ್ನು ಅವರ ಊರುಗಳಿಗೆ ಕಳುಹಿಸಿಕೊಡುವ ವಿಚಾರಕ್ಕೆ ಸಂಬಂಧಿಸಿದಂತೆ ಎಐಸಿಟಿಯು ಸಂಘಟನೆ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕಾ ಅವರಿದ್ದ ವಿಭಾಗೀಯ ಪೀಠ ವಿಚಾರಣೆ ನಡೆಸಿತು. ಈ ವೇಳೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯ ಭಾಸ್ಕರ್ ವಿಡಿಯೋ ಕಾನ್ಫರೆನ್ಸ್ ಮೂಲಕ ಹಾಜರಾಗಿ ಪೀಠಕ್ಕೆ ಮಾಹಿತಿ ನೀಡಿದರು. ಹೊರ ರಾಜ್ಯಗಳಿಗೆ ವಾಪಸಾಗುವ ವಲಸೆ ಕಾರ್ಮಿಕರ ಪ್ರಯಾಣ ವೆಚ್ಚವನ್ನು ರಾಜ್ಯ ಸರ್ಕಾರವೇ ಭರಿಸಲಿದೆ.
ಈ ಸಂಬಂಧ ಬೆಂಗಳೂರು, ಮಂಗಳೂರು, ಹುಬ್ಬಳ್ಳಿ, ಮೈಸೂರು, ಕೊಂಕಣ ರೈಲ್ವೆ ಹಾಗೂ ಸೊಲ್ಲಾಪುರ ವಲಯ ರೈಲ್ವೆ ವ್ಯವಸ್ಥಾಪಕರಿಗೆ ಪತ್ರ ಬರೆಯಲಾಗಿದೆ. ಅಲ್ಲದೆ ರೈಲು ನಿಲ್ದಾಣಗಳಿಗೆ ತೆರಳುವ ವಲಸೆ ಕಾರ್ಮಿಕರಿಂದ ಯಾವುದೇ ಶುಲ್ಕವನ್ನು ಪಡೆದುಕೊಳ್ಳದಂತೆ ಬಿಎಂಟಿಸಿ ಹಾಗೂ ಕೆಎಸ್ಆರ್ಟಿಸಿ ವ್ಯವಸ್ಥಾಪಕ ನಿರ್ದೇಶಕರಿಗೆ ಸೂಚಿಸಲಾಗಿದೆ. ಕಾರ್ಮಿಕರನ್ನು ಅವರ ತವರು ರಾಜ್ಯಗಳಿಗೆ ಕಳುಹಿಸಿಕೊಡಲು ರಾಜ್ಯ ಸರ್ಕಾರ ಎಲ್ಲಾ ಕ್ರಮಗಳನ್ನು ಕೈಗೊಂಡಿದೆ ಎಂದು ವಿವರಿಸಿದರು. ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ನೀಡಿದ ವಿವರಣೆ ದಾಖಲಿಸಿಕೊಂಡ ಪೀಠ, ರಾಜ್ಯದಲ್ಲಿ ಮತ್ತಷ್ಟು ವಲಸೆ ಕಾರ್ಮಿಕರು ಇದ್ದಾರೆ. ಅವರಲ್ಲಿ ಊರುಗಳಿಗೆ ವಾಪಸಾಗಲು ಎಷ್ಟು ಜನ ನೋಂದಾಯಿಸಿಕೊಂಡಿದ್ದಾರೆ. ಇವರ ಪ್ರಯಾಣಕ್ಕೆ ಸರ್ಕಾರ ಯಾವ ವ್ಯವಸ್ಥೆ ಮಾಡಿದೆ ಎಂಬ ಮಾಹಿತಿಯನ್ನು ಗುರುವಾರ ಸಲ್ಲಿಸುವಂತೆ ಸೂಚಿಸಿ ವಿಚಾರಣೆ ಮುಂದೂಡಿದೆ.