ಬೆಂಗಳೂರು: ಕೊರೊನಾ ನಿಯಂತ್ರಣಕ್ಕಾಗಿ ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಲಾಕ್‌ಡೌನ್ ಹೇರಿಕೆ ಮಾಡಲಾಗಿದ್ದು, ಇದೇ ವಿಷಯವಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ರಾಜ್ಯದ ಜನರನ್ನುದ್ದೇಶಿಸಿ ಮಾತನಾಡಿದರು.
ನಾಳೆಯಿಂದ ರಾಜ್ಯದ ಯಾವುದೇ ಮೂಲೆಯಲ್ಲಿ ಲಾಕ್‌ಡೌನ್ ಇರಲ್ಲ ಎಂದು ಸ್ಪಷ್ಟಪಡಿಸಿರುವ ಅವರು, ಜಿಲ್ಲಾಧಿಕಾರಿಗಳು ಲಾಕ್‌ಡೌನ್ ಬಗ್ಗೆ ಪ್ರಸ್ತಾಪ ಮಾಡದಂತೆ ಸೂಚನೆ ನೀಡಿದರು. ಕಂಟೈನ್‌ಮೆಂಟ್ ಝೋನ್ಗಳಲ್ಲಿ ಬಿಗಿ ಕ್ರಮ ಕೈಗೊಳ್ಳಲು ಸೂಚನೆ ನೀಡಿದ್ದು, ಅಂತರ ಕಾಯ್ದುಕೊಂಡು, ಕಡ್ಡಾಯವಾಗಿ ಮಾಸ್ಕ್ ಹಾಕಿಕೊಳ್ಳುವಂತೆ ಸಾರ್ವಜನಿಕರಲ್ಲಿ ಮನವಿ ಮಾಡಿದರು.
'ಕೋವಿಡ್ ತಡೆಯಲು ಲಾಕ್‌ಡೌನ್ ಒಂದೇ ಪರಿಹಾರವಲ್ಲ'
ರಾಜ್ಯದಲ್ಲಿ ಆರ್ಥಿಕ ಸಂಪನ್ಮೂಲ ಕ್ರೋಢೀಕರಣ ಅಗತ್ಯವಾಗಿದೆ. ಕೋವಿಡ್-19 ತಡೆಗಟ್ಟುವುದಕ್ಕೆ ಲಾಕ್‌ಡೌನ್ ಒಂದೇ ಪರಿಹಾರವಲ್ಲ. ಹೀಗಾಗಿ ಕರ್ನಾಟಕದ ಯಾವುದೇ ಜಿಲ್ಲೆಯಲ್ಲೂ ಲಾಕ್‌ಡೌನ್ ಇರಲ್ಲ. ಆರಂಭದಲ್ಲಿ ಕೊರೊನಾ ತಡೆಗಟ್ಟುವಲ್ಲಿ ನಾವು ಯಶಸ್ವಿಯಾಗಿದ್ದೆವು. ಆದರೆ ಬೆಂಗಳೂರಿನಲ್ಲಿ ಕಳೆದ ಕೆಲ ದಿನಗಳಿಂದ ಹೆಚ್ಚಿನ ಮಟ್ಟದಲ್ಲಿ ಸೋಂಕಿತ ಪ್ರಕರಣಗಳು ಕಾಣಿಸಿಕೊಂಡಿದ್ದು, ಸದ್ಯದ ಪರಿಸ್ಥಿತಿಯಲ್ಲಿ ತಡೆಗಟ್ಟಲು ಸಾಧ್ಯವಾಗುತ್ತಿಲ್ಲ. ಈ ಬಗ್ಗೆ ಕಟ್ಟುನಿಟ್ಟಾಗಿ ಮಾರ್ಗಸೂಚಿ ಹಾಗೂ ನಿಯಮ ಪಾಲಿಸಿದರೆ ಮಾತ್ರ ಸೋಂಕು ನಿಯಂತ್ರಿಸಲು ಸಾಧ್ಯವಿದೆ ಎಂದು ಸಿಎಂ ಹೇಳಿದರು.
'ಕೋವಿಡ್ ಸಾಮಗ್ರಿ ಖರೀದಿಯಲ್ಲಿ ಅವ್ಯವಹಾರವಾಗಿಲ್ಲ'
ಇದೇ ವೇಳೆ ಕೋವಿಡ್ ಕಿಟ್ ಖರೀದಿಯಲ್ಲಿ ಅವ್ಯವಹಾರವಾಗಿದೆ ಎಂಬ ವಿಷಯಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ಹಣ ದುರುಪಯೋಗವಾಗಿಲ್ಲ. ವಿಪಕ್ಷ ನಾಯಕರು ನಮಗೆ ಸಹಕಾರ ನೀಡಬೇಕು. ಆರ್ಥಿಕ ಸ್ಥಿತಿ ಸುಧಾರಣೆಗೋಸ್ಕರ ಸಹಕರಿಸಿ ಎಂದಿರುವ ಅವರು ಮಾಧ್ಯಮ ಮಿತ್ರರು ಹಾಗೂ ಕೊರೊನಾ ವಾರಿಯರ್ಸ್ ಸೇವೆಗೆ ಮೆಚ್ಚುಗೆ ವ್ಯಕ್ತಪಡಿಸಿದರು.