ಬೆಂಗಳೂರು: ಹಾಲುಮತ ಸಂಸ್ಕೃತಿ ವೈಭವ ಕಾರ್ಯಕ್ರಮವನ್ನು ಜನವರಿ 12ರಿಂದ 14ರವರೆಗೆ ಮೂರು ದಿನ ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ತಿಂಥಣಿ ಬ್ರಿಡ್ಜ್ನಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಮಾಜಿ ಸಚಿವ ಹೆಚ್.ವಿಶ್ವನಾಥ್ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಮಾಜಿ ಸಚಿವ ಹೆಚ್.ವಿಶ್ವನಾಥ್, ಕಲಬುರಗಿ ವಿಭಾಗದ ಶ್ರೀ ಕಾಗಿನೆಲೆ ಮಹಾಸಂಸ್ಥಾನ ಕನಕ ಗುರುಪೀಠದ ಶ್ರೀ ಸಿದ್ದರಾಮನಂದ ಸ್ವಾಮೀಜಿ ಅವರು 12 ವರ್ಷಗಳಿಂದ ಹಾಲುಮತ ಸಂಸ್ಕೃತಿ ವೈಭವ ಕಾರ್ಯಕ್ರಮ ನಡೆಸಿಕೊಂಡು ಬಂದಿದ್ದಾರೆ. ಅದೇ ರೀತಿ ಈ ವರ್ಷವೂ ಕಾರ್ಯಕ್ರಮ ಆಯೋಜಿಸಲಿದ್ದು, ಜ. 13ರಂದು ಆದಿವಾಸಿ ಸಂಸ್ಕೃತಿ ಸಮಾವೇಶವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಉದ್ಘಾಟಿಸಲಿದ್ದಾರೆ. ಹಾಗೆಯೇ ಈ ಕಾರ್ಯಕ್ರಮದ ಸಾನ್ನಿಧ್ಯವನ್ನು ಕನಕಪುರ ಪೀಠದ ಶಿವಾನಂದಪುರಿ ಸ್ವಾಮೀಜಿ ವಹಿಸಲಿದ್ದಾರೆ ಎಂದು ಮಾಹಿತಿ ನೀಡಿದರು.
ಕಲಬುರಗಿ ವಿಭಾಗದ ಶ್ರೀ ಕಾಗಿನೆಲೆ ಮಹಾಸಂಸ್ಥಾನ ಕನಕ ಗುರುಪೀಠದ ಶ್ರೀ ಸಿದ್ದರಾಮನಂದ ಸ್ವಾಮೀಜಿ ಮಾತನಾಡಿ, ಕಾಗಿನೆಲೆ ಮಹಾಸಂಸ್ಥಾನ ಕನಕ ಗುರುಪೀಠ ಹಾಲುಮತ ಕೇಂದ್ರದ ವತಿಯಿಂದ ನಡೆಯುವ ಈ ಕಾರ್ಯಕ್ರಮದ ದಿವ್ಯ ಸಾನ್ನಿಧ್ಯವನ್ನು ನಿರಂಜನಾನಂದಪುರಿ ಸ್ವಾಮೀಜಿ, ಶಿವಾನಂದಪುರಿ ಸ್ವಾಮೀಜಿ, ಈಶ್ವರಾನಂದಪುರಿ ಸ್ವಾಮೀಜಿ ವಹಿಸಲಿದ್ದಾರೆ ಎಂದರು.
ಕಾರ್ಯಕ್ರಮದಲ್ಲಿ ಕೇಂದ್ರ ಸಚಿವರಾದ ಫಗ್ಗನ್ ಸಿಂಗ್ ಕುಲಸ್ತೆ, ರೇಣುಕಾಸಿಂಗ್ ಸರುತಾ, ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ಶ್ರೀರಾಮಲು ಭಾಗವಹಿಸಲಿದ್ದಾರೆ. ಇದೇ ಸಂದರ್ಭದಲ್ಲಿ ಕೊಡಗಿನ ಮುತ್ತಮ್ಮ ಎಂಬುವರಿಗೆ ಸಿದ್ಧಶ್ರೀ ಪ್ರಶಸ್ತಿ, ಜಯದೇವ ಮೆಣಸಗಿ ಅವರಿಗೆ ಹಾಲುಮತ ಭಾಸ್ಕರ ಪ್ರಶಸ್ತಿ ಹಾಗೂ ಕೆ.ಎಂ.ಮೆತ್ರಿ ಅವರಿಗೆ ಕನಕ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ಸ್ವಾಮೀಜಿ ಮಾಹಿತಿ ನೀಡಿದರು.