ಬೆಂಗಳೂರು: ಸಿಲಿಕಾನ್ ಸಿಟಿಯ ಕೆಲ ಭಾಗಗಳಲ್ಲಿ ಗಾಳಿ ಸಹಿತ ವರುಣ ಆರ್ಭಟಿಸುತ್ತಿದ್ದಾನೆ. ಮೇಲ್ಮೈ ಸುಳಿಗಾಳಿ ಇರುವುದರಿಂದ ಬೆಂಗಳೂರು ಸೇರಿದಂತೆ ರಾಜ್ಯದ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಇಂದಿನಿಂದ 3 ದಿನಗಳ ಕಾಲ ಸಾಧಾರಣ ಮಳೆಯಾಗಲಿದೆ ಎಂದು ರಾಜ್ಯ ಪ್ರಕೃತಿ ವಿಕೋಪ ಉಸ್ತುವಾರಿ ಕೇಂದ್ರದ ನಿರ್ದೇಶಕ ಶ್ರೀನಿವಾಸ ರೆಡ್ಡಿ ತಿಳಿಸಿದ್ದಾರೆ.
ಇಂದು ಮಳೆಯ ಪ್ರಮಾಣ ಹೆಚ್ಚಾಗಲಿದ್ದು, ನಾಳೆಯಿಂದ ಮಳೆಯ ಪ್ರಮಾಣ ಕಡಿಮೆಯಾಗಲಿದೆ. ನಗರದ ಶಾಂತಿನಗರ, ಜಯನಗರ, ಕೋರಮಂಗಲ, ಕೆ.ಆರ್.ಮಾರುಕಟ್ಟೆ ಸೇರಿದಂತೆ ಮೆಜೆಸ್ಟಿಕ್ ಭಾಗಗಳಲ್ಲಿ ಮಳೆಯಾಗುತ್ತಿದೆ.
ಅರ್ಧ ಗಂಟೆಗಳ ಕಾಲ ಮಳೆ ಸುರಿದು ಮಳೆಯ ಪ್ರಮಾಣವೂ ಕಡಿಮೆಯಾಗಿದೆ. ಅಷ್ಟೇ ಅಲ್ಲದೆ ಅಲ್ಲಲ್ಲಿ ಚದುರಿದ ಮಳೆಯಾಗಲಿದ್ದು, ದಕ್ಷಿಣ ಕನ್ನಡ, ಹಾಸನ, ಕೊಡಗು, ಮಂಡ್ಯ, ಚಾಮರಾಜನಗರ, ಉಡುಪಿ, ಬೆಂಗಳೂರು, ರಾಮನಗರ ಸೇರಿದಂತೆ ಕೋಲಾರದ ಹಲವೆಡೆ ಮಳೆಯಾಗಲಿದೆ ಎಂದು ಹವಾಮಾನ ವರದಿ ತಿಳಿಸಿದೆ.