ಬೆಂಗಳೂರು: ಮುಂದಿನ ಎರಡು ಮೂರು ದಿನ ರಾಜ್ಯದ ಬಹುತೇಕ ಎಲ್ಲಾ ಜಿಲ್ಲೆಗಳಲ್ಲೂ ಮಳೆಯಾಗಲಿದೆ ಎಂದು, ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ನಿರ್ದೇಶಕರಾದ ಡಾ. ಶ್ರೀನಿವಾಸ ರೆಡ್ಡಿ ಹೇಳಿದರು.
ಕಳೆದ ಮೂರ್ನಾಲ್ಕು ದಿನದಿಂದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ಆದರೆ, ಕರಾವಳಿ ಮಲೆನಾಡು ಜಿಲ್ಲೆಗಳಲ್ಲಿ ಮಳೆಯಾಗಿರಲಿಲ್ಲ. ಮುಂದಿನ ಎರಡು ಮೂರು ದಿನಗಳಲ್ಲಿ ರಾಜ್ಯದ ಬಹುತೇಕ ಎಲ್ಲಾ ಜಿಲ್ಲೆಗಳಿಗೂ ಮಳೆಯಾಗಲಿದೆ. ಅರಬ್ಬಿ ಸಮುದ್ರದಲ್ಲಿ, ಕೇರಳ ಕರಾವಳಿ ಭಾಗದಲ್ಲಿ ಮೇಲ್ಮೈ ಸುಳಿಗಾಳಿ ಕಾಣಿಸಿಕೊಂಡಿರುವುದರಿಂದ ಮುಂದಿನ ಎರಡು ದಿನದಲ್ಲಿ ವಾಯುಭಾರ ಕುಸಿತವಾಗಲಿದೆ. ಈ ಪರಿಣಾಮವಾಗಿ ಉತ್ತರ ಒಳನಾಡು, ದಕ್ಷಿಣ ಒಳನಾಡು ಹಾಗೂ ಕರಾವಳಿ ಭಾಗದಲ್ಲಿ ನಾಳೆಯಿಂದ ಕೆಲವೆಡೆ ಭಾರೀ ಮಳೆಯಾಗಲಿದೆ ಎಂದರು.
31ರ ನಂತರ ಉತ್ತರ ಒಳನಾಡಿನ ಹಲವೆಡೆ ಸಾಧಾರಣ ಮಳೆಯಾಗಲಿದೆ. ಬಂಗಾಳಕೊಲ್ಲಿಯಲ್ಲೂ ಮೇಲ್ಮೈ ಸುಳಿಗಾಳಿಯಿಂದಾಗಿ ಆಂಧ್ರದಿಂದ ತಮಿಳುನಾಡಿನ ವರೆಗೆ ಟ್ರಫ್ ನಿರ್ಮಾಣವಾಗಿರುವುದರಿಂದಲೂ ಮಳೆಯಾಗಲಿದೆ. ನಿರೀಕ್ಷೆಗಿಂತ ಮೊದಲೇ ಜೂನ್ ಒಂದಕ್ಕೆ ಕೇರಳಕ್ಕೆ ಮಾನ್ಸೂನ್ ಪ್ರವೇಶವಾಗಲಿದೆ. ಇದಾದ ಒಂದೆರಡು ದಿನಗಳಲ್ಲಿ ಕರ್ನಾಟಕ ರಾಜ್ಯವನ್ನೂ ಮುಂಗಾರು ಪ್ರವೇಶಿಸಲಿದೆ ಎಂದರು.