ಬೆಂಗಳೂರು: ಹೊಸ ವರ್ಷಾಚರಣೆಗೆ ಬೆಂಗಳೂರು ಸಜ್ಜಾಗಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ನಗರ ಪೊಲೀಸರು ಮುಂಜಾಗ್ರತಾ ಕ್ರಮ ವಹಿಸಿದ್ದಾರೆ. ಈ ಸಂಬಂಧ ಅಗತ್ಯವಿರುವ ಕಡೆಗಳಲ್ಲಿ ಸೂಕ್ತ ಕಟ್ಟೆಚ್ಚರ ವಹಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ತಿಳಿಸಿದರು.
ಹೊಸ ವರ್ಷಾಚರಣೆಗೆ ಈಗಾಗಲೇ ಮಾರ್ಗಸೂಚಿ ನೀಡಲಾಗಿದೆ. ಡ್ರಿಂಕ್ ಆ್ಯಂಡ್ ಡ್ರೈವ್ ಟೆಸ್ಟ್ ಮಾಡಲಾಗುತ್ತಿದೆ. 31ರಂದು ಬಿಗಿ ಭದ್ರತೆ ಕೈಗೊಳ್ಳಲಾಗುವುದು. ಎಂಜಿ ರಸ್ತೆ, ಬ್ರಿಗೇಡ್ ರಸ್ತೆ, ಕಬ್ಬನ್ ಪಾರ್ಕ್ನಲ್ಲಿ ಬಂದೋಬಸ್ತ್ ಕೈಗೊಳ್ಳಲಾಗುತ್ತದೆ. 400 ಸಿಸಿಟಿವಿ ಕ್ಯಾಮೆರಾ ಅಳವಡಿಸಲಾಗುವುದು ಎಂದರು.
ಕರ್ನಾಟಕ ರಕ್ಷಣಾ ವೇದಿಕೆ ಪ್ರತಿಭಟನೆ ಬಗ್ಗೆ ಪ್ರತಿಕ್ರಿಯಿಸಿ, ಬುಧವಾರ ಕರವೇ ಪ್ರತಿಭಟನೆ ವೇಳೆ ನಡೆದ ವಿವಿಧ ಘಟನಾವಳಿ ಕುರಿತಂತೆ ಪ್ರತ್ಯೇಕ 10 ಎಫ್ಐಆರ್ ದಾಖಲಾಗಿದೆ. ಒಟ್ಟು 53 ಜನರನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದೇವೆ. ಕರವೇ ಅಧ್ಯಕ್ಷ ನಾರಾಯಣ ಗೌಡ ಸೇರಿದಂತೆ ಇತರ ಕರವೇ ಪದಾಧಿಕಾರಿಗಳು, ಕಾರ್ಯಕರ್ತರ ಬಂಧನವಾಗಿದೆ. ಶಾಂತಿಯುತ ಪ್ರತಿಭಟನೆಗೆ ಅವಕಾಶವಿದೆ. ಆದರೆ ಕಾನೂನು ಸುವ್ಯವಸ್ಥೆ ಕದಡುವಂತಹ ಕೆಲಸ ಮಾಡಬಾರದು ಎಂದು ಹೇಳಿದರು.
ಪ್ರತಿಭಟನೆಗೆ ನಮ್ಮ ಅಭ್ಯಂತರ ಇಲ್ಲ. ಪ್ರತಿಭಟನೆ ಮಾಡುವುದು ಒಂದು ಹಕ್ಕು. ಕೇವಲ ಫ್ರೀಡಂ ಪಾರ್ಕ್ನಲ್ಲಿ ಮಾತ್ರ ಪ್ರತಿಭಟನೆ ಮಾಡಬೇಕೆಂದು ಉಚ್ಛ ನ್ಯಾಯಾಲಯದ ಆದೇಶವಿದೆ. ಅಲ್ಲಿ ಪ್ರತಿಭಟನೆ ಮಾಡುವುದಾದರೆ ಅಂಥವರಿಗೆ ಅವಕಾಶ ಕಲ್ಪಿಸಲಾಗುತ್ತದೆ. ಆದರೆ ಯಾರು ಕಾನೂನು ಕೈಗೆತ್ತಿಕೊಳ್ಳುತ್ತಾರೋ, ಕಾನೂನು ಸುವ್ಯವಸ್ಥೆಗೆ ಧಕ್ಕೆ ಉಂಟು ಮಾಡುತ್ತಾರೋ ಅಂಥವರ ವಿರುದ್ಧ ಕಾನೂನು ರೀತ್ಯ ಕ್ರಮವಾಗುತ್ತದೆ ಎಂದು ಎಚ್ಚರಿಸಿದರು.
ಇದನ್ನೂ ಓದಿ: 'ಪ್ರತಿಭಟನೆಯ ಕಾನೂನು ಕೈಗೆತ್ತಿಕೊಳ್ಳುವುದನ್ನು ಸಹಿಸುವುದಿಲ್ಲ'