ಬೆಂಗಳೂರು: ರಾಜ್ಯದಲ್ಲಿನ ಗೋಶಾಲೆಗಳನ್ನು ಅಭಿವೃದ್ಧಿಪಡಿಸಿ ಎಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ ನೀಡಿದೆ.
150 ತಾಲೂಕುಗಳಲ್ಲಿನ ಗೋಶಾಲೆಗಳನ್ನು ಉನ್ನತ ಮಟ್ಟಕ್ಕೆ ಅಭಿವೃದ್ಧಿಪಡಿಸಿ. ಹಾಗೆಯೇ ಇನ್ನೂ ಮಳೆಯಾಗದೆ ಇರುವ 65 ತಾಲೂಕುಗಳಲ್ಲಿ ಗೋಶಾಲೆಗಳನ್ನು ಸ್ಥಾಪಿಸಿ ಎಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ. ಈ ಕುರಿತು ಹೈಕೋರ್ಟ್ ಕಾನೂನು ಸೇವಾ ಸಮಿತಿ ಹಾಗೂ ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಚೇಳೂರು ಗ್ರಾಮದ ನಿವಾಸಿ ಎ.ಮಲ್ಲಿಕಾರ್ಜುನ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ಮುಖ್ಯ ನ್ಯಾಯಮೂರ್ತಿ ಅವರಿದ್ದ ವಿಭಾಗೀಯ ನ್ಯಾಯಪೀಠದಲ್ಲಿ ನಡೆಯಿತು.
ಕಳೆದ ವಿಚಾರಣೆ ವೇಳೆ ನ್ಯಾಯಪೀಠಕ್ಕೆ ಅರ್ಜಿದಾರರು ಜಾನುವಾರುಗಳಿಗೆ ಸರಿಯಾದ ವ್ಯವಸ್ಥೆಯನ್ನು ರಾಜ್ಯ ಸರ್ಕಾರ ಮಾಡುತ್ತಿಲ್ಲ ಎಂದು ತಿಳಿಸಿದ್ದರು. ಹೀಗಾಗಿ ಇಂದು ನ್ಯಾಯಪೀಠ ವಿಚಾರಣೆ ಕೈಗೊಂಡು ಆಂಧ್ರ ಪ್ರದೇಶ, ತಮಿಳುನಾಡು, ಮಹಾರಾಷ್ಟ್ರ, ತೆಲಂಗಾಣ ರಾಜ್ಯಗಳಲ್ಲಿ ಬರಗಾಲ ಇರುವ ತಾಲೂಕುಗಳಲ್ಲಿ ಯಾವ ರೀತಿಯಾಗಿ ವ್ಯವಸ್ಥೆ ಕಲ್ಪಿಸಿದ್ದಾರೋ ಅದನ್ನು ಅಧ್ಯಯನ ಮಾಡಿ ಅದೇ ರೀತಿ ಕರ್ನಾಟಕದಲ್ಲಿ ಜಾನುವಾರುಗಳಿಗೆ ಸೂಕ್ತ ವ್ಯವಸ್ಥೆ ಕಲ್ಪಿಸಿ ಎಂದು ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ. ಅಲ್ಲದೆ ವಿಚಾರಣೆಯನ್ನು ಮುಂದೂಡಿಕೆ ಮಾಡಿದೆ.