ಬೆಂಗಳೂರು: ಗೃಹ ಸಚಿವ ಬಸವರಾಜ ಬೊಮ್ಮಾಯಿ ವಿರುದ್ಧ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿ ಸೋತಿದ್ದ ಸೋಮಣ್ಣ ಬೇವಿನಮರದ ಇಂದು ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆ ಆಗಲಿದ್ದಾರೆ. ಬೆಂಗಳೂರಿನ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಹಮ್ಮಿಕೊಂಡಿರುವ ಸಮಾರಂಭದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸಮ್ಮುಖದಲ್ಲಿಂದು ಕಾಂಗ್ರೆಸ್ ಸೇರ್ಪಡೆ ಆಗಲಿದ್ದಾರೆ.
ಕಳೆದ ವಿಧಾನಸಭೆ ಚುನಾವಣೆಯಲ್ಲಿ ಹಾವೇರಿ ಜಿಲ್ಲೆಯ ಶಿಗ್ಗಾಂವಿ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಸೋಮಣ್ಣ ಬೇವಿನಮರದ ಅವರನ್ನು ಪಕ್ಷ ನಿರಾಶೆಗೊಳಿಸಿತ್ತು. ಗೃಹ ಸಚಿವರಾಗಿರುವ ಬಸವರಾಜ್ ಬೊಮ್ಮಾಯಿಗೆ ಟಿಕೆಟ್ ನೀಡಲು ಬಿಜೆಪಿ ರಾಜ್ಯಾಧ್ಯಕ್ಷರಾಗಿದ್ದ ಬಿ ಎಸ್ ಯಡಿಯೂರಪ್ಪ ನಿರ್ಧರಿಸಿದ್ದರು. ಟಿಕೆಟ್ ಲಭಿಸದೆ ಬೇಸರಗೊಂಡ ಬೇವಿನಮರದ, ತಮ್ಮ ವಿಧಾನಪರಿಷತ್ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿದ್ದರು. ಸಾಕಷ್ಟು ಮನವೊಲಿಸುವ ಪ್ರಯತ್ನ ನಡೆದರೂ ಕೂಡ ನಾಮಪತ್ರ ವಾಪಸ್ ಪಡೆದಿರಲಿಲ್ಲ. ಕಣದಲ್ಲಿದ್ದು 7,203 ಮತ ಪಡೆದಿದ್ದು, ಚುನಾವಣೆಯಲ್ಲಿ ಬಸವರಾಜ ಬೊಮ್ಮಾಯಿ ಗೆಲುವು ಸಾಧಿಸಿದರು. ಸೋಮಣ್ಣ ಬೇವಿನಮರದ ಅವರನ್ನು ಬಿಜೆಪಿಯಿಂದ ಉಚ್ಛಾಟನೆ ಮಾಡಲಾಗಿತ್ತು.
ಸದ್ಯ ಕಾಂಗ್ರೆಸ್ ಸೇರ್ಪಡೆಗೆ ಒಲವು ವ್ಯಕ್ತಪಡಿಸಿದ್ದು, ಈ ಕುರಿತು ಕ್ಷೇತ್ರದಲ್ಲಿ ತಮ್ಮ ಬೆಂಬಲಿಗರೊಂದಿಗೆ ಚರ್ಚೆ ನಡೆಸಿ, ಕಾಂಗ್ರೆಸ್ ಪಕ್ಷದ ನಿಯಮದಂತೆ ಅರ್ಜಿ ಸಲ್ಲಿಸಿ ಸೇರ್ಪಡೆಗೆ ನಿರ್ಧರಿಸಿದ್ದಾರೆ ಎಂದು ತಿಳಿದುಬಂದಿದೆ.
ಈ ಸುದ್ದಿಯನ್ನೂ ಓದಿ: ಸೋಮಣ್ಣ ಬೇವಿನಮರದ ಕಾಂಗ್ರೆಸ್ ಸೇರ್ಪಡೆ ಸಂಬಂಧ ಮಾತುಕತೆಗೆ ಬಂದಿದ್ರಾ ಕೆ.ಬಿ. ಕೋಳಿವಾಡ?
ಅಕ್ಟೋಬರ್ 21 ರಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಪಶ್ಚಿಮ ಪದವೀಧರ ಕ್ಷೇತ್ರದ ಚುನಾವಣಾ ಪ್ರಚಾರಕ್ಕಾಗಿ ಹುಬ್ಬಳ್ಳಿಗೆ ತೆರಳಿದ ಸಂದರ್ಭ, ಅಂದು ಅಲ್ಲಿಯೇ ಸೋಮಣ್ಣ ಬೇವಿನಮರದ ತಮ್ಮ ಬೆಂಬಲಿಗರೊಂದಿಗೆ ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿತ್ತು. ಆದರೆ ಒಂದಿಷ್ಟು ತಡವಾಗಿ ಬೆಂಗಳೂರಿನಲ್ಲಿ ಇಂದು ಅವರು ಕಾಂಗ್ರೆಸ್ಗೆ ಸೇರ್ಪಡೆ ಆಗುತ್ತಿದ್ದಾರೆ.