ಬೆಂಗಳೂರು: ಇಂದು ಮೂರು ಜನರಲ್ಲಿ ಕೊರೊನಾ ಸೋಂಕು ಇರುವುದು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 14ಕ್ಕೆ ಏರಿಕೆಯಾಗಿದೆ. ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಗಳನ್ನು ಮುಚ್ಚುವ ಸಂಬಂಧ ಮಾತುಕತೆ ನಡೆಸಲಾಗಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್ ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ ಅವರು, ಹೊಸದಾಗಿ ಪತ್ತೆಯಾಗಿರುವ ಕೊರೊನಾ ಸೋಂಕಿತರಲ್ಲಿ 14 ನೇ ವ್ಯಕ್ತಿ 35 ವರ್ಷದವರು, ಅಮೆರಿಕದಿಂದ ಮಾರ್ಚ್ 10 ರಂದು ಬಂದಿದ್ದಾರೆ. ಅವರನ್ನು ಮನೆಯಲ್ಲಿ ಪ್ರತ್ಯೇಕವಾಗಿರಿಸಲಾಗಿತ್ತು, 16 ರಂದು ರೋಗ ಲಕ್ಷಣ ಕಂಡು ಬಂದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇವತ್ತು ಆ ಬಗ್ಗೆ ವರದಿ ಬಂದಿದ್ದು, ಕೊರೊನಾ ಪಾಸಿಟಿವ್ ಎಂಬುದು ದೃಢಪಟ್ಟಿದೆ.
ಅವರಿಗೆ ಪ್ರಾಥಮಿಕ ಚಿಕಿತ್ಸೆ ನೀಡುತ್ತಿದ್ದು, ಪ್ರೈಮರಿ ಕಾಂಟ್ಯಾಕ್ಟ್ ಪತ್ತೆ ಕೆಲಸ ಮಾಡಿ, ಮಾರ್ಗಸೂಚಿಯಂತೆ ಪ್ರತ್ಯೇಕವಾಗಿ ಇಡುವ ಕೆಲಸ ಮಾಡುತ್ತೇವೆ. ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಮುಚ್ಚುವ ಕುರಿತು ಸಂಪುಟದಲ್ಲಿ ಚರ್ಚೆ ನಡೆದಿದೆ, ಆದರೆ ಅದು ಕೇಂದ್ರ ಸರ್ಕಾರದ ವ್ಯಾಪ್ತಿಗೆ ಬರುವ ಕಾರಣಕ್ಕೆ ಕೇಂದ್ರದ ನಿರ್ಧಾರಕ್ಕೆ ಬಿಡಲಾಗಿದೆ ಎಂದರು.