ಬೆಂಗಳೂರು: ರಾಜ್ಯಾದ್ಯಂತ ಸರ್ಕಾರಿ ಭೂಮಿಯನ್ನು ಕಬಳಿಸಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ಸಂಬಂಧ ಭೂ ಕಬಳಿಕೆ ನಿಷೇಧ ಕಾಯ್ದೆಗೆ ತಿದ್ದುಪಡಿ ತರಲು ಸರ್ಕಾರ ನಿರ್ಧರಿಸಿದೆ. ಈ ಸಂಬಂಧ ನಾಳೆ ಬೆಳಗ್ಗೆ ವಿಧಾನಸೌಧದಲ್ಲಿ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ತಿದ್ದುಪಡಿ ಕಾಯ್ದೆಗೆ ಮಂಜೂರಾತಿ ನೀಡಲು ತೀರ್ಮಾನಿಸಲಾಗಿದೆ.
ಸರ್ಕಾರಿ ಭೂಮಿಯ ಕಬಳಿಕೆ ಕಾರ್ಯ ಎಲ್ಲೆಡೆ ನಡೆದಿದ್ದು, ಇದನ್ನು ತೆರವು ಮಾಡಲು ಕಠಿಣ ಕ್ರಮ ಕೈಗೊಳ್ಳಲೇಬೇಕೆಂದು ನಿರ್ಧರಿಸಲಾಗಿದೆ. ಈ ಹಿನ್ನೆಲೆಯಲ್ಲಿಯೇ ಭೂ ಕಬಳಿಕೆ ಕಾಯ್ದೆಗೆ ತಿದ್ದುಪಡಿ ತರಲು ಸರ್ಕಾರ ಮುಂದಾಗಿದೆ. ಇದೇ ರೀತಿ ಭೂ ಮಂಜೂರಾತಿ ಕಾರ್ಯವನ್ನು ಸರಳಗೊಳಿಸಲು ತೀರ್ಮಾನಿಸಲಾಗಿದೆ. ರಾಜ್ಯಾದ್ಯಂತ ಇರುವ ಘೋಷಿತ ಕೊಳಚೆ ಪ್ರದೇಶಗಳ ನಿವಾಸಿಗಳಿಗೆ ಹಕ್ಕು ಪತ್ರ ನೀಡುವ ಸಂಬಂಧವೂ ಸರ್ಕಾರ ಅಧಿಕೃತ ನಿರ್ಧಾರ ಕೈಗೊಳ್ಳಲಿದೆ ಎಂದು ಮೂಲಗಳು ಹೇಳಿವೆ. ಕೊರೊನಾ ಸೋಂಕಿನ ಆತಂಕದ ನಡುವೆಯೇ ಸೆಪ್ಟೆಂಬರ್ ತಿಂಗಳಲ್ಲಿ ಮುಂಗಾರು ಅಧಿವೇಶನ ನಡೆಸಲು ಸಜ್ಜಾಗಿರುವ ರಾಜ್ಯ ಸರ್ಕಾರ ನಾಳೆ ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಸ್ಥಳ ಮತ್ತು ದಿನಾಂಕವನ್ನು ಅಂತಿಮಗೊಳಿಸಲಿದೆ.
ಕೊರೊನಾ ಸೋಂಕು ಹಬ್ಬುತ್ತಿರುವ ಹಿನ್ನೆಲೆಯಲ್ಲಿ ಸಾಕಷ್ಟು ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ವಿಧಾನಮಂಡಲ ಅಧಿವೇಶನ ನಡೆಸಬೇಕಾಗಿದೆ. ಈ ನಿಟ್ಟಿನಲ್ಲಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಈಗಾಗಲೇ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ನಾಳೆ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಸ್ಥಳ ಮತ್ತು ದಿನಾಂಕ ಕುರಿತು ವಿಸ್ತೃತವಾಗಿ ಚರ್ಚೆ ನಡೆಯಲಿದ್ದು, ಅಂತಿಮ ತೀರ್ಮಾನ ಕೈಗೊಳ್ಳುವ ಸಾಧ್ಯತೆಯಿದೆ.
ಸೆಪ್ಟೆಂಬರ್ ತಿಂಗಳಲ್ಲಿ 10 ದಿನಗಳ ಕಾಲ ಅಧಿವೇಶನ ನಡೆಸಲು ಸರ್ಕಾರ ಚಿಂತನೆ ನಡೆಸಿದೆ. ಅಧಿವೇಶನಗಳ ನಡುವೆ ಆರು ತಿಂಗಳಿಗಿಂತ ಹೆಚ್ಚು ಅಂತರವಿರಬಾರದು ಎಂದು ಸಂವಿಧಾನ ತಿಳಿಸಿದೆ. ಹೀಗಾಗಿ ಸೆಪ್ಟೆಂಬರ್ ತಿಂಗಳಲ್ಲಿ ಕಡ್ಡಾಯವಾಗಿ ಅಧಿವೇಶನ ನಡೆಸಬೇಕಿದೆ. ಕೊರೊನಾ ಸೋಂಕು ಆತಂಕದ ನಡುವೆಯೂ ಅಧಿವೇಶನ ನಡೆಸುವ ಅನಿವಾರ್ಯತೆ ಸರ್ಕಾರಕ್ಕಿದೆ. ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕಾಗಿರುವ ಕಾರಣ ವಿಧಾನಸೌಧದಲ್ಲಿಯೇ ಅಧಿವೇಶನ ನಡೆಸಲಿದೆಯೇ? ಅಥವಾ ಪರ್ಯಾಯ ಸ್ಥಳದಲ್ಲಿ ನಡೆಸಲಿದೆಯೇ? ಎಂಬ ಕುತೂಹಲ ಮೂಡಿದೆ.
ರಾಜ್ಯದ ಎಲ್ಲ ಸಹಕಾರ ಸಂಘಗಳು ಹಾಗೂ ಬ್ಯಾಂಕುಗಳ ಚುನಾವಣೆಯನ್ನು ಡಿಸೆಂಬರ್ ತನಕ ಮುಂದೂಡುವ ಹಾಗೂ ಅವುಗಳಿಗೆ ಆಡಳಿತಾಧಿಕಾರಿಗಳನ್ನು ನೇಮಕ ಮಾಡುವ ತೀರ್ಮಾನಕ್ಕೂ ಸಂಪುಟ ಹಸಿರು ನಿಶಾನೆ ತೋರಲಿದೆ. ಎಸ್.ಪಿ.ಸಿ-ಟಿ.ಎಸ್.ಪಿ ಕಾರ್ಯಕ್ರಮದಡಿಯಲ್ಲಿ ಹದಿನಾಲ್ಕು ಸಂಚಾರಿ ಆರೋಗ್ಯ ಘಟಕಗಳನ್ನು ಹಾಗೂ ರಾಷ್ಟ್ರೀಯ ಆರೋಗ್ಯ ಅಭಿಯಾನ ಯೋಜನೆಯಡಿ 78 ಆರೋಗ್ಯ ಘಟಕಗಳನ್ನು ಐದು ವರ್ಷಗಳ ಕಾಲ ಮುಂದುವರಿಸುವ ಸಂಬಂಧ ಅರ್ಹ ಸೇವಾದಾರರನ್ನು ಗುರುತಿಸಲು ನಿರ್ಧರಿಸಲಾಗಿದೆ.
ಪರಿಶಿಷ್ಟ ಪಂಗಡದ ಮೆಟ್ರಿಕ್ ಪೂರ್ವ, ನಂತರದ ವಿದ್ಯಾರ್ಥಿ ನಿಲಯಗಳು ಮತ್ತು ಆಶ್ರಮ ಶಾಲೆಗಳ ವಿದ್ಯಾರ್ಥಿಗಳಿಗೆ ಊಟೋಪಚಾರ ಸೌಲಭ್ಯ, ಶುಚಿ ಸಂಭ್ರಮ ಕಿಟ್, ಶೂ ಮತ್ತು ಪುಸ್ತಕಗಳನ್ನು ಒದಗಿಸಲು 65.48 ಕೋಟಿ ರೂಪಾಯಿಗಳನ್ನು ಬಿಡುಗಡೆ ಮಾಡಲು ಸಂಪುಟ ತೀರ್ಮಾನಿಸುವ ಸಾಧ್ಯತೆ ಇದೆ. ರಾಜ್ಯದ ನಗರಸಭೆ, ಪುರಸಭೆ ಹಾಗೂ ಪಟ್ಟಣ ಪಂಚಾಯಿತಿಗಳ ಅಧ್ಯಕ್ಷ-ಉಪಾಧ್ಯಕ್ಷರ ಮೀಸಲಾತಿಯನ್ನು ನಿಗದಿಗೊಳಿಸುವ ಮಾರ್ಗಸೂಚಿಯನ್ನು ಪರಿಷ್ಕರಿಸಲಾಗಿದ್ದು, ಅದಕ್ಕೂ ಸಂಪುಟ ಸಭೆ ಒಪ್ಪಿಗೆ ನೀಡಲಿದೆ. ಚಾಮುಂಡೇಶ್ವರಿ ವಿದ್ಯುತ್ ನಿಗಮದ ಬಂಡವಾಳದ ಪ್ರಮಾಣವನ್ನು ಒಂದು ಸಾವಿರ ಕೋಟಿ ರೂಪಾಯಿಗಳಿಂದ 1250 ಕೋಟಿ ರೂಪಾಯಿಗಳಿಗೆ ಹೆಚ್ಚಿಸಲು ಸಂಪುಟ ಅನುಮೋದನೆ ನೀಡಲಿದೆ.
ಡಿ.ಜೆ. ಹಳ್ಳಿ ಗಲಭೆ ಕುರಿತು ಚರ್ಚೆ: ಡಿ.ಜೆ. ಹಳ್ಳಿ ಮತ್ತು ಕೆ.ಜಿ. ಹಳ್ಳಿಯಲ್ಲಿ ನಡೆದಿರುವ ಗಲಭೆ ಪ್ರಕರಣ ಕುರಿತು ಸಹ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಯಲಿದೆ. ತನಿಖೆ ಸೇರಿದಂತೆ ವಿವಿಧ ವಿಚಾರಗಳು ಪ್ರಸ್ತಾಪವಾಗುವ ಸಾಧ್ಯತೆ ಇದೆ. ಕಾಂಗ್ರೆಸ್‌ನ ಆಂತರಿಕ ಭಿನ್ನಾಭಿಪ್ರಾಯ ಗಲಭೆಗೆ ಕಾರಣ ಎಂಬುದು ಮೇಲ್ನೋಟಕ್ಕೆ ಕಂಡು ಬಂದಿರುವ ಹಿನ್ನೆಲೆಯಲ್ಲಿ ಈ ಬಗ್ಗೆಯೂ ಚರ್ಚೆ ನಡೆಯಲಿದೆ. ಅಲ್ಲದೇ, ಗಲಭೆಯಲ್ಲಿ ಎಸ್‌ಡಿಪಿಐ ಕೈವಾಡ ಇರುವುದು ಮೇಲ್ನೋಟಕ್ಕೆ ಕಂಡು ಬಂದಿದೆ. ಹೀಗಾಗಿ ಎಸ್‌ಡಿಪಿಐ ಸಂಘಟನೆ ನಿಷೇಧಿಸುವ ಕುರಿತು ಚರ್ಚೆ ನಡೆಯಲಿದೆ ಎಂದು ಹೇಳಲಾಗುತ್ತಿದೆ.
ಕೊರೊನಾ ಕುರಿತು ಚರ್ಚೆ: ಕೊರೊನಾ ಸೋಂಕು ಹೆಚ್ಚಾಗುತ್ತಿರುವ ಕಾರಣ ನಿಯಂತ್ರಣ ಮಾಡುವ ಸಂಬಂಧ ಸಚಿವ ಸಂಪುಟ ಸಭೆಯಲ್ಲಿ ಸಮಾಲೋಚನೆ ನಡೆಯಲಿದೆ. ಬೆಂಗಳೂರಿನಲ್ಲಿ ಸೋಂಕು ಹೆಚ್ಚುತ್ತಿದ್ದು, ಈ ಹಿನ್ನೆಲೆಯಲ್ಲಿ ಕೈಗೊಳ್ಳಬಹುದಾದ ಕ್ರಮಗಳ ಕುರಿತು ಚರ್ಚೆ ನಡೆಯಲಿದೆ. ರಾಜ್ಯದ ಇತರೆ ಜಿಲ್ಲೆಯಲ್ಲಿರುವ ಸೋಂಕಿನ ಪರಿಸ್ಥಿತಿ ಕುರಿತು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸಭೆಯಲ್ಲಿ ಮಾಹಿತಿ ಪಡೆದುಕೊಳ್ಳಲಿದ್ದಾರೆ.
ರಾಜ್ಯದಲ್ಲಿ ಪ್ರವಾಹ ಪರಿಸ್ಥಿತಿ ತಲೆದೋರಿರುವ ಕಾರಣ ಆ ಬಗ್ಗೆಯೂ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಯಲಿದೆ. ಪ್ರವಾಹ ಪೀಡಿತ ಸ್ಥಳಗಳಲ್ಲಿ ಅನುದಾನ ಬಳಕೆ ಬಗ್ಗೆಯೂ ಚರ್ಚಿಸುವ ಸಾಧ್ಯತೆ ಇದೆ ಎನ್ನಲಾಗಿದೆ. ಕೆಪಿಎಸ್‌ಸಿ ನೇಮಕಾತಿ ಕುರಿತು ಪಿ.ಸಿ. ಹೋಟಾ ಸಮಿತಿಯ ಬಾಕಿ ಶಿಫಾರಸುಗಳನ್ನು ಅನುಷ್ಠಾನಗೊಳಿಸುವ ಬಗ್ಗೆ ಚರ್ಚೆ ನಡೆಸಿ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ.