ಬೆಂಗಳೂರು: ಅಯೋಧ್ಯೆಯಲ್ಲಿ ಭವ್ಯ ಶ್ರೀರಾಮ ಮಂದಿರ ನಿರ್ಮಾಣದ ಐತಿಹಾಸಿಕ ಭೂಮಿ ಪೂಜೆ ಸಂದರ್ಭದಲ್ಲಿ ನಾವೆಲ್ಲರೂ ಜವಾಬ್ದಾರಿಯನ್ನು ಅರಿತು ಸುರಕ್ಷತೆಯಿಂದ ನಮ್ಮ ಮನೆ ಮನಗಳಲ್ಲಿ ಹೆಮ್ಮೆಯಿಂದ ಸಂಭ್ರಮಿಸೋಣ ಎಂದು ಪಕ್ಷದ ಕಾರ್ಯಕರ್ತರಿಗೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಕರೆ ನೀಡಿದ್ದಾರೆ.
ಕಾರ್ಯಕರ್ತರು ಪ್ರತಿ ಮನೆ ಮನೆಗಳಲ್ಲಿ ದೀಪ ಹಚ್ಚಿ ಸಂಭ್ರಮಿಸಬೇಕು. ನಾಳೆ ಬೆಳಗ್ಗೆ 8 ಗಂಟೆಯಿಂದ ಮಧ್ಯಾಹ್ನ 12 ಗಂಟೆಯವರೆಗೆ ಭೂಮಿ ಪೂಜೆ ಕಾರ್ಯಕ್ರಮ ನಡೆಯಲಿದ್ದು, ಕುಟುಂಬ ಸದಸ್ಯರು ಸೇರಿ ಈ ಕಾರ್ಯಕ್ರಮದ ನೇರ ಪ್ರಸಾರವನ್ನು ವೀಕ್ಷಿಸಬೇಕು. ದೇವಸ್ಥಾನಗಳಲ್ಲಿ ಸಾಮಾಜಿಕ ಅಂತರ ಕಾಯ್ದುಕೊಂಡು ಕೊರೊನಾ ಸುರಕ್ಷತಾ ನಿಯಮಗಳನ್ನು ಪಾಲಿಸುತ್ತಾ ದೀಪಗಳನ್ನು ಹಚ್ಚಿ ಪೂಜೆ ಸಲ್ಲಿಸಬೇಕು. ಪಕ್ಷದ ಕಾರ್ಯಕರ್ತರು ಬಹಿರಂಗವಾಗಿ ಯಾವುದೇ ರೀತಿಯ ಮೆರವಣಿಗೆ ಮಾಡುವುದು. ಪಟಾಕಿ ಹಚ್ಚುವುದನ್ನು ಮಾಡಬಾರದು. ಸಾಮಾಜಿಕ ಅಂತರ, ಮಾಸ್ಕ್ ಧರಿಸುವಿಕೆ, ಸ್ಯಾನಿಟೈಸರ್ ಬಳಸುವಿಕೆ ಕಡ್ಡಾಯವಾಗಿರಬೇಕು ಎಂದು ಹೇಳಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಹಸ್ತದಿಂದ ನೆರವೇರಲಿರುವ ಈ ಭೂಮಿ ಪೂಜೆ ಕಾರ್ಯಕ್ರಮದ ಸಾಮಾಜಿಕ ಜಾಲತಾಣದ ಲಿಂಕ್ಗಳನ್ನು ಹೆಚ್ಚಿನ ಜನರಿಗೆ ತಲುಪಿಸುವ ಪ್ರಯತ್ನ ಮಾಡಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು. ಧರ್ಮನಗರಿ ಅಯೋಧ್ಯೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಭವ್ಯ ಶ್ರೀರಾಮಮಂದಿರ ನಿರ್ಮಾಣಕ್ಕೆ ಅಡಿಗಲ್ಲು ಹಾಕುವ ಶುಭಗಳಿಗೆಯಲ್ಲಿ ಎಲ್ಲಾ ಕಾರ್ಯಕರ್ತರು ಇಂದಿನಿಂದ ಸ್ವದೇಶಿ, ಸ್ವಭಾಷಾ ಮತ್ತು ಸ್ವಭೂಷಾ ಪಾಲಿಸುವ ಸಂಕಲ್ಪ ಮಾಡಬೇಕು. ತನ್ಮೂಲಕ ಭಾರತ ಆತ್ಮನಿರ್ಭರವಾಗಬೇಕು ಎಂದು ಪತ್ರಿಕಾ ಹೇಳಿಕೆ ಮೂಲಕ ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ.