ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಆಯುಕ್ತರಾಗಿದ್ದ ಮಂಜುನಾಥ್ ಪ್ರಸಾದ್ ಅವರನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಬಿಬಿಎಂಪಿ ನೂತನ ಆಯುಕ್ತರಾಗಿ ಐಎಎಸ್ ಅಧಿಕಾರಿ ಬಿ.ಹೆಚ್. ಅನಿಲ್ ಕುಮಾರ್ ಅವರನ್ನು ನೇಮಿಸಲಾಗಿದೆ.
ಐಎಎಸ್ ಅಧಿಕಾರಿ ಬಿ.ಹೆಚ್. ಅನಿಲ್ ಕುಮಾರ್ ಹಿಂದೆ ಸರ್ಕಾರದ ನಗರಾಭಿವೃದ್ಧಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಇನ್ನು ಮುಂದೆ ಬಿಬಿಎಂಪಿಯ ಸಾರಥ್ಯ ವಹಿಸಲಿದ್ದಾರೆ. ಜಲ ಮಂಡಳಿಯ ಅಧ್ಯಕ್ಷರಾಗಿದ್ದ ತುಷಾರ್ ಗಿರಿನಾಥ್ ಅವರನ್ನು ಸರ್ಕಾರ ವರ್ಗಾವಣೆಗೊಳಿಸಿದೆ. ಜಲಮಂಡಳಿಗೆ ನೂತನ ಅಧ್ಯಕ್ಷರಾಗಿ ಐಎಎಸ್ ಅಧಿಕಾರಿ ಎಂ. ಮಹೇಶ್ವರ್ ರಾವ್ ಅವರನ್ನು ನೇಮಕ ಮಾಡಲಾಗಿದೆ. ಮಹೇಶ್ವರ್ ಅವರು ಈ ಹಿಂದೆ ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಯ ಕಾರ್ಯದರ್ಶಿಯಾಗಿದ್ದರು.