ಬೆಂಗಳೂರು: ಆಟೋರಿಕ್ಷಾ ಮತ್ತು ಟ್ಯಾಕ್ಷಿ ವಾಹನ ಚಾಲಕರಿಗೆ 5,000 ರೂ.ಗಳ ಪರಿಹಾರ ಧನ ಒದಗಿಸಲು ಅಗತ್ಯವಿರುವ ಎಲ್ಲ ಕ್ರಮವಹಿಸಬೇಕು ಹಾಗೂ ಪರಿಹಾರ ಧನ ವಿತರಣೆಯಲ್ಲಿ ಯಾವುದೇ ವಿಳಂಬವಾಗಬಾರದು ಎಂದು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದರು.
ಗೃಹ ಕಚೇರಿ ಕೃಷ್ಣಾದಲ್ಲಿ ಸಾರಿಗೆ ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಿದ ಸಿಎಂ, ರಿಕ್ಷಾ ಹಾಗೂ ಟ್ಯಾಕ್ಸಿ ಚಾಲಕರಿಂದ ಪರಿಹಾರ ಧನಕ್ಕೆ ಒಟ್ಟು 1,98,929 ಅರ್ಜಿಗಳು ಸ್ವೀಕೃತವಾಗಿವೆ. ಈಗಾಗಲೇ ವಾಹನ ಚಾಲಕರ ಬ್ಯಾಂಕ್ ಖಾತೆಗೆ ಪರಿಹಾರ ಮೊತ್ತ ಜಮಾ ಮಾಡುವ ಪ್ರಕ್ರಿಯೆಯೂ ಚಾಲ್ತಿಯಲ್ಲಿದೆ ಎಂದು ಅಧಿಕಾರಿಗಳು ತಿಳಿಸಿದರು.
ಕೋವಿಡ್-19 ಹಿನ್ನೆಲೆಯಲ್ಲಿ ಪ್ರಯಾಣಿಕರು ಸಾರಿಗೆ ಸಂಸ್ಥೆ ಬಸ್‌ಗಳನ್ನು ಬಳಸಲು ಹಿಂಜರಿಯುತ್ತಿದ್ದಾರೆ. ಸಾರಿಗೆ ಸಂಸ್ಥೆಯ ಬಸ್‌ಗಳಲ್ಲಿ ಪ್ರಯಾಣಿಕರ ಸಂಖ್ಯೆಯನ್ನು ಹೆಚ್ಚಿಸಲು ಸಾರ್ವಜನಿಕರಲ್ಲಿ ಆತ್ಮವಿಶ್ವಾಸ ಮೂಡಿಸಬೇಕು. ಸಾರಿಗೆ ಇಲಾಖೆಯ ವಾಹನಗಳನ್ನು ಸೂಕ್ತ ರೀತಿ ಸ್ವಚ್ಛಗೊಳಿಸುವ ಕೆಲಸವೂ ಆಗಬೇಕು ಎಂದು ಮುಖ್ಯಮಂತ್ರಿ ಸೂಚಿಸಿದರು.
ಮಹಾರಾಷ್ಟ್ರ ಬಿಟ್ಟು ಅಂತರ ರಾಜ್ಯ ಸಾರಿಗೆ ಸೇವೆಯನ್ನು ಕಲ್ಪಿಸಲು ಇತರೆ ರಾಜ್ಯಗಳ ಸಾರಿಗೆ ಸಂಸ್ಥೆಗಳೊಂದಿಗೆ ಸಂಪರ್ಕಿಸಿ ಬಸ್ಗಳ ಸಂಚಾರ ವ್ಯವಸ್ಥೆ ಮಾಡುವಂತೆ ಮುಖ್ಯಮಂತ್ರಿಗಳು ಸೂಚಿಸಿದರು. ಸಾಮಾಜಿಕ ಅಂತರ ಕಾಪಾಡುವ ನಿರ್ದೇಶನ ಇರುವುದರಿಂದ ಬಸ್‌ಗಳಲ್ಲಿ ಕಡಿಮೆ ಜನರನ್ನು ಹತ್ತಿಸಿಕೊಳ್ಳುವ ಬಗ್ಗೆ ಪರಿಣಿತರೊಂದಿಗೆ ಚರ್ಚಿಸಿ ತೀರ್ಮಾನ ಕೈಗೊಳ್ಳಲು ಅವರು ತಿಳಿಸಿದರು.
ಕೋವಿಡ್-19 ಹಿನ್ನೆಲೆಯಲ್ಲಿ ನಾಲ್ಕು ನಿಗಮಗಳಲ್ಲಿ ನಷ್ಟ ಉಂಟಾಗಿದೆ. ಮುಂದಿನ ದಿನಗಳಲ್ಲಿ ಪ್ರಯಾಣಿಕರ ಓಡಾಟದಿಂದ ಪರಿಸ್ಥಿತಿ ಸುಧಾರಿಸಬಹುದೆಂಬ ನಿರೀಕ್ಷೆ ಇದೆ. ಬೆಂಗಳೂರು ನಗರ ಪ್ರದೇಶದಿಂದ ರೈಲ್ವೆ ನಿಲ್ದಾಣಕ್ಕೆ ತಲುಪಿಸುವ ವ್ಯವಸ್ಥೆಗೆ ಹಾಗೂ ವಿಮಾನ ನಿಲ್ದಾಣದಿಂದ ನಗರದ ವಿವಿಧ ಪ್ರದೇಶಗಳಿಗೆ ಕಳುಹಿಸಲು ಬಿಎಂಟಿಸಿ ಬಸ್ಗಳನ್ನು ಬಳಸಿಕೊಳ್ಳಲಾಗಿದೆ. ವಲಸೆ ಕಾರ್ಮಿಕರನ್ನು ಅವರ ಊರಿಗೆ ಕಳುಹಿಸಲು ಸಾರಿಗೆ ಬಸ್‍ಗಳನ್ನು ಕಳುಹಿಸುವ ವ್ಯವಸ್ಥೆ ಮಾಡಲಾಯಿತು ಎಂದು ಅಧಿಕಾರಿಗಳು ಮಾಹಿತಿ ನೀಡಿದರು.
ಪ್ರಾದೇಶಿಕ ಸಾರಿಗೆ ಇಲಾಖೆಯಲ್ಲಿ ಕೋವಿಡ್-19ನಿಂದಾಗಿ ರಾಜಸ್ವ ಸಂಗ್ರಹ ಕುಂಠಿತವಾಗಿದೆ. ಮುಂದಿನ ದಿನಗಳಲ್ಲಿ ಉಂಟಾಗಿರುವ ನಷ್ಟವನ್ನು ಸರಿದೂಗಿಸುವಂತೆ ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ಸೂಚಿಸಿದರು. ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ಕೋವಿಡ್-19 ಹಿನ್ನೆಲೆಯಲ್ಲಿ ಸಾರಿಗೆ ಇಲಾಖೆ ಕೈಗೊಂಡ ಕ್ರಮಗಳ ಕುರಿತ ವಿಡಿಯೋ ವೀಕ್ಷಿಸಿ, ಸಾರಿಗೆ ಸಂಪದ ಸಂಚಿಕೆ ಬಿಡುಗಡೆ ಮಾಡಿದರು.
ಉಪಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವ ಲಕ್ಷ್ಮಣ ಸವದಿ, ಈಶಾನ್ಯ ಸಾರಿಗೆ ಸಂಸ್ಥೆ ಅಧ್ಯಕ್ಷ ವಿ ಎಸ್ ಪಾಟೀಲ್, ಬಿಎಂಟಿಸಿ ಅಧ್ಯಕ್ಷ ನಂದೀಶ್ ರೆಡ್ಡಿ, ಮುಖ್ಯ ಕಾರ್ಯದರ್ಶಿ ಟಿ ಎಂ ವಿಜಯಭಾಸ್ಕರ್, ಸಾರಿಗೆ ಇಲಾಖೆ ಪ್ರಧಾನ ಕಾರ್ಯದರ್ಶಿ ಅಜುಂ ಪರ್ವೇಜ್, ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ವ್ಯವಸ್ಥಾಪಕ ನಿರ್ದೇಶಕ ಶಿವಯೋಗಿ ಸಿ ಕಳಸದ್, ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕಿ ಸಿ ಶಿಖಾ, ಆರ್ಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಐಎಸ್‌ಎನ್ ಪ್ರಸಾದ್ ಉಪಸ್ಥಿತರಿದ್ದರು.