ಬೆಂಗಳೂರು: ತುಮಕೂರು ನಗರದ ರಸ್ತೆಗಳಲ್ಲಿ ಉಂಟಾಗಿರುವ ಅಪಾಯಕಾರಿ ಗುಂಡಿಗಳನ್ನು ಮುಚ್ಚಲು ಕ್ರಮ ಕೈಗೊಳ್ಳಲಾಗಿದೆ ಎಂದು ತುಮಕೂರು ಮಹಾನಗರ ಪಾಲಿಕೆ ಹೈಕೋರ್ಟ್‌ಗೆ ಮಾಹಿತಿ ನೀಡಿದೆ. ತುಮಕೂರಿನ ವಕೀಲ ಎಲ್ ರಮೇಶ್ ನಾಯಕ್ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯು ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಮತ್ತು ಹಾಗೂ ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್ ಅವರಿದ್ದ ವಿಭಾಗೀಯ ನ್ಯಾಯಪೀಠದ ಮುಂದೆ ವಿಚಾರಣೆಗೆ ಬಂದಿತ್ತು.
ತುಮಕೂರು ನಗರದಲ್ಲಿರುವ ರಸ್ತೆ ಗುಂಡಿಗಳ ವಿಚಾರವಾಗಿ ಸ್ಥಳ ಪರಿಶೀಲನೆ ನಡೆಸಿ ವಸ್ತುಸ್ಥಿತಿ ವರದಿ ಸಲ್ಲಿಸುವಂತೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರಕ್ಕೆ ಈ ಹಿಂದೆ ನ್ಯಾಯಾಲಯ ನಿರ್ದೇಶನ ನೀಡಿತ್ತು. ಅದರಂತೆ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಾಲಯಕ್ಕೆ ವರದಿ ಸಲ್ಲಿಸಿದರು.
ಕಾನೂನು ಸೇವಾ ಪ್ರಾಧಿಕಾರವೂ ಸಂಬಂಧಪಟ್ಟ ಅಧಿಕಾರಿಗಳ ತಂಡದ ಜೊತೆಗೆ ಸ್ಥಳ ಪರಿಶೀಲನೆ ನಡೆಸಿದೆ. 38 ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲಿಸಲಾಗಿದೆ. ಆ ಪೈಕಿ 37 ಕಡೆ ರಸ್ತೆಗಳಲ್ಲಿ ಗುಂಡಿಗಳು ಕಂಡು ಬಂದಿವೆ ಎಂದು ವರದಿಯಲ್ಲಿ ಹೇಳಲಾಗಿದೆ.
ಈ ವೇಳೆ ತುಮಕೂರು ಪಾಲಿಕೆ ಪರ ವಕೀಲ ಆರ್. ಸುಬ್ರಮಣ್ಯ ವಾದ ಮಂಡಿಸಿ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿದಾಗ ಪಾಲಿಕೆ ಅಧಿಕಾರಿಗಳು ಸಹ ಜೊತೆಗಿದ್ದು, ವಿಷಯವು ಪಾಲಿಕೆ ಅಧಿಕಾರಿಗಳ ಗಮನಕ್ಕೂ ಬಂದಿದೆ. ಆ ನಿಟ್ಟಿನಲ್ಲಿ ತಕ್ಷಣ ಕ್ರಮ ಕೈಗೊಂಡು ರಸ್ತೆ ಗುಂಡಿಗಳನ್ನು ಮುಚ್ಚುವ ಕಾರ್ಯ ಕೈಗೊಳ್ಳಲಾಗಿದೆ ಎಂದು ಹೇಳಿದರು. ಇದೇ ವೇಳೆ ಸಂಬಂಧಪಟ್ಟ ವರದಿಯನ್ನೂ ನ್ಯಾಯಾಲಯಕ್ಕೆ ಸಲ್ಲಿಸಿದರು.
ಈ ಅಂಶ ದಾಖಲಿಸಿಕೊಂಡ ನ್ಯಾಯಪೀಠ, ಪಾಲಿಕೆಯ ವರದಿ ಆಧರಿಸಿ ಮತ್ತೊಮ್ಮೆ ಸ್ಥಳ ಪರಿಶೀಲನೆ ನಡೆಸಿ, ಎರಡು ವಾರಗಳಲ್ಲಿ ಹೊಸದಾಗಿ ವರದಿ ಸಲ್ಲಿಸುವಂತೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರಕ್ಕೆ ನಿರ್ದೇಶನ ನೀಡಿ ವಿಚಾರಣೆಯನ್ನು ಫೆಬ್ರವರಿ 2ಕ್ಕೆ ಮುಂದೂಡಿದೆ.
ಇದನ್ನೂ ಓದಿ: ರಾಜ್ಯದಲ್ಲಿ ವೈದ್ಯರು ಸೇರಿದಂತೆ ವೈದ್ಯಕೀಯ ಸಿಬ್ಬಂದಿ ಕೊರತೆ: ಕೇಂದ್ರ, ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್