ಬೆಂಗಳೂರು : ಕಲಬುರಗಿಯಲ್ಲಿ ಶೌಚಗುಂಡಿ ಸ್ವಚ್ಛಗೊಳಿಸುವ ವೇಳೆ ಇಬ್ಬರು ಕಾರ್ಮಿಕರು ಮೃತಪಟ್ಟಿರುವ ಪ್ರಕರಣದ ತನಿಖಾ ವರದಿಯನ್ನು ಫೆ.17ರೊಳಗೆ ನ್ಯಾಯಾಲಯಕ್ಕೆ ಸಲ್ಲಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿದೆ.
ಈ ಕುರಿತು ಎಐಸಿಟಿಯು ಸಂಘಟನೆ ಹಾಗೂ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಇಂದು ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕ ನೇತೃತ್ವದ ಪೀಠ ವಿಚಾರಣೆ ನಡೆಸಿತು. ಕೆಲ ಕಾಲ ವಾದ ಆಲಿಸಿದ ಪೀಠ, ಪ್ರಕರಣದ ತನಿಖಾ ವರದಿಯನ್ನು ಸಲ್ಲಿಸಲು ಸೂಚಿಸಿ ವಿಚಾರಣೆಯನ್ನು ಫೆ.17ಕ್ಕೆ ಮುಂದೂಡಿತು.
ಇದನ್ನೂ ಓದಿ...ವಿಜಯನಗರ ಜಿಲ್ಲೆ ರಚನೆ ಪ್ರಶ್ನಿಸಿ ಹೈಕೋರ್ಟ್ಗೆ ಪಿಐಎಲ್..
ಅರ್ಜಿ ಹಿಂದಿನ ವಿಚಾರಣೆ ವೇಳೆ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದ ಪೀಠ, ಮನುಷ್ಯರಿಂದ ಮಲಗುಂಡಿ ಸ್ವಚ್ಛಗೊಳಿಸುವ ಪದ್ಧತಿ ನಿಷೇಧಿಸುವ ಕುರಿತು ನ್ಯಾಯಾಲಯಗಳು ನೀಡಿರುವ ಆದೇಶವನ್ನು ಸರ್ಕಾರ ಪಾಲಿಸುತ್ತಿಲ್ಲ. ಪದೇಪದೆ ಸೂಚಿಸಿದರೂ ರಾಜ್ಯದಲ್ಲಿ ಕಾಯ್ದೆ ಪಾಲನೆಯಾಗುತ್ತಿಲ್ಲ.
ಈ ವಿಚಾರ ಗಂಭೀರವಾಗಿ ಪರಿಗಣಿಸದೆ ಹೋದರೆ ಸರ್ಕಾರದ ವಿರುದ್ಧ ನ್ಯಾಯಾಂಗ ನಿಂದನೆ ಅಡಿ ಕ್ರಮ ಜರುಗಿಸುತ್ತೇವೆ ಎಂದು ಎಚ್ಚರಿಸಿತು. ಕಲಬುರಗಿಯ ಕೈಲಾಶ್ ನಗರದಲ್ಲಿ ಜ.28ರಂದು ಮ್ಯಾನ್‌ಹೋಲ್ ಸ್ವಚ್ಛ ಮಾಡಲು 18 ಅಡಿ ಆಳದ ಗುಂಡಿಗೆ ಇಳಿದಿದ್ದ ಇಬ್ಬರು ಕಾರ್ಮಿಕರು ಉಸಿರುಗಟ್ಟಿ ಮೃತಪಟ್ಟಿದ್ದರು.