ಬೆಂಗಳೂರು : ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮ ರಾಜ್ಯಾದ್ಯಂತ ಸುರಿಯುತ್ತಿರುವ ಪೂರ್ವ ಮುಂಗಾರು ಮಳೆ, ಇನ್ನೆರಡು ದಿನ ಮುಂದುವರೆಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇಂದು ಕರಾವಳಿಯ ಹಲವು ಕಡೆಗಳಲ್ಲಿ ಹಾಗು ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಮೂಲ್ಕಿ, ಉತ್ತರ ಕನ್ನಡ ಜಿಲ್ಲೆಯ ಗೋಕರ್ಣ, ಕೊಡಗು ಜಿಲ್ಲೆಯ ಭಾಗಮಂಡಲದಲ್ಲಿ ಅತಿ ಹೆಚ್ಚು ಮಳೆಯಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಮುಂದಿನ ಎರಡು ದಿನ ಕರಾವಳಿಯ ಹಲವು ಕಡೆಗಳಲ್ಲಿ, ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಮತ್ತು ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದಿದೆ. ಈ ನಡುವೆ ರಾಜ್ಯದಲ್ಲಿ ಅತೀ ಹೆಚ್ಚಿನ ಉಷ್ಣಾಂಶ ಬೀದರ್ ಜಿಲ್ಲೆಯಲ್ಲಿ 35.0 ಡಿಗ್ರಿ.ಸೆ. ದಾಖಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ : ಕರಾವಳಿಯ ಜಿಲ್ಲೆಗಳು, ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ, ಹಾವೇರಿ, ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಚಾಮರಾಜನಗರ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ ಮತ್ತು ತುಮಕೂರು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗುಡುಗು ಮಿಂಚು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಮೀನುಗಾರರಿಗೆ ಎಚ್ಚರಿಕೆ : ಮುಂದಿನ 24 ಗಂಟೆಗಳಲ್ಲಿ ಕರ್ನಾಟಕದ ಕರಾವಳಿ ತೀರದಲ್ಲಿ ಬಿರುಗಾಳಿಯ ವೇಗವು ಪ್ರತಿ ಗಂಟೆಗೆ 40-50 ಕಿ.ಮೀ ಇರುವ ಸಾಧ್ಯತೆಯಿದ್ದು, ಮೀನುಗಾರರು ಈ ಅವಧಿಯಲ್ಲಿ ಸಮುದ್ರಕ್ಕೆ ತೆರಳದಂತೆ ಸೂಚಿಸಲಾಗಿದೆ.
ರಾಜಧಾನಿಯಲ್ಲಿ ಮೋಡ ಕವಿದ ವಾತಾವರಣ : ಮುಂದಿನ ಒಂದೆರಡು ದಿನ ರಾಜಧಾನಿಯಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರಲಿದ್ದು, ಒಂದೆರಡು ಬಾರಿ ಗುಡುಗುಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ. ಗರಿಷ್ಠ ಉಷ್ಣಾಂಶ 27 ಮತ್ತು ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ಇರಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.