ಬೆಂಗಳೂರು: ಪ್ರಥಮ ದರ್ಜೆ ಸಹಾಯಕ (ಎಫ್ಡಿಎ) ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಹಗರಣ ಸಂಬಂಧ ಸಿಸಿಬಿ ಪೊಲೀಸರು ಮತ್ತೊಬ್ಬರು ಆರೋಪಿಗಳನ್ನು ಬಲೆಗೆ ಕೆಡವಿದ್ದು, ಈ ಮೂಲಕ ಬಂಧಿತರ ಸಂಖ್ಯೆ 16ಕ್ಕೆ ಏರಿದಂತಾಗಿದೆ.
ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್ಸಿ)ದಲ್ಲಿ ದ್ವಿತೀಯ ದರ್ಜೆ ಸಹಾಯಕ ರಮೇಶ್ ಹಾಗೂ ಕಂಟ್ರೋಲ್ ಆಫ್ ಎಕ್ಸಾಂ ಡಿವಿಷನ್ನಲ್ಲಿ ಸ್ಟೆನೋಗ್ರಾಫರ್ ಆಗಿ ಕೆಲಸ ಮಾಡುತ್ತಿದ್ದ ಸನಾ ಬೇಡಿ ಎಂಬುವರನ್ನು ಬಂಧಿಸಿ ಹೆಚ್ಚಿನ ವಿಚಾರಣೆಗೊಳಪಡಿಸಲಾಗಿದೆ. ಇವರಿಬ್ಬರು ಪ್ರಕರಣದ ಕಿಂಗ್ ಪಿನ್ಗಳೆಂದು ಹೇಳಲಾಗ್ತಿದೆ.
ಇಬ್ಬರು ಆರೋಪಿಗಳು ಕೆಪಿಎಸ್ಸಿಯಲ್ಲಿಯೇ ಕೆಲಸ ಮಾಡುತ್ತಿದ್ದರು. ಕಳೆದ ಭಾನುವಾರ ನಡೆಯಬೇಕಿದ್ದ ಪರೀಕ್ಷೆಯ ಪ್ರಶ್ನೆಪತ್ರಿಕೆಯ ಟೈಪ್ ಮಾಡುವ ಸ್ಟೆನೋಗ್ರಾಫರ್ ಆಗಿ ಕೆಲಸ ಮಾಡುತ್ತಿದ್ದರು.
ಸ್ವತಃ ಆರೋಪಿ ರಮೇಶ್ ಎಫ್ಡಿಎ ಪರೀಕ್ಷೆ ಬರೆಯಲು ಸಿದ್ಧತೆ ನಡೆಸಿದ್ದ, ಹೀಗಾಗಿ ಅಕ್ರಮವಾಗಿ ಪ್ರಶ್ನೆ ಪತ್ರಿಕೆ ಪಡೆದುಕೊಂಡಿದ್ದ, ಈತ ಬಳಿಕ ಸ್ನೇಹಿತ ಆರೋಪಿ ಚಂದ್ರುಗೆ ಪ್ರಶ್ನೆ ಪತ್ರಿಕೆ ನೀಡಿದ್ದ, ಬಳಿಕ ಒಬ್ಬರಿಂದ ಒಬ್ಬರಿಗೆ ಪ್ರಶ್ನೆ ಪತ್ರಿಕೆ ಲೀಕ್ ಆಗಿದೆ ಎಂದು ಸಿಸಿಬಿ ಜಂಟಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ: FDA ಪ್ರಶ್ನೆ ಪತ್ರಿಕೆ ಸೋರಿಕೆ ಹಿಂದೆ ಎಷ್ಟೇ ಪ್ರಭಾವಿಗಳಿದ್ದರೂ ಕ್ರಮ: ಬಸವರಾಜ ಬೊಮ್ಮಾಯಿ