ಬೆಂಗಳೂರು: ನಗರದಲ್ಲಿ ಎರಡು ಪ್ರತ್ಯೇಕ ಅಪಘಾತ ಪ್ರಕರಣಗಳಲ್ಲಿ ಇಬ್ಬರು ಬೈಕ್ ಸವಾರರು ಸಾವನ್ನಪ್ಪಿದ್ದಾರೆ. ಇಬ್ಬಲೂರಿನ ಬಳಿ ಬೈಕ್‌ನಲ್ಲಿ ಹೋಗುತ್ತಿರುವಾಗ ನಿಯಂತ್ರಣ ತಪ್ಪಿ ಟೆಕ್ಕಿ ಮೃತಪಟ್ಟಿದ್ದಾರೆ.
ಶಿವಣ್ಣ (33) ಮೃತಪಟ್ಟಿರುವ ಟೆಕ್ಕಿ. ಅವರು ಕೆಲಸ ಮುಗಿಸಿಕೊಂಡು ಮನೆಗೆ ಬೈಕ್‌ನಲ್ಲಿ ಹೋಗುತ್ತಿದ್ದಾಗ ಇಬ್ಬಲೂರು ಬಳಿ ಬೈಕ್ ನಿಯಂತ್ರಣ ತಪ್ಪಿ ರಸ್ತೆ ಮೇಲೆ ಬಿದ್ದಿದ್ದರು. ಬಿದ್ದ ರಭಸಕ್ಕೆ ತಲೆ ಹಾಗೂ ಹೊಟ್ಟೆಗೆ ಗಂಭೀರ ಗಾಯಗೊಂಡಿದ್ದರು. ಕೂಡಲೇ ರಕ್ತದ ಮಡುವಿನಲ್ಲಿ ಬಿದ್ದಿದ್ದ ಶಿವಣ್ಣ ಅವರನ್ನು ಸಾರ್ವಜನಿಕರು ಕೊಲಂಬಿಯಾ ಏಷಿಯಾ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೇ ಟೆಕ್ಕಿ ಮೃತಪಟ್ಟಿದ್ದಾರೆ. ಈ ಸಂಬಂಧ ಹೆಚ್‌ಎಸ್‌ಆರ್ ಲೇಔಟ್ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮತ್ತೊಂದೆಡೆ ಪೀಣ್ಯ 2ನೇ ಹಂತದ ಮೇಲ್ಸೆತುವೆ ಬಳಿ ಅತಿ ವೇಗವಾಗಿ ಚಲಿಸಿದ ಟ್ರಕ್ವೊಂದು ಬೈಕ್ ಸವಾರನ ಪ್ರಾಣ ತೆಗೆದಿದೆ. ವೇಗವಾಗಿ ಬಂದ ಟ್ರಕ್ ಚಾಲಕ ಹಿಂಬದಿಯಿಂದ ಬೈಕಿಗೆ ಡಿಕ್ಕಿ ಹೊಡೆದಿದ್ದು, 35 ವರ್ಷದ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಮೃತನ ಹೆಸರು ಹಾಗೂ ವಿಳಾಸ ತಿಳಿದುಬಂದಿಲ್ಲ. ಘಟನೆ ಸಂಬಂಧ ಪೀಣ್ಯ ಸಂಚಾರಿ ಪೊಲೀಸರು ಸ್ಥಳ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.